ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

13.02.23 - “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"

ಮೊದಲನೆಯ ವಾಚನ - ಆದಿಕಾಂಡ 4: 1-15, 25. V.14


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು. ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು. ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು. ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು. 5ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು. ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ? ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು. ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. “ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು. ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು. ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು. ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು. ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ. ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು. ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು. 
ಪ್ರಭುವಿನ ವಾಕ್ಯ

ಕೀರ್ತನೆ - 50:1, 8, 16-17, 20-21
ಶ್ಲೋಕ: ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I

ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I
ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II

ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I
ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II

“ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I
ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II

ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I
ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II

ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I
ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II

ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I
ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II

ಶುಭಸಂದೇಶ - ಮಾರ್ಕ 8:11-13


ಆ ಕಾಲದಲ್ಲಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು. ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.
ಪ್ರಭುವಿನ ಶುಭಸಂದೇಶ

12.02.23 - "ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು"

ಮೊದಲನೇ ವಾಚನ: ಸಿರಾಖನು 15:15-50

ನೀನು ಇಚ್ಛಿಸಿದೆಯಾದರೆ ಆತನ ಆಜ್ಞೆಗಳನ್ನು ಅನುಸರಿಸಿ ನಡೆವೆ ಹೀಗೆ ನಂಬಿಗಸ್ಥನಾಗಿ ದೇವರ ಚಿತ್ತಾನುಸಾರ ಬಾಳುವೆ. ನಿನ್ನ ಮುಂದೆ ಇಟ್ಟಿರುವರು ಬೆಂಕಿಯನ್ನು ಹಾಗು ನೀರನ್ನು ನೀನು ಆಯ್ದುಕೊಳ್ಳಬಹುದು ನಿನಗೆ ಬೇಕಾದುದನ್ನು. ಜೀವನ್ಮರಣಗಳು ಇರಿಸಲಾಗಿವೆ ಮನುಷ್ಯನ ಎದುರಿನಲ್ಲೆ ಅವನು ಇಷ್ಟಪಟ್ಟದ್ದನ್ನು ಕೊಡಲಾಗುವುದು ಅವನಿಗೆ. ಏಕೆಂದರೆ ದೇವರ ಜ್ಞಾನ ಅಪರಿಮಿತ ಆತ ಅಪೂರ್ವ ಬಲವಂತ, ಎಲ್ಲವನು ವೀಕ್ಷಿಸುವಂಥವ. ದೇವರಿಗೆ ಭಯಪಡುವವರ ಮೇಲಿದೆ ಆತನ ಕೃಪಾಕಟಾಕ್ಷ ಮನುಷ್ಯನು ಮಾಡುವ ಪ್ರತಿಯೊಂದೂ ಆತನಿಗೆ ವ್ಯಕ್ತ. ದುರುಳನಾಗೆಂದು ದೇವರು ಯಾರಿಗೂ ಆಜ್ಞಾಪಿಸಲಿಲ್ಲ, ಪಾಪಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ.

ಕೀರ್ತನೆ: 119:1-2, 4-5, 17-18, 33-34

ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೇದವರು ಧನ್ಯರು

ಎರಡನೇ ವಾಹನ: 1 ಕೊರಿಂಥಿಯರಿಗೆ 2:6-10

ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದು ಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ. ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ. ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.” ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.

ಶುಭಸಂದೇಶ: ಮತ್ತಾಯ 5:17-37


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂಡರೆ: "ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದು ಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ವಿೂರುವವನು, ವಿೂರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು. ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ " ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು." "ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ; ಆದರೆ ನಾನು ಹೇಳುತ್ತೇನೆ, ಕೇಳಿ: ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ. ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು. ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು." "ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡ ಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ." " ‘ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ; ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು."

11.02.23 - "ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ"

ಮೊದಲನೆಯ ವಾಚನ - ಆದಿಕಾಂಡ 3: 9-24


ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು. “ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು. ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು. ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು. ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.” ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ." ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ. ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು. ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು." ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ . ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು. ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು. ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು. ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ - 90: 2, 3-4, 5-6, 12-13
ಶ್ಲೋಕ: ಪ್ರಭೂ ತಲತಲಾಂತರಕ್ಕೆ ಶ್ರೀ ನಿವಾಸ ನೀನೆಮಗೆ.

ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I
ಭೂದೇಶಗಳು ಆಗುವುದಕೆ ಮೊದಲಿಂದ I

ನೀನೆಮಗೆ ದೇವರು ಯುಗಯುಗಗಳಿಂದ II
ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I

‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I

ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II
ಮನುಜರು ನೀ ಹರಿದೋಡಿಸುವ ಹೊಯಿಲು I

ಇರುಳಿನ ಕನಸು, ಹಗಲಿನ ಗರಿಹುಲ್ಲು II
ಚಿಗುರಿ ಹೂಬಿಡುವುದದು ಬೆಳಗಿನಲಿ I

ಸೊರಗಿ ತರಗಾಗುವುದು ಬೈಗಿನಲಿ II
ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I

ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II
ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I
ನಿನ್ನೀ ಸೇವಕರ ಮೇಲಿರಲಿ ಮರುಕ II

ಶುಭಸಂದೇಶ - ಮಾರ್ಕ 8: 1-10


ಆ ಕಾಲದಲ್ಲಿ ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು. ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
ಪ್ರಭುವಿನ ಶುಭಸಂದೇಶ

10.02.23

ಮೊದಲನೆಯ ವಾಚನ - ಆದಿಕಾಂಡ 3: 1-8

ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು. ಅದಕ್ಕೆ ಆ ಮಹಿಳೆ, “ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು; ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು. ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು. ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು. ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು. ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.
ಪ್ರಭುವಿನ ವಾಕ್ಯ

ಕೀರ್ತನೆ - 32: 1-2, 5, 6-7
ಶ್ಲೋಕ: ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು II

ಯಾರಪರಾಧವನು ಪ್ರಭು ಎಣಿಸಿಲ್ಲವೋ I
ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II

ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I
ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II

“ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I
ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II

ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I
ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II

ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I
ನನ್ನನು ಆವರಿಸುವ ಉದ್ಧಾರಕ ನಾದವು II

ಶುಭಸಂದೇಶ - ಮಾರ್ಕ 7: 31-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು. ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.
ಪ್ರಭುವಿನ ಶುಭಸಂದೇಶ

09.02.23 - "ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?”

ಮೊದಲನೆಯ ವಾಚನ - ಆದಿಕಾಂಡ 2: 18-25


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. 23ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು. ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.  
ಪ್ರಭುವಿನ ವಾಕ್ಯ

ಕೀರ್ತನೆ - 128: 1, 2-3, 4-5
ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I

ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I

ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II
ಇರುವಳು ನಿನ್ನ ಪತ್ನಿ ಮನೆಯಲ್ಲಿ 
ಫಲಭರಿತ ದ್ರಾಕ್ಷಾಲತೆಯಂತೆ I

ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II
ಹೊಂದುವನು ಅಂತಹ ಆಶೀರ್ವಾದವನು I

ಪ್ರಭುವಿನಲಿ ಭಯಭಕ್ತಿಯುಳ್ಳವನು II
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

ಶುಭಸಂದೇಶ - ಮಾರ್ಕ 7: 24-30


ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.
ಪ್ರಭುವಿನ ಶುಭಸಂದೇಶ

07.02.23 - "ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!"

ಮೊದಲನೆಯ ವಾಚನ - ಅದಿಕಾಂಡ 1: 20-2:4

ಆ ಬಳಿಕ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.
ಪ್ರಭುವಿನ ವಾಕ್ಯ

ಕೀರ್ತನೆ - 8: 3-4, 5-6, 7-8
ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ I

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I
ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I
ಏತರದವನು ನರಮಾನವನು ನೀನವನನು ಪರಾಮರಿಸಲು? II

ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಕುರಿಗಳನು, ಕರುಗಳನು, ಕಾಡುಮೃಗಗಳನು I
ಗರಿಗಳನು, ಮೀನುಗಳನು, ಜಲಚರಗಳನು I
ಕರಗತ ಮಾಡಿದೆ ನೀ ಅವನಿಗೆಲ್ಲವನು II

ಘೋಷಣೆ                  ಕೀರ್ತನೆ 145:14

ಅಲ್ಲೆಲೂಯ, ಅಲ್ಲೆಲೂಯ!
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು,  ನಡೆಯಲಿ  ಆತನು  ಸದಾ  ಪ್ರೀತಿಮಯನು,,
ಅಲ್ಲೆಲೂಯ!

ಶುಭಸಂದೇಶ - ಮಾರ್ಕ 7: 1-13


ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
ಪ್ರಭುವಿನ ಶುಭಸಂದೇಶ

08.02.23 - "ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)”

ಮೊದಲನೆಯ ವಾಚನ - ಅದಿಕಾಂಡ 2: 4-9, 15-17



ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ. ಆದರೂ ಭೂಮಿಯಿಂದ ನೀರು ಉಕ್ಕಿ ಬಂದು ನೆಲಕ್ಕೆ ನೀರೆರೆಯುತ್ತಿತ್ತು. ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು. ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವ ದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು. ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು. ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ - 104, 1-2, 27-30
ಶ್ಲೋಕ: ಭಜಿಸು ನನ್ನ ಮನವೇ, ಭಜಿಸು, ಪ್ರಭುವನು

ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I
ಮಹಿಮೆ ಪ್ರತಾಪಗಳಿಂದ ಭೂಷಿತನು II

ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I
ಹರಡಿಸಿರುವೆ ಆಗಸವನು ಗುಡಾರದಂತೆ II

ಸಕಾಲದಲೊದಗಿಸುವೆ ಆಹಾರವನು I
ನಂಬಿಕೊಂಡಿವೆ ಆ ಜೀವಿಗಳು ನಿನ್ನನು II

ನೀ ಉಸಿರನ್ನೂದಲು ಹೊಸದಾಗುವುವು I
ಪುನಶ್ಚೇತನಗೊಳ್ಳುವುದು ಜಗವೆಲ್ಲವು II

ಶುಭಸಂದೇಶ - ಮಾರ್ಕ 7: 14-23

ಆ ಕಾಲದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. 
ಪ್ರಭುವಿನ ಶುಭಸಂದೇಶ

06.02.23

ಮೊದಲನೆಯ ವಾಚನ - ಅದಿಕಾಂಡ 1: 1-19

ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು. ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು. ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು. ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು. ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು. ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು. ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು. ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು. ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು. ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು. ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು. ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು. ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು. 
ಪ್ರಭುವಿನ ವಾಕ್ಯ

ಕೀರ್ತನೆ – 104:1-2, 5-6, 10, 12, 24, 34. V.31
ಪ್ರಭು ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II

ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I
ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I

ಮಹಿಮೆ ಪ್ರತಾಪಗಳಿಂದ ಭೂಷಿತನು II
ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I

ಹರಡಿಸಿರುವೆ ಆಗಸವನು ಗುಡಾರದಂತೆ II
ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I

ಅದೆಂದಿಗೂ ಕದಲದಂತೆ ಮಾಡಿರುವೆ II
ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I

ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II
ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I

ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II
ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I

ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು I
ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I

ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II
ಆತನಿಗೊಲಿಯಲಿ ನನ್ನ ಧ್ಯಾನ I
ಆತನಲೇ ಹರ್ಷಿಸಲಿ ನನ್ನ ಮನ II

ಶುಭಸಂದೇಶ - ಮಾರ್ಕ 6: 53-56

ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು. 
ಪ್ರಭುವಿನ ಶುಭಸಂದೇಶ

05.02.23 - "ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು"

ಮೊದಲನೇ ವಾಚನ: ಯೆಶಾಯ 58:7-10

ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.

ಕೀರ್ತನೆ: 112:4-5, 6-7, 8-9
ಶ್ಲೋಕ: ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು.

ಎರಡನೇ ವಾಚನ: 1 ಕೊರಿಂಥಿಯರಿಗೆ 2:1-5

ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ. ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ. ನನ್ನ ಬೋಧನೆ ಹಾಗೂ ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು, ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಂತೆಯೇ ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಶುಭಸಂದೇಶ: ಮತ್ತಾಯ 5:13-16

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಇಂತೆಂದರು: "ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ." "ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."

04.02.23 - "ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ"

ಮೊದಲನೆಯ ವಾಚನ - ಹಿಬ್ರಿ 13: 15-17, 20-21


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ. ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು. ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು. ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
ಪ್ರಭುವಿನ ವಾಕ್ಯ


ಕೀರ್ತನೆ - 23: 1-4, 5, 6
ಪ್ರಭು ಕುರಿಗಾಹಿಯಾಗಿರಲು ನನಗೆ I
ಕುಂದುಕೊರತೆಗಳೆಲ್ಲಿಯವು ಎನಗೆ? II

ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II

ಶುಭಸಂದೇಶ - ಮಾರ್ಕ 6: 30-34


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
ಪ್ರಭುವಿನ ಶುಭಸಂದೇಶ

03.02.23 - "ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ"

ಮೊದಲನೆಯ ವಾಚನ - ಹಿಬ್ರಿಯರಿಗೆ 13: 1-8


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ. ಅತಿಥಿ ಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ. ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?  ವಿವಾಹ ಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ. ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.

ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ. ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.
ಪ್ರಭುವಿನ ವಾಕ್ಯ

ಕೀರ್ತನೆ - 27: 1, 3, 5, 8-9 V.1

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I
ನಾನಾರಿಗೂ ಅಳುಕೆನು II

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I
ನಾನಾರಿಗೂ ಅಳುಕೆನು II
ನನ್ನ ಬಾಳಿಗಾಧಾರ ಪ್ರಭುವೆ I
ನಾನಾರಿಗೂ ಅಂಜೆನು II

ಕೇಡು ಮಾಡಬಂದರೆನಗೆ ಕೊಲೆಗಡುಕರು I
ಎಡವಿಬಿದ್ದರು, ತಾವೇ ಅಳಿದುಹೋದರು II
ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I
ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II

ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I
ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II

“ಅರಸೆನ್ನ ಮುಖದರುಶನವನು", ಎಂದೆ ನೀನು I
“ಅರಸುವೆನು ಅದನೆ", ಎಂದು ಮರುನುಡಿದೆ ನಾನು II
ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I
ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಶುಭಸಂದೇಶ - ಮಾರ್ಕ 6: 14-29

ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆ ಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು. ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು. ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನ ಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.

ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆ ಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು.
ಪ್ರಭುವಿನ ಶುಭಸಂದೇಶ

02.02.23 - “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು"

ಮೊದಲನೆಯ ವಾಚನ - ಮಲಾಕಿ 3: 1-4

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”
ಪ್ರಭುವಿನ ವಾಕ್ಯ

ಕೀರ್ತನೆ: 24: 7-10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು.

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಸೇನಾಧೀಶ್ವರನು, ಮಹಿಮಾರಾಜನು II

ಎರಡನೆಯ ವಾಚನ - ಹಿಬ್ರಿಯರಿಗೆ 2: 14-18

ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.
ಪ್ರಭುವಿನ ವಾಕ್ಯ

ಶುಭಸಂದೇಶ - ಲೂಕ 2: 22-40 


ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು
ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.
ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ
ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.
ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ
ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”
ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,” ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

ಪ್ರಭುವಿನ ಶುಭಸಂದೇಶ

01.02.23

ಮೊದಲನೆಯ ವಾಚನ - ಹಿಬ್ರಿಯರಿಗೆ 12: 4-7, 11-15

ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ. ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; 
ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.” ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ? ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ. ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ. ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ. ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ. ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.
ಪ್ರಭುವಿನ ವಾಕ್ಯ

ಕೀರ್ತನೆ - 103: 1-2, 13-14, 17-18
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I

ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I

ಮರೆಯದಿರು ಆತನ ಉಪಕಾರಗಳೊಂದನು II
ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I

ಕನಿಕರಿಸುವನಾತ ತನಗೆ ಅಂಜುವವರಿಗೆ II
ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I

ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II
ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I

ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II
ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I
ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II

ಶುಭಸಂದೇಶ - ಮಾರ್ಕ 6: 1-6

ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು. ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು
ಪ್ರಭುವಿನ ಶುಭಸಂದೇಶ

31.01.23

ಮೊದಲನೆಯ ವಾಚನ: ಹಿಬ್ರಿಯರಿಗೆ 12: 1-4

ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದು ಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ. ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ

ಕೀರ್ತನೆ – 22:26-27, 28, 30, 31-32
ಶ್ಲೋಕ: ಹರಿದವು ಸ್ತುತಿ ಭಕ್ತರ ಬಾಯಿಂದ 

ಶುಭಸಂದೇಶ – ಮಾರ್ಕ 5:21-43

ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು. ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ. ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು. ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು. ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು. ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. “ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು. ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು. ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು?’ ಎಂದು ಕೇಳುತ್ತೀರಲ್ಲಾ” ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು. ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯಿರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು. ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು. ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು. ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು. ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್” ಎಂದರು. (‘ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ) ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯ ಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು. ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.

30.01.23 - “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?"

ಮೊದಲನೆಯ ವಾಚನ: ಹಿಬ್ರಿಯರಿಗೆ 11: 32-40

ಪ್ರಿಯ ಸಹೋದರರೇ, ಇನ್ನೂ ಹೇಳಬೇಕೇ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು. ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು. ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು. ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು. ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ. ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ – 31: 19-23. V.24

ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I

ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I
ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II

ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I
ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II

ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ Iಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II
ದೇವರಿಂದ ದೂರನಾದೆಯೆಂಬ ದಿಗಿಲೇರಲು I

ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II
ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I

ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II
ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I
ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II

ಶುಭಸಂದೇಶ – ಮಾರ್ಕ 5:1-20


ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.

ಪ್ರಭುವಿನ ಶುಭಸಂದೇಶ

29.01.23 - " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು."

ಮೊದಲನೆಯ ವಾಚನ:  ಜೆಫನ್ಯನ 2:3, 3:12-13

ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ದೀನರೂ ನಮ್ರರೂ ಆದ ಜನರನ್ನು ನಿಮ್ಮಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿ ಹೊಂದಿದವರು. ಇಸ್ರಾಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು, ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.

ಕೀರ್ತನೆ: 146:6-10 ಮತ್ತಾಯ 5:3
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ|
ದೊರಕಿಸುವನು ನ್ಯಾಯ ಬಡಬಗ್ಗರಿಗೆ||
ಒದಗಿಸುವನು ಆಹಾರ ಹಸಿದವರಿಗೆ|
ನೀಡುವನು ಬಿಡುಗಡೆ ಬಂಧಿತರಿಗೆ||

ಕಣ್ಣನ್ನೀಯುವನು ಪ್ರಭು ಕುರುಡರಿಗೆ|
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ||
ರಕ್ಷಿಸುವನು ಪ್ರಭು ಪರದೇಶಿಗಳನು|
ಆದರಿಸುವನು ಅನಾಥರನು, ವಿಧವೆಯರನು||

ಆತನ ಒಲವಿರುವುದು ಸಾಧುಸಜ್ಜನರಿಗೆ|
ನಿರ್ಮೂಲಮಾಡುವನು ದುರ್ಜನರ ಮಾರ್ಗವನು||
ಪ್ರಭುವೇ ಆರಸನು ಸದಾಕಾಲಕು|
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು||

ಎರಡನೆಯ ವಾಚನ: 1 ಕೊರಿಂಥಿಯರಿಗೆ  1:26-31

ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ. ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮುರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ' ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ '.

ಘೋಷಣೆ ಯೊವಾನ್ನ 1:12
ಅಲ್ಲೆಲೂಯ, ಅಲ್ಲೆಲೂಯ!
ಆ ದಿವ್ಯವಾಣಿ ಮನುಷ್ಯ ಆದರು; ಅವರಲ್ಲಿ ವಿಶ್ವಾಸ ಇಟ್ಟವರಿಗೆ ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು,,
ಅಲ್ಲೆಲೂಯ!

ಶುಭಸಂದೇಶ ವಾಚನ: ಮತ್ತಾಯ 5:1-12

ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."

28.01.23 - "ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 11:1-2, 8-19

ಸಹೋದರರೇ, ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ. ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ; ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ. ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು. ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು. ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು. ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು. ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು. ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು. ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು. ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ. ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ. ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು. 
ಪ್ರಭುವಿನ ವಾಕ್ಯ


ಲೂಕ 1:69-70, 71-72, 73-75 
ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. 

ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I
ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II
ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I
ಅರುಹಿಸಿರುವನು ಇಂತೆಂದು ನಮಗೆ: II

‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ
ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I
ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II

ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ I
ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II
ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I
ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II

ಮಾರ್ಕನು ಬರೆದ ಶುಭಸ೦ದೇಶ 4:35-41 


ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆ ದಡಕ್ಕೆ ಹೋಗೋಣ,” ಎಂದರು. ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸ ತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿ ಹೋಗುವುದರಲ್ಲಿತ್ತು. ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು. ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು. ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.  
ಪ್ರಭು ಕ್ರಿಸ್ತರ ಶುಭಸ೦ದೇಶ.

27.01.23 - "ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು"

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 10:32-39

ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟ ಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ! ಕೆಲವೊಮ್ಮೆ ಬಹಿರಂಗವಾಗಿ ಹಿಂಸೆ ಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ; ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆ ಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ. ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು. ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನ ಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢ ಮನಸ್ಕರಾಗಿರಬೇಕು. ಏಕೆಂದರೆ: “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬ ಮಾಡನು.ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರುಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ. ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು. 
ಪ್ರಭುವಿನ ವಾಕ್ಯ

ಕೀರ್ತನೆ: 37:3-4, 5-6, 23-24, 39-40 
ಶ್ಲೋಕ: ಸಜ್ಜನರ ಜೀವೋದ್ದಾರಾ ಪ್ರಭುವಿನಿಂದ. 

ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I
ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II
ಪ್ರಭುವಿನಿಂದಲೆ ಬಯಸು ನಿನ್ನಾನಂದವನು I
ನೆರವೇರಿಸುವನಾತ ನಿನ್ನ ಮನದಾಸೆಯನು II

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I
ಭರವಸೆಯಿಂದಿರು, ಆತನದನು ಸಾಗಿಸುವನು II
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I
ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II

ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I
ಅವನ ನಡತೆಗೆ ಆತನೆ ಮಾರ್ಗದರ್ಶನ II
ಬಿದ್ದರೂ ಅವನೆದ್ದೇ ತೀರುವನು I
ಪ್ರಭು ಅವನಿಗೆ ಊರುಗೋಲಾಗಿಹನು II

ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I
ಆಪತ್ಕಾಲದಲಿ ಆಶ್ರಯ ಆತನಿಂದ II
ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I
ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II

ಮಾರ್ಕನು ಬರೆದ ಶುಭಸ೦ದೇಶ 4:26-34 

ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ. ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ. ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ. ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು. ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು. ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು. ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು. 
ಪ್ರಭು ಕ್ರಿಸ್ತರ ಶುಭಸ೦ದೇಶ