ಮೊದಲನೆಯ ವಾಚನ: 2 ಕೊರಿಂಥಿಯರಿಗೆ 3:4-11
ಕ್ರಿಸ್ತ ಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ. ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೊ? ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು. ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ , ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು, ಮೃತ್ಯುಕಾರಕವಾದುದು ; ಪವಿತ್ರಾತ್ಮಸಂಬಂಧವಾದುದು, ಸಜೀವದಾಯಕವಾದುದು. ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಯೇಲರಿಗೆ ಆಗಲಿಲ್ಲ. ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ದರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು ? ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ. ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?
ಕೀರ್ತನೆ 99:5-6,7-8,9,V.9
ಶ್ಲೋಕ: ಪರಮ ಪವಿತ್ರನು ನಮ್ಮ ದೇವನು |
ಪರಮ ಪಾವನನು ನಮ್ಮೀ ಸ್ವಾಮಿ ದೇವನು|
ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು||
ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನರು|
ಸಮುವೇಲನು ಸಹ ಆತನ ಶರಣದಲಿ ಒಬ್ಬನು|
ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದರು||
ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡಿದನು|
ಕೈಗೊಂಡರು ಅವರು ಅವನಿತ್ತ ವಿಧಿನಿಯಮಗಳನು||
ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ|
ತಪ್ಪನ್ನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ||
ಘನಪಡಿಸಿರೆಮ್ಮ ಸ್ವಾಮಿ ದೇವನನು|
ಶ್ರೀಪರ್ವತದಲಿ ವಂದಿಸಿ ಆತನನು|
ಪರಮಪವಿತ್ರನು ಆ ನಮ್ಮ ದೇವನು||
ಶುಭಸಂದೇಶ: ಮತ್ತಾಯ 5:17-19
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿಗನಾಗುವನು ; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು."
No comments:
Post a Comment