ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.07.22 - "ನೀವೇ ಅಭಿಷಿಕ್ತರಾದ ಲೋಕೋದ್ಧಾರಕ"

ಮೊದಲನೇ ವಾಚನ: 1ಯೊವಾನ್ನ  4:7-16

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿ ಸ್ವರೂಪಿ. ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪ ನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜ ಗುಣ ತೋರಿ ಬರುತ್ತದೆ. ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನೊಬ್ಬರು  ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲಸಿರುತ್ತಾರೆ.  ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲಸಿರುವುದನ್ನು ತಿಳಿದುಕೊಳ್ಳುತ್ತೇವೆ. ಪಿತನು ತಮ್ಮ ಪುತ್ರನನು ಲೋಕೋದ್ಧಾರಕನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ  ವಿಷಯವಾಗಿ ಸಾಕ್ಷಿ ಹೇಳುತ್ತೇವೆ. ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲಸಿದ್ದಾರೆ; ಅವನೂ ದೇವರಲ್ಲಿ ನೆಲಸಿದ್ದಾನೆ:  ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ.  ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲಸಿರುವವನು ದೇವರಲ್ಲಿ ನೆಲಸಿದ್ದಾನೆ. ದೇವರೂ  ಅವನಲ್ಲಿ ನೆಲಸಿರುತ್ತಾರೆ.

ಕೀರ್ತನೆ: 33:2-3, 4-5, 6-7, 8-9, 10-11

ಶ್ಲೋಕ: ಪ್ರಭುವನ್ನು ನಾ ಕೊಂಡಾಡುವೆ ಎಲ್ಲ ಕಾಲದೊಳು


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.  ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು. ಮಾರ್ತ ಯೇಸುವನ್ನು ಕಂಡು, "ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ," ಎಂದಳು. ಯೇಸು, "ನಿನ್ನ ಸಹೋದರನು ಜೀವಂತವಾಗಿ ಏಳುವನು," ಎಂದರು. "ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತವಾಗಿ ಏಳುವನೆಂದು ನನಗೆ ತಿಳಿದಿದೆ," ಎಂದಳು ಮಾರ್ತ. ಯೇಸು, ಅವಳಿಗೆ, " ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀನು ವಿಶ್ವಾಸಿಸುತ್ತೀಯಾ?" ಎಂದು ಕೇಳಲು ಅವಳು,  "ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ," ಎಂದು ಹೇಳಿದಳು.

No comments:

Post a Comment