ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

21.07.22 - "ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು"

ಮೊದಲನೇ ವಾಚನ: ಯೆರೆಮೀಯ 2:1-3, 7-8, 12-13 

ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು : “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ. “ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.” ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ. ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’ ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ. “ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”

ಕೀರ್ತನೆ: 36:6-7, 8-9, 10-11
ಶ್ಲೋಕ: ಪ್ರಭೂ, ನಿನ್ನಲ್ಲಿದೆ ಜೀವದ ಬುಗ್ಗೆ

ಶುಭಸಂದೇಶ: ಮತ್ತಾಯ 13:10-17

ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ. ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’ “ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ."ಎಂದರು.

No comments:

Post a Comment