ಮೊದಲನೇ ವಾಚನ: 1 ಅರಸುಗಳು 21:17-29

ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ; ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.” ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು. ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ. ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು; ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು. ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು. ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು. ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.
ಕೀರ್ತನೆ: 51:3-4, 5-6, 11, 16
ಶ್ಲೋಕ: ಕೃಪಾಳು ದೇವಾ, ಕರುಣಿಸೆನ್ನನು, ನಿನಗೆ ದ್ರೋಹವೆಸಗಿದೆ
ಶುಭಸಂದೇಶ: ಮತ್ತಾಯ 5:43-48
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”
No comments:
Post a Comment