ಮೊದಲನೇ ವಾಚನ: ಆಮೋಸ 6:1, 4-7
ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ! ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದುತಿನ್ನುವವರೇ, ನಿಮಗೆ ಧಿಕ್ಕಾರ! ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ! ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಂಗಧ ತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ. ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.
ಕೀರ್ತನೆ: 146:7, 8-9, 9-10
ಶ್ಲೋಕ: ಮನವೇ, ವಂದಿಸು ಪ್ರಭುವನು
ಎರಡನೇ ವಾಚನ: 1ತಿಮೋಥೇಯನಿಗೆ 6:11-16
ಪ್ರಿಯನೇ, ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು. ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯ ಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸ ಪ್ರಮಾಣ ಮಾಡಿರುವೆ. ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲ್ಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ. ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.
ಶುಭಸಂದೇಶ: ಲೂಕ 16:19-31
ಯೇಸು ಫರಿಸಾಯರಿಗೆ ಈ ಸಾಮತಿಯನ್ನು ಹೇಳಿದರು: "ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ - ತೊಡುಗೆಗಳನ್ನೂ ನಯವಾದ ನಾರುಮಡಿಗೆಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರಿಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತ್ತಿದ್ದ ಲಾಜರನನ್ನೂ ಕಂಡ. "ಓ ಪಿತಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಿಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲೆಗೆ ಕಳುಹಿಸಿಕೊಡು" ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, "ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ. ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ," ಎಂದ. ಆಗ ಆ ಧನಿಕ, "ಪಿತಮಹ ಆಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ," ಎಂದು ಬೇಡಿಕೊಂಡ. ಅದಕ್ಕೆ ಅಬ್ರಹಾಮನು, "ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ," ಎಂದು ಉತ್ತರಕೊಟ್ಟ. "ಇಲ್ಲ ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು," ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತವಾಗಿ ಎದ್ದುಬಂದರೂ ಅವರು ನಂಬುವುದಿಲ್ಲ," ಎಂದರು."
No comments:
Post a Comment