Wednesday, November 23, 2022

28.11.22 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು"

ಮೊದಲನೇ ವಾಚನ: ಯೆಶಾಯ 4:2-6 


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆಯುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು. ಆಗ ಒಡೆಯರಾದ ಸ್ವಾಮಿ ನ್ಯಾಯ ನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿ ಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದು ಹಾಕುವರು. ಸಿಯೋನ್ ಪರ್ವತದ ಮೇಲೆಲ್ಲಾ, ಅಲ್ಲಿನ ಸಭಾ ಕೂಟಗಳ ಮೇಲೆಲ್ಲಾ ಹಗಲಲ್ಲಿ ಧೂಮ ಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿ ಪ್ರಕಾಶವನ್ನು ಉಂಟು ಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆ ಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು. 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಯಕ್ಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 

ಶುಭಸಂದೇಶ: ಮತ್ತಾಯ 8:5-11 

ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. "ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ," ಎಂದು ವಿನಂತಿಸಿದನು. ಯೇಸು, "ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ," ಎಂದರು. ಅದಕ್ಕೆ ಆ ಶತಾಧಿಪತಿ, "ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು, ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, "ಬಾ"  ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, "ಹೋಗು" ಎಂದರೆ ಹೋಗುತ್ತಾನೆ. ಸೇವಕನಿಗೆ, "ಇಂಥದ್ದನ್ನು ಮಾಡು" ಎಂದರೆ  ಮಾಡುತ್ತಾನೆ," ಎಂದನು. ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಆನೇಕ ಜನರು ಬಂದು ಅಬ್ರಾಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯ ಹಬ್ಬದೂಟದಲ್ಲಿ ಭಾಗಿಗಳಾಗುವರು.

27.11.22 - "ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು."

ಮೊದಲನೇ ವಾಚನ: ಯೆಶಾಯ 2:1-5 

ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ: ಸರ್ವೇಶ್ವರನ ಶ್ರೀ ನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು. ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದುಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದುಬರುವುವು. ದೇಶವಿದೇಶಗಳವರು ಬಂದು ಹೇಳುವರು ಹೀಗೆ: "ಬನ್ನಿ, ಹೋಗೊಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ಆತನ ಮಾರ್ಗಗಳನು. ನಾವು ಹಿಡಿದುನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ; ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ. ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು. ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ, ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ; ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ, ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ." 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 


1. ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ |
ಆಯಿತೆನಗೆ ಆನಂದ, ಜನರೆನ್ನ ಕರೆದಾಗ ||
ನಮ್ಮ ಕಾಲುಗಳು ಓ ಜೆರುಸಲೇಮೇ |
ತಲುಪಿವೆ ನಿನ್ನ ಪುರದ್ವಾರಗಳನೇ ||

2. ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ |
ಮಾಡುವರಿಲ್ಲಿಯೆ ಪ್ರಭುವಿನ ನಾಮಕೀರ್ತನೆ |
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದಾಜ್ಞೆ ||
ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು |
ದಾವೀದನ ಮನೆತನದವರ ಸಿಂಹಾಸನಗಳು ||

3. ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ |
"ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ ||
ಶುಭವಿರಲಿ ನಿನ್ನೀ - ಪೌಳಿಗೋಡೆಗಳೊಳಗೆ |
ಸಂರಕ್ಷಣೇ ಇರಲಿ ನಿನ್ನ ಅರಮನೆಯೊಳಗೆ" ||

4. ನನ್ನ ಬಂಧುಬಳಗದವರ ನಿಮಿತ್ತ |
"ನಿನಗೆ ಶುಭವಿರಲಿ" ಎಂಬುದು ನನ್ನ ಮತ ||
ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ |
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ ||

ಎರಡನೇ ವಾಚನ: ರೋಮನರಿಗೆ 13:11-14 

ಸಹೋದರರೇ, ಇದೆಂತಹ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತ ಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ. ಇರುಳು ಬಹುಮಟ್ಟಿಗೆ ಕಳೆಯಿತು, ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕ್ರತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತಣ - ಕುಡಿತನಗಳಲ್ಲಾಗಲೀ, ಕಾಮವಿಲಾಸ - ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ - ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ. ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ. 

ಶುಭಸಂದೇಶ: ಮತ್ತಾಯ 24:37-44 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು. ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಡುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು. ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು. ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು. ಒಂದೆ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು. ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಾಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು ಅಲ್ಲವೆ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಎಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.

26.11.22 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 22:1-7


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ, ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು. ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು. ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು. ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು. ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ. “ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಕೀರ್ತನೆ: 95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

25.11.22 - "ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು. ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು. ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು. ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು. ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. 

ಕೀರ್ತನೆ: 84:3, 4, 5-6, 8

ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ  

ಶುಭಸಂದೇಶ: ಲೂಕ 21:29-33


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

24.11.22 - "ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು"

ಮೊದಲನೇ ವಾಚನ: ಪ್ರಕಟಣಾ ಗ್ರಂಥ 18:1-2, 21-23; 19:1-3, 9

ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು. ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು. ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.” “ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ! “ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ. ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು. ಆತನ ನ್ಯಾಯತೀರ್ಪು ಸತ್ಯವಾದುದು ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಣಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು. ಅವರು ಮತ್ತೊಮ್ಮೆ, “ಅಲ್ಲೆಲೂಯ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ” ಎಂದು ಕೂಗಿದರು. ಅನಂತರ ದೇವದೂತನು “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.

 

ಕೀರ್ತನೆ: 100:2, 3, 4, 5

ಶ್ಲೋಕ: ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು 

 

ಶುಭಸಂದೇಶ: ಲೂಕ 21:20-28

 

ಯೇಸು ಶಿಷ್ಯರಿಗೆ ಹೀಗೆಂದರು: “ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ. ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು. ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು. “ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ ಸಂಭವಿಸಲು ತೊಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”