23.02.23 - "ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ"


ಮೊದಲನೇ ವಾಚನ: ಧರ್ಮೋಪದೇಶಕಾಂಡ 30:15-20

ಮೋಶೆಯು ಜನರಿಗೆ ಹೀಗೆಂದು ಹೇಳಿದನು: “ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ. ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿ ಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು. ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ, ಇತರ ದೇವರುಗಳನ್ನು ಪೂಜಿಸಿ ಅವಲಂಬಿಸಿದರೆ ನೀವು ಸ್ವಾಧೀನ ಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿ ಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. ನಾನು ಸಾವು ಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಕೀರ್ತನೆ: 1:1-2, 3, 4, 6

ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆವಾತನು ಧನ್ಯನು

ಶುಭಸಂದೇಶ: ಲೂಕ 9:22-25


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಅವರಿಗೆ ತಿಳಿಸಿದರು. ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಮನಸ್ಸಿಗೊಂದಿಷ್ಟು :  ಆಯ್ಕೆಗಳು ನಮ್ಮನ್ನು ಗೊಂದಲಕ್ಕೆ ತಳ್ಳಬಹುದು. ಸುಖ-ಸಮೃದ್ಧಿ, ಆಸೆ-ಸೌಲಭ್ಯಗಳ ನಡುವೆ ಶಿಲುಬೆಯನ್ನು ಹೊತ್ತು ತಮ್ಮ ಹಿಂದೆ  ಬರಲು ಯೇಸು ನೀಡುವ ಕರೆ ಕಷ್ಟದ ಆಯ್ಕೆಯೇ. ಇಂದಿನವರೆಗಿನ ನಮ್ಮ ಆಯ್ಕೆ ಯಾವುದಾಗಿತ್ತು. ಮುಂದೆ ಯಾವುದಾಗಬಹುದು? ಯೇಸುವಿನ ಹಿಂದೆ ಸಾಗಲು ನಮಗಿರುವ ಅಡ್ಡಿಗಳೇನು?

ಪ್ರಶ್ನೆ : ಇಂದಿನ ಶುಭಸಂದೇಶದಲ್ಲಿನ ಯೇಸುವಿನ ಕರೆ ನಮ್ಮನ್ನು ಯೋಚಿಸುವಂತೆ ಮಾಡಿದೆಯೇ ಅಥವಾ ಪ್ರತಿ ನಿತ್ಯದ ವಾಕ್ಯದಂತೆ ಇದೂ ಓದಿಗೆ ಮಾತ್ರವೇ?

ಪ್ರಭುವೇ,
ಹೊರಬೇಕಾದ ಶಿಲುಬೆ, ಭಾರವೇ ಸರಿ 
ಹೊತ್ತು ನಿನ್ನ ಹಿಂದೆ ಬರುವುದಾಗಲಿ 
ಈ ನನ್ನ ಜೀವನದ ಗುರಿ
-ಚಿತ್ತ  

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...