Sunday, November 20, 2022

23.11.22 - "ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆ ಕೂದಲೊಂದೂ ನಾಶವಾಗುವುದಿಲ್ಲ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 15:1-4

ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :

ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ !
ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ
ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
ಹೇ ಪ್ರಭೂ, ನಿನಗಂಜದವರಾರು?
ನಿನ್ನ ನಾಮಸ್ತುತಿ ಮಾಡದವರಾರು?
ಪರಮಪವಿತ್ರ ನೀನಲ್ಲದಿನ್ಯಾರು
ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು
ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”

ಕೀರ್ತನೆ: 98:1, 2-3, 7-8, 9

ಶುಭಸಂದೇಶ: ಲೂಕ 21:12-19


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ. ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ. ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.

22.11.22 - “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 14:14-19


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು. ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು. ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು. ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವರು ಖರೆಯಾಗಿ 

ಶುಭಸಂದೇಶ: ಲೂಕ 21:5-11


“ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು. ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು. “ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು. ಅದಕ್ಕೆ ಯೇಸುಸ್ವಾಮಿ, “ನೀವು ಮೋಸ ಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ. ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು. ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು; ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.

21.11.22- "ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,”

ಮೊದಲನೇ ವಾಚನ: ಪ್ರಕಟಣಾ ಗ್ರಂಥ 14:1-3, 4-5

ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು. ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು. ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ. ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು. ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.

ಕೀರ್ತನೆ: 24:1-2, 3-4, 5-6

ಶುಭಸಂದೇಶ: ಲೂಕ 21:1-4 12:41-44

ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು. ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.