ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ 2:36-41
ಪೇತ್ರನು ಜನಸಮೂಹವನ್ನು ಉದ್ದೇಶಿಸಿ ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: " ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಪ್ರಭುವನ್ನಾಗಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸೀದ್ದಾರೆ. " ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, " ಸಹೋದರರೇ, ಈಗ ನಾವು ಮಾಡಬೇಕಾದುದು ಏನು? " ಎಂದು ಕೇಳಿದರು. ಅದಕ್ಕೆ ಪೇತ್ರನು, " ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ, ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ, ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ, " ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. 'ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ, ' ಎಂದು ಎಚ್ಚರಿಸಿದನು. ಅವನ ಬೋಧನೆಯನ್ನು ಅಂಗಿಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೋಂಡರು.
ಕೀರ್ತನೆ 33:4-5, 18-20,22.
ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು.
ಸತ್ಯವಾದುದು ಆತನ ಪವಿತ್ರ ವಾಕ್ಯ |
ಸ್ತುತ್ಯವಾದುದು ಆತನ ಪುನೀತ ಕಾರ್ಯ ||
ಸತ್ಯಸಂಧನು ನ್ಯಾಯಪ್ರಿಯನು ಆತನು |
ಅಚಲ ಪ್ರೀತಿಯಿಂದ ಜಗವನು ತುಂಬಿಹನು||
ಪ್ರಭುವಾದರೋ ಕಟಾಕ್ಷಿಸುವನು ತನಗಂಜಿನಡೆದವರನು|
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು ||
ತಪ್ಪಿಸುವನವರ ಪ್ರಾಣವನು ಮರಣದಿಂದ |
ಉಳಿಸುವನು ಜೀವವನು ಕ್ಷಾಮಡಾಮರದಿಂದ ||
ಕಾದಿದೆ ಎನ್ನ ಮನ ಪ್ರಭುವಿಗಾಗಿ |
ಆತನಿಹನು ಎನಗೆ ಗುರಾಣಿಯಾಗಿ ||
ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ |
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ ||
ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ !
ಪ್ರಭುವೇ ನಿಯೋಜಿಸಿದ ದಿನವಿದು | ಹರ್ಷಿಸಿ ಆನಂದಿಸೋಣ ಇಂದು ||
ಅಲ್ಲೆಲೂಯ ಅಲ್ಲೆಲೂಯ!
ಶುಭಸಂದೇಶ: ಯೊವಾನ್ನ 20:11-18
ಆ ಕಾಲದಲ್ಲಿ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. ಅವರು ಆಕೆಯನ್ನು, " ಏಕಮ್ಮಾ ಅಳುತ್ತಿರುವೇ ? " ಎಂದು ಕೇಳಿದರು. " ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿಟ್ಟಿದ್ದಾರೋ ತಿಳಿಯದು, " ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, " ಏಕಮ್ಮಾ ಅಳುತ್ತಿರುವೇ ? ಏನನ್ನು ಹುಡುಕುತಿರುವೇ ? " ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ, ನಾನು ತೆಗೆದುಕೊಂಡು ಹೋಗುತ್ತೇನೆ, " ಎಂದು ಹೇಳಿದಳು. ಆಗ ಯೇಸು, " ಮರಿಯಾ " ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, " ರಬ್ಬೂನಿ " ಎಂದಳು. ( ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ " ಗುರುದೇವಾ " ಎಂದರ್ಥ ). ಯೇಸು ಆಕೆಗೆ " ನನ್ನನ್ನು ಹಿಡಿದುಕೊಂಡಿರಬೇಡ. ನಾನು ಇನ್ನೂ ಪಿತನ ಬಳಿಗೆ ಏರಿಹೋಗುವುದಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ' ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆ ಎಂದು ತಿಳಿಸು, " ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, " ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲ ಹೇಳಿದರು, " ಎಂದು ತಿಳಿಸಿದಳು.
No comments:
Post a Comment