ಮೊದಲನೇ ವಾಚನ: ವಿಮೋಚನಕಾಂಡ 19:2-6
ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ‘ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲೂ ನನಗೆ ಸ್ವಕೀಯ ಜನರಾಗುವಿರಿ. ಅಲ್ಲದೆ ನೀವು ನನಗೆ ಯಾಜಕರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ.’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.
ಕೀರ್ತನೆ: 100: 1-2, 3, 5
ಶ್ಲೋಕ: ಸೃಷ್ಟಿಕರ್ತನ ಜನ, ಆತನೇ ಮೇಯಿಸುವ ಕುರಿಗಳು ನಾವು.
ಎರಡನೇ ವಾಚನ: ರೋಮನರಿಗೆ 5: 6-11
ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು. ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು. ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ. ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ? ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ? ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆ ಪಡುತ್ತೇವೆ.
ಶುಭಸಂದೇಶ: ಮತ್ತಾಯ 9: 35, 10:1-8
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು.ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳ
No comments:
Post a Comment