ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

30.08.22 - “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ"

ಮೊದಲನೇ ವಾಚನ: 1 ಕೊರಿಂಥಿಯರಿಗೆ 2:10-16

ಸಹೋದರರೇ, ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.  ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.  ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ. ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.  ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.  ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.  “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಕೀರ್ತನೆ: 145:8-9, 10-11, 12-13, 13-14
ಶ್ಲೋಕ: ಪ್ರಭುವಿನ ಮಾರ್ಗ ಧರ್ಮಸಮ್ಮತ

ಶುಭಸಂದೇಶ: ಲೂಕ 4:31-37


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.  ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. ದುಷ್ಟ ದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು.  ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.  ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.  ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.

No comments:

Post a Comment