ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.07.22

ಮೊದಲನೆಯ ವಾಚನ: ಆಮೋಸ 8:4-6, 9-12


ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ, "ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ ? ಕೊಳಗವನ್ನು ಕಿರಿದುಮಾಡೋಣ, ತೊಲವನ್ನು ಹಿರಿದುಮಾಡೋಣ, ಕಳ್ಳತಕ್ಕಡಿಯನ್ನು ಬೆಳೆಸೋಣ; ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ, " ಎಂದುಕೊಳ್ಳುತ್ತೀರಿ, ಅಲ್ಲವೇ? ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: "ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡು ಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು. ನಿಮ್ಮ ಕೊಂಡಾಟದಿನಗಳನ್ನು ಗೋಳಾಟದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು." ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ : "ದಿನಗಳು ಬರಲಿವೆ, ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ. ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.

ಕೀರ್ತನೆ: 119:2, 10, 20, 30, 40 ಮತ್ತಾಯ 4:4
ಶ್ಲೋಕ: ಮಾನವನು ಜೀವಿಸುವುದು ದೇವರಾಡುವ ಪ್ರತಿಯೊಂದು ನುಡಿಯಿಂದ.

ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು|
ಮನಃಪೂರ್ವಕವಾಗಿ ಆತನನ್ನು ಅರಸುವವರು ಧನ್ಯರು||
ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ||
ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ||

ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವೆ ಅನುದಿನ,|
ಈ ಕಾರಣ ಕರಗಿಹೋಗುತಿದೆ ಎನ್ನ ಚೇತನ||
ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು|
ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು||

ನಿನ್ನ ನಿಬಂಧನೆಗಳ ಅಭಿಮಾನಿಯು ನಾನು|
ನೀತಿಗನುಸಾರ ಚೇತನಗೊಳಿಸೆನ್ನ ನೀನು||
ಬಾಯ್ದೆರೆದು ಹಾತೊರೆಯುತ್ತಿರುವೆ|
ನಿನ್ನ ಆಜ್ಞೆಗಳನು ಅರಸುತಿರುವೆ||

ಶುಭಸಂದೇಶ: ಮತ್ತಾಯ 9:9-13

ಆ ಕಾಲದಲ್ಲಿ ಯೇಸು ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. " ನನ್ನನ್ನು ಹಿಂಬಾಲಿಸು, " ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ' ಸುಂಕದವರೂ ' ' ಪಾಪಿಷ್ಟರೂ ' ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನುದ್ದೇಶಿಸಿ, ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ ? " ಎಂದು ಆಕ್ಷೇಪಿಸಿದರು. ಇದನ್ನು ಕೇಳಿಸಿಕೊಂಡ ಯೇಸು, " ವೈದನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ನೀವು ಹೋಗಿ, ' ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ ' ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನಲ್ಲ, ಪಾಪಿಷ್ಠರನ್ನು " ಎಂದರು.

No comments:

Post a Comment