ಮೊದಲನೇ ವಾಚನ: ಯೋಬ 9:1-12, 14-16
ಯೋಬನು ಉತ್ತರಿಸುತ್ತಾ ಹೀಗೆಂದನು: “ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು? ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು. ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ. ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ. ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ. ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು. ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ. ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ. ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು. ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು. ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು? ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು! ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು. ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.
ಕೀರ್ತನೆ: 88:10-11, 12-13, 14-15
ಶ್ಲೋಕ: ಓ ಪ್ರಭೂ, ನನ್ನ ಕೂಗು ನಿನ್ನ ಕಿವಿಗೆ ಬೀಳಲಿ.
ಶುಭಸಂದೇಶ: ಲೂಕ 9:57-62
ಯೇಸುಸ್ವಾಮಿ ತಮ್ಮ ಶಿಷ್ಯರೊಂದಿಗೆ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು. ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು. ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು. ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು. ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು. 62ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.
No comments:
Post a Comment