01.09.22 - ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ

ಮೊದಲನೆಯ ವಾಚನ: 1 ಕೊರಿಂಥಿಯರಿಗೆ  3:18-23


ಸಹೋದರರೇ, ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. " ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು " ಎಂದೂ " ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ " ಎಂದೂ ಲಿಖಿತವಾಗಿದೆಯಲ್ಲವೆ? ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ -- ಇವರಾಗಲಿ; ಜಗತ್ತು, ಜೀವ, ಮರಣ -- ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತ ಯೇಸು ದೇವರಿಗೆ ಸೇರಿದವರು.

ಕೀರ್ತನೆ 24:1-6

ಶ್ಲೋಕ: ಜಗವೂ ಅದರ ಜೀವಜಂತುಗಳೆಲ್ಲವೂ ಪ್ರಭುವಿನದೇ.

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಲೂಕ 5:1-11


ಆ ಕಾಲದಲ್ಲಿ ಯೇಸು ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಬೋಧನೆ ಮುಗಿದದ್ದೇ ಸಿಮೋನನಿಗೆ, " ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ, " ಎಂದರು, ಅದಕ್ಕೆ ಸಿಮೋನನು, " ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದು ಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪ್ರೇತ್ರನು ಯೇಸುವಿನ ಕಾಲಿಗೆ ಬಿದ್ದು, " ಪ್ರಭೂ, ನಾನು ಪಾಪಾತ್ಮ; ನನ್ನಿಂದ ದೂರವಿರಿ! " ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು -- ಯಕೋಬ ಮತ್ತು ಯೊವಾನ್ನರು -- ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, " ಹೀದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ, " ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನೂ ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...