ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02-10.22 - ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ

 ಮೊದಲನೇ ವಾಚನ: ಹಬಕ್ಕೂಕ 1:2-3; 2:2-4 


ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆಯಿಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ. ಕೇಡನ್ನು ನಾ ನೋಡುವಂತೆ ಮಾಡಿದೆ ಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆ ಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣು ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತ್ತಿದೆ. ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: "ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು. ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು. ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ  ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು. 

ಕೀರ್ತನೆ: 95:1-2, 6-7, 8-9 
ಶ್ಲೋಕ:ಆತನ ಕಿವಿಗೆ ಕಿವಿಗೊಟ್ಟರೆನಿತೋ ಒಳಿತು ನೀವಿಂದೇ 

ಎರಡನೇ ವಾಚನ: 2 ತಿಮೊಥೇಯನಿಗೆ 2:6-8, 13-14 

ಸಹೋದರನೇ, ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿಗೆ ಸಾಕ್ಷಿಯಾಗಿರಲು ನಾಚಬೇಡ.  ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ಕ್ರಿಸ್ತ ಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು. ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು. 

ಶುಭಸಂದೇಶ: ಲೂಕ 17:5-10 

"ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ," ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, "ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲಿದ್ದು, ನೀವು ಈ ಅತ್ತಿಮರಕ್ಕೆ, "ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ," ಎಂದು ಆಜ್ಞಾಪಿಸಿದ್ದೇ ಅದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು. ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, "ಬಾ, ನನ್ನೊಂದಿಗೆ ಊಟಮಾಡು," ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ "ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರ ಮಾಡು. ಅನಂತರ ನೀನು ಊಟ ಮಾಡುವೆಯಂತೆ," ಎಂದು ಹೇಳುತ್ತಾರಲ್ಲವೇ? ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, "ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ," ಎಂದುಕೊಳ್ಳಿರಿ," ಎಂದರು.

No comments:

Post a Comment