ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

12.01.23 - “ತಾವು ಮನಸ್ಸು ಮಾಡಿದ್ದಲ್ಲಿ ನನ್ನನ್ನು ಗುಣ ಮಾಡಬಲ್ಲಿರಿ,”

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 3:7-14


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು. ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು. ಎಂದೇ ದೇವರಿಂತೆಂದರು: ಮರುಭೂಮಿಯಲಿ ಅವರೆನ್ನನು ಕೆಣಕಿದರು; ನಲವತ್ತು ವರುಷ ನಾನೆಸಗಿದ ಮಹತ್ಕಾರ್ಯಗಳನು ಕಂಡರಾದರೂ ಎನ್ನ ಕೆಣಕಿ ಪರೀಕ್ಷಿಸಿದರು. ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.” ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ. ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ. ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು. 

ಕೀರ್ತನೆ: 95:6-7, 8-9, 10-11

ಶ್ಲೋಕ: ಆತನ ಕರೆಗೆ ಕಿವಿಗೊಟ್ಟಿರೆನಿತೋ ಒಳಿತು ನೀವೆಂದೇ.  

ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I 
ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II 
ಆತನೆಮ್ಮ ದೇವರು, ನಾವು ಆತನ ಕೈಮಂದೆ I

ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II 
ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I 
ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I

ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II 
ನೋಡಿದರಾದರೂ ನನ್ನ ಮಹತ್ಕಾರ್ಯಗಳನು I 
ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II

ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I 
‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II
ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I
ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II

ಮಾರ್ಕನು ಬರೆದ ಶುಭಸ೦ದೇಶ 1:40-45 


ಆ ಕಾಲದಲ್ಲಿ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ, “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು. 

No comments:

Post a Comment