ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

16.08.23 - "ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ"

ಮೊದಲನೇ ವಾಚನ:ಧರ್ಮೋಪದೇಶಕಾಂಡ 34:1-12

ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೇಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ, ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು, ದಕ್ಷಿಣ ಪ್ರದೇಶ, ಜೋಗರೂರಿನ ತನಕ ಇದ್ದ ಜೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು. ಆನಂತರ, "ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು," ಎಂದು ಹೇಳಿದರು. ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.  ಮೋವಾಬ್ಯರ ದೇಶದಲ್ಲಿ ಬೇತ್ಪೆ ಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು. ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ. ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು. ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು. ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು. ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾಗಿ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದರು. ಇಸ್ರಯೇಲರ ಕಣ್ಮುಂದೆ ವಿಷೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ.

ಕೀರ್ತನೆ: 66:1-3, 5, 8, 16-17
ಶ್ಲೋಕ: ನಮ್ಮ ಪ್ರಾಣವನ್ನು ಉಳಿಸಿದ ದೇವನಿಗೆ ಸ್ತೋತ್ರ

ಶುಭಸಂದೇಶ: ಮತ್ತಾಯ 18:15-20


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ "ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೆ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆ ಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ  ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯಾರ್ಥವಾಗಲಿ. ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆ ಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕ್ರತನೆಂದು ಪರಿಗಣಿಸು. ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು. ಎಂದು ನಿಮಗೆ ಕಚಿತವಾಗಿ ಹೇಳುತ್ತೇನೆ. ಇನ್ನೂ ನಾನು ನಿಮಗೆ  ಹೇಳುವುದು ಏನೆಂದರೆ: ನಿಮ್ಮಲ್ಲಿಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ. ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.

No comments:

Post a Comment