ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

11.09.23 -"ನಿನ್ನ ಕೈಯನ್ನು ಚಾಚು"

 ಮೊದಲನೇ ವಾಚನ: ಕೊಲೊಸ್ಸೆಯರಿಗೆ: 1:24-2:3


ಸಹೋದರರೇ, ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತ ಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ. ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ. ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು, ಅಂದರೆ ತಮ್ಮ ವಾಕ್ಯವನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ. ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ. ನಾವು ಸಾರುತ್ತಲಿರುವುದೂ  ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿ ಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತ ಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ. ನಿಮಗಾಗಿಯೂ ಲವೊದಿಕೀಯರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಯಬಯಸುತ್ತೇನೆ. ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತ ಯೇಸುವನ್ನು ಅರಿತುಕೊಳ್ಳಲು ಸಾಧ್ಯ. ಕ್ರಿಸ್ತ ಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.

ಕೀರ್ತನೆ: 62:6-7,9
ಶ್ಲೋಕ: ಭದ್ರವಾದ ಬಂಡೆ, ನನಗಾಶ್ರಯ ದೇವನೇ

ಆತನೆನಗೆ ದುರ್ಗ, ರಕ್ಷಕ, ಶರಣು I
ನಾನೆಂದಿಗೂ ಕದಲಿ ಬೀಳೆನು II
ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I
ಭದ್ರವಾದ ಬಂಡೆ, ನನಗಾಶ್ರಯ ಆತನೆ II

ನರಮಾನವರೆಲ್ಲರು ಬರೇ ಉಸಿರು I
ನರಾಧಿಪತಿಗಳು ತೀರಾ ಹುಸಿಯು I
ತ್ರಾಸಿನಲಿ ತೂಗಲು ಅವರೆಲ್ಲರು I
ಉಸಿರಿಗಿಂತಲೂ ಅತ್ಯಂತ ಹಗುರು II


ಶುಭಸಂದೇಶ: ಲೂಕ 6:6-11


ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶ ಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು  ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈಯುಳ್ಳವನಿಗೆ, "ಬಂದು ಇಲ್ಲಿ ನಿಲ್ಲು," ಎಂದರು. ಅವನು ಎದ್ದು ಬಂದು ನಿಂತನು. ಆಗ ಯೇಸು ಅವರಿಗೆ, "ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?" ಎಂದರು. ಆನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆ ತಿರುಗಿ, "ನಿನ್ನ ಕೈಯನ್ನು ಚಾಚು," ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.

10.09.23 - "ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಮೊದಲನೇ ವಾಚನ: ಯೆಜೆಕಿಯೇಲ 33:7-9

ಕರ್ತರು ನನಗೆ ಇಂತೆಂದರು: “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು. ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು. ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಕೀರ್ತನೆ: 95:1-2, 6-7, 8-9

ಶ್ಲೋಕ: ಪ್ರಭುವಿನ ಕರೆಗೆ ಕಿವಿಗೊಟ್ಟರೆನಿತೊ ಒಳ್ಳಿತು ನೀವೀಂದೇ

ಎರಡನೇ ವಾಚನ: ರೋಮನರಿಗೆ 13:8-10

ಸಹೋದರರೇ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು. “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.

ಶುಭಸಂದೇಶ: ಮತ್ತಾಯ 18:15-20


ಯೇಸು ತಮ್ಮ ಶಿಷ್ಯರಿಗೆ: “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ. ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.  “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.” ಎಂದರು.

ಸಂತ ಮರಿಯಮ್ಮನವರ ಹಳೆಯ ಗೀತೆಗಳ ಗೀತಗುಚ್ಛ


09.09.23 - "ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,"

 ಮೊದಲನೇ ವಾಚನ: ಕೊಲೊಸ್ಸೆಯರಿಗೆ 1:21-23


ಸಹೋದರರೇ, ಹಿಂದೆ ನೀವು ಆಚಾರವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದೀರಿ. ಈಗಲಾದರೋ ಯೇಸುಕ್ರಿಸ್ತರ ದೈಹಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ. ಇನ್ನು ನೀವು ವಿಶ್ವಾಸದಲ್ಲಿ ದೃಡವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ  ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವ ಸೃಷ್ಟಿಗೂ ಸಾರಲಾಗುತ್ತಿದೆ.

ಕೀರ್ತನೆ: 54:3-4, 6, 8  
ಶ್ಲೋಕ: ನನಗಿದೋ ದೇವನೇ ಸಹಾಯಕನು

ನನಗಿದೋ ದೇವನೆ ಸಹಾಯಕನು I
ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I
ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II
ನನ್ನ ಪ್ರಾರ್ಥನೆಯನು ಆಲಿಸಯ್ಯಾ I
ನನ್ನ ಮಾತುಗಳಿಗೆ ಕಿವಿಗೊಡು ದೇವಾ II ಶ್ಲೋಕ

ನನಗಿದೋ ದೇವನೆ ಸಹಾಯಕನು I
ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I
ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I
ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II


ಶುಭಸಂದೇಶ: ಲೂಕ 6:1-5

ಒಂದು ಸಬ್ಬತ್ ದಿನ ಯೇಸುಸ್ವಾಮಿ, ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾಂಭಿಸಿದರು.  ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, "ಸಬ್ಬತ್ ದಿನದಲ್ಲಿ ನಿಷಿದ್ದವಾದುದನ್ನು ನೀವು ಮಾಡುವುದೇಕೆ?" ಎಂದು ಅವರನ್ನು ಆಕ್ಷೇಪಿಸಿದರು. ಅದಕ್ಕೆ ಯೇಸು, "ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ? ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ? ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ," ಎಂದು ಉತ್ತರಕೊಟ್ಟರು.

08.09.23 - “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು”

ದೇವಮಾತೆಯ ಮಹೋತ್ಸವ 

ಮೊದಲನೇ ವಾಚನ: ಮೀಕ 5:1-4

ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6, 6

ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I
ಹಾಡುವೆ ಗೀತವನು ಮನಃಪೂರ್ವಕವಾಗಿ II

ಶುಭಸಂದೇಶ: ಮತ್ತಾಯ 1:1-16, 18-23


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,  ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,  ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.  ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,  ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.  ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಮರಿಯಮ್ಮನವರ ಗೀತೆಗಳು


                                            



 

07.09.23 - "ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವವನ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,"

ಮೊದಲನೆಯ ವಾಚನ: 1 ಕೊಲೊಸ್ಸೆಯರಿಗೆ 1:9-14


ಸಹೋದರರೇ, ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ. ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭು ಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ದಿ ಹೊಂದುವಿರಿ. ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ. ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ. ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ. ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ. ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಶಲಭಿಸಿದೆ.

ಕೀರ್ತನೆ 98:2-6
ಶ್ಲೋಕ: ಪ್ರಕಟಿಸಿಹನಾ ಪ್ರಭು ಮುಕ್ತಿವಿಧಾನವನು.

ಪ್ರಕಟಿಸಿಹನಾ ಪ್ರಭು ಮುಕ್ತಿವಿಧಾನವನು
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ
ನಮ್ಮ ದೇವ ಸಾಧಿಸಿದ. ಜಯಗಳಿಕೆ
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ

ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ
ಭಜಿಸಿರಿ ಆತನನು ವಾದ್ಯಮೇಳದೊಂದಿಗೆ
ಊದಿರಿ ಕೊಂಬನು, ತುತೂರಿಯನು
ಉದ್ಘೋಷಿಸಿರಿ, ಪ್ರಭು ರಾಜನನು

ಶುಭಸಂದೇಶ: ಲೂಕ 5:1-11


ಆ ಕಾಲದಲ್ಲಿ ಒಮ್ಮೆ ಯೇಸು ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. ಬೋಧನೆ ಮುಗಿದದ್ದೇ ಸಿಮೋನನಿಗೆ, " ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ, " ಎಂದರು. ಅದಕ್ಕೆ ಸಿಮೋನನು, " ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ, ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆಕೊಟ್ಟು ಬಲೆಗಳನ್ನು ಹಾಕುತ್ತೇವೆ, " ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು, ಬಲೆಗಳು ಹರಿದು ಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, " ಸ್ವಾಮಿ, ನಾನು ಪಾಪಾತ್ಮ, ನನ್ನಿಂದ ದೂರವಿರಿ! " ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು -- ಯಕೋಬ ಮತ್ತು ಯೊವಾನ್ನರು -- ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, " ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವವನ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ, " ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

06.09.23 - "ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,"

ಮೊದಲನೆಯ ವಾಚನ: ಪೌಲನು ಕೊಲೊಸ್ಸೆಯರಿಗೆ ಬರೆದ ಪತ್ರ 1:1-8

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ. ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗು ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಸತ್ಯ ವಾಕ್ಯದ, ಅಂದರೆ, ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ. ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ. ಈ ಶುಭಸಂದೇಶವನ್ನು ಕ್ರಿಸ್ತ ಯೇಸುವಿನ ನಂಬಿಗಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ. ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಕೀರ್ತನೆ 52:8-9
ಶ್ಲೋಕ: ದೇವರ ಸ್ಥಿರ ಪ್ರೀತಿಯನು ಯುಗಯುಗಾಂತರಕ್ಕೂ ನಂಬಿಕೊಂಡಿರುವೆನು.


ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆ ಮರದಂತಿರುವೆನು
ದೇವರ ಸ್ಥಿರ ಪ್ರೀತಿಯನು ಯುಗಯುಗಾಂತರಕ್ಕೂ ನಂಬಿಕೊಂಡಿರುವೆನು

ನಿನ್ನುಪಕಾರವನು ಹೇ ದೇವಾ, ನಾನು ಸದಾ ಸ್ಮರಿಸುವೆನು
ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು


ಶುಭಸಂದೇಶ: ಲೂಕ 4:38-44

ಆ ಕಾಲದಲ್ಲಿ ಪ್ರಾರ್ಥನಾಮಂದಿರದಿಂದ ಹೊರಟು ಯೇಸು ಸಿಮೋನನ ಮನೆಗೆ ಬಂದರು. ಸಿಮೋನನ ಅತ್ತೆ ವಿಷಮ ಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟು ಹೋಗೆಂದು ಆಜ್ಞಾಪಿಸಿದರು, ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುವಿನ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬರ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು. ಆನೇಕರ ಮೈಮೇಲಿದ್ದ ದೆವ್ವಗಳು ಸಹ, " ನೀವು ದೇವರ ಪುತ್ರ, " ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದವು. ಇವರೇ ' ಕ್ರಿಸ್ತ ' ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. ಬೆಳಗಾಗುತ್ತಲೇ, ಯೇಸು ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು, ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು. ಅವರಿಗೆ ಯೇಸು, "ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ, " ಎಂದರು. ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.

04.09.23 - ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.

ಮೊದಲನೆಯ ವಾಚನ: ಪೌಲನು ಥೆಸಲೋನಿಯರಿಗೆ ಬರೆದ ಮೊದಲನೆಯ ಪತ್ರ  4:13-18




ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದೆ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು. ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ ? ಹಾಗೆಯೇ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣ ಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ. ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ. ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದು ಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದು ಬರುತ್ತಾರೆ. ಆಮೇಲೆ, ಇನ್ನೂ ಬದುಕಿರುವ ನಾವು ಎದ್ಧುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪಭುವಿನೊಂದಿಗೆ ಇರುತ್ತೇವೆ. ಆದ್ದರಿಂದ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.

ಕೀರ್ತನೆ 96:1, 3, 4-5, 11-13
ಶ್ಲೋಕ: ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ.

ಹೊಸ ಗೀತೆಯನು ಹಾಡಿರಿ ಪ್ರಭುವಿಗೆ
ವಿಶ್ವವೆಲ್ಲವು ಹಾಡಲಿ ಆತನಿಗೆ
ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ
ಆತನದ್ಭುತಕಾರ್ಯಗಳನು ಸಕಲ ಜನಾಂಗಗಳಿಗೆ

ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು
ಸಕಲ ದೇವರುಗಳಿಗಿಂತಲೂ ಘನ ಗಂಭೀರನು
ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ
ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ

ಹರ್ಷಿಸಲಿ ಆಕಾಶವು, ಸಂತೋಷಿಸಲಿ ಎಂದು ಭೂಲೋಕವು
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು

ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ
ಜಗಕೂ ಜನತೆಗೂ ತೀರ್ಪಿಡುವನು ನೀತಿನಿಯಮಾನುಸಾರವಾಗಿ

ಶುಭಸಂದೇಶ: ಲೂಕ 4:16-30


ಆ ಕಾಲದಲ್ಲಿ ಯೇಸು ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರ ಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: "ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ, ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಿಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ." ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, " ನೀವು ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು, " ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. " ಇವನು ಜೋಸೆಫನ ಮಗನಲ್ಲವೇ? " ಎಂದು ಮಾತನಾಡಿಕೊಂಡರು. ಅನಂತರ ಯೇಸು ಅವರಿಗೆ, " 'ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ ' ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ, ಅಲ್ಲದೆ, ' ಕಪೆರ್ನವುಮಿನಲ್ಲಿ ನೀನು ಎಂತೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು, ' ಎಂದೂ ಹೇಳುವಿರಿ. ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯಾಗಿದ್ದರು. ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಿದರು. ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮಾನನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ, " ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಗೋಪಗೊಂಡರು. ಯೇಸುವನ್ನು ಆ ಊರ ಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಯೇಸುವಾದರೋ ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.

05.09.23 - "ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು"

 ಮೊದಲನೇ ವಾಚನ: 1 ಥೆಸಲೋನಿಯರಿಗೆ 5:1-6, 9-11


ಸಹೋದರರೇ, ಇದೆಲ್ಲ ನಡೆಯಲ್ಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ. ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ. ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಬ್ರ್ ಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು. ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ. ಅಂದ ಮೇಲೆ, ಇತರರಂತೆ ನಾವು ನಿದ್ದೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ. ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ, ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೇ ನಮಗಾಗಿ ಅವರು ಸಾವನ್ನಪ್ಪಿದರು. ಆದುದರಿಂದ ನೀವು ಈಗ ನಡೆದುಕೊಳ್ಳುತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿದರು.

ಕೀರ್ತನೆ: 27:1, 4, 13-14
ಶ್ಲೋಕ: ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೇ, ನಾನಾರಿಗೂ ಅಳುಕೆನು
ನನ್ನ ಬಾಳಿಗಾಧಾರ ಪ್ರಭುವೇ, ನಾನಾರಿಗೂ ಅಂಜೆನು

ನಾನೊಂದನು ಕೋರಿದೆ ಪ್ರಭುವಿನಿಂದ
ನಾನದನ್ನೇ ನಿರೀಕ್ಷಿಸಿದೆ ಆತನಿಂದ
ವಾಸಿಸಬೇಕೂ ಜೀವಮಾನವೆಲ್ಲ ನಾನಾತನ ಮಂದಿರದಲಿ
ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ

ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು
ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು
ಪ್ರಭುವನು ಎದುರುನೋಡುತ್ತಿರು ಮನವೇ
ಧ್ಯೆರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ

ಶುಭಸಂದೇಶ: ಲೂಕ 4:31-37


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್ ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು. ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. ದುಷ್ಟ ದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು. ಅವನು, "ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು," ಎಂದು ಗಟ್ಟಿಯಾಗಿ ಕಿರುಚಿದನು. ಆದರೆ ಯೇಸು ಅವನನ್ನು ಗದರಿಸಿ, "ಸುಮ್ಮನಿರು, ಇವನನ್ನು ಬಿಟ್ಟು ತೊಲಗು," ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೇಡುಕನ್ನೂ ಮಾಡದೆ ಅವನನ್ನು ಬಿಟ್ಟುಹೋಯಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. "ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವಲ್ಲಾ!" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.

03.09.23 - ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,”

ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ. ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ. ‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.

ಕೀರ್ತನೆ: 63:2, 3-4, 5-6, 8-9

ಕೀರ್ತನೆ                 63:1-8

ಶ್ಲೋಕ:  ದೇವಾ,  ನಿನಗಾಗಿ  ಎನ್ನ  ಮನ  ಕಾದಿದೆ |

1.  ದೇವಾ,  ನೀಯೆನ್ನ  ದೇವ,  ನಿನಗಾಗಿ  ನಾ  ಕಾದಿರುವೆ|
ನಿರ್ಜಲ  ಮರುಭೂಮಿಯಲ್ಲಿ  ನೀರಿಗಾಗಿ  ಹಾತೊರೆವಂತೆ|
ನಿನಗೋಸ್ಕರ  ಎನ್ನ  ತನು  ಸೊರಗಿದೆ,  ಮನ  ಬಾಯಾರಿದೆ||

2.  ನಿನ್ನ  ಮಂದಿರದಲಿ  ನನಗಾದ  ದರ್ಶನದಲಿ|
ನಿನ್ನ  ಶಕ್ತಿ  ಪ್ರತಿಭೆಯನ್ನು  ಕಂಡಿರುವೆನಲ್ಲಿ||
ಪ್ರಾಣಕ್ಕಿಂತಲೂ  ಮಿಗಿಲಾದುದು  ನಿನ್ನಚಲ  ಪ್ರೀತಿ|
ಎಡೆಬಿಡದೆ  ಮಾಳ್ವದು  ನನ್ನೀ  ತುಟಿ  ನಿನ್ನ  ಸ್ತುತಿ||

3.  ನಿನ್ನ  ಸ್ತುತಿಸುವೆ  ಜೀವಮಾನ  ಪರಿಯಂತ|
ಕೈಮುಗಿವೆ  ನಿನ್ನ  ನಾಮದ  ಸ್ಮರಣಾರ್ಥ||
ಮೃಷ್ಟಾನ್ನ  ತಿಂದಂತೆ  ಎನ್ನ  ಮನ  ಸಂತೃಪ್ತ|
ಸಂಭ್ರಮದಿಂದ  ನಿನ್ನ  ಹೊಗಳುವುದು ಬಾಯ್ತುಂಬ||

4.  ನನಗೆ  ನೀನು  ನಿರಂತರದ  ಸಹಾಯಕ|
ನಿನ್ನ  ರೆಕ್ಕೆಗಳಡಿ  ನಾ  ಸುಖಿ  ಗಾಯಕ||
ನನ್ನಾತ್ಮ  ನಿನಗಾತುಕೊಂಡಿದೆ|
ನಿನ್ನ  ಬಲಗೈ  ನನಗಿಂಬಾಗಿದೆ||

ಎರಡನೇ ವಾಚನ: ರೋಮನರಿಗೆ 12:1-2


ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ. 2ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಶುಭಸಂದೇಶ: ಮತ್ತಾಯ 16:21-27


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.  ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು. ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು. ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.  ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?  ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

02.09.23 - "ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ"

ಮೊದಲನೇ ವಾಚನ: 1 ಥೆಸಲೋನಿಯರಿಗೆ 4:9-11

ಸೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ. ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ. ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.

ಕೀರ್ತನೆ: 98:1, 7-8, 9
ಶ್ಲೋಕ: ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು.

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
ಎಸಗಿಹನಾತನು ಪವಾಡ ಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು

ಗರ್ಜಿಸಲಿ ಸಮುದ್ರವು ಅವರಲ್ಲಿರುವುದೆಲ್ಲವು
ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು
ಚಪ್ಪಾಳೆ ಹೊಡೆಯಲಿ ನದಿಗಳು
ತಟ್ಟಾಡಲಿ ಬೆಟ್ಟಗುಡ್ಡಗಳು

ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು
ಜಗಕು, ಜನೆತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು

ಶುಭಸಂದೇಶ: ಮತ್ತಾಯ 25:14-30


"ಅದು ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ದಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾಸಿದ್ದೇನೆ." ಎಂದ. ಅದಕ್ಕೆ ಆ ಧಣಿ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ. ಎರಡು ತಲೆಂತು ಪಡೆದಿದ್ದವನೂ ಮಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ.  ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ.  ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ: 'ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ  ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ," ಎಂದ. "ಆಗ ಧಣಿ ಅವನಿಗೆ, "ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು  ಎಂದು ನಿನಗೆ ಗೊತ್ತಿಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿ ಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ", ಎಂದ. ಆನಂತರ ಪರಿಚಾರಕರಿಗೆ, "ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಿಡಬೇಕಾಗುವುದು," ಎಂದು ಹೇಳಿದ.

01.09.23

ಮೊದಲನೇ ವಾಚನ: 1 ಥೆಸಲೋನಿಯರಿಗೆ 4:1-8

ಸಹೋದರರೇ, ನೀವು ಹೇಗೆ ಬಾಳಬೇಕು, ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹಾಗೂ ಪ್ರಬೋಧಿಸುತ್ತೇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ. ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ. ನಿಮ್ಮಲ್ಲಿ  ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ, ಗೌರವದಿಂದಲೂ ಶುದ್ಧ ಮನಸ್ಸಿನಿಂದಲೂ ನಡೆಸಿಕೊಳ್ಳಬೇಕು. ದೇವರ ಅರಿವೇ ಇಲ್ಲದ ಅನ್ಯ ಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ. ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ. ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.

ಕೀರ್ತನೆ: 97:1, 2, 5-6, 10, 11-12
ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು:  "ಆ ದಿನಗಳಲ್ಲಿ ಸ್ವರ್ಗ ಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತು ಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು, ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ  ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆ ಹೋದರು. ನಡುರಾತ್ರಿಯ ವೇಳೆ, "ಇಗೋ,  ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ," ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮ ತಮ್ಮ ದೀಪದ ಬುತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, "ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ," ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, "ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು. ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು," ಎಂದರು. ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇ ಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು. ಉಳಿದ ಕನ್ಯೆಯರು ಆನಂತರ ಬಂದರು. "ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ," ಎಂದು ಕೂಗಿಕೊಂಡರು. ಅದಕ್ಕೆ ಉತ್ತರವಾಗಿ ಆ ಮದುವಣಿಗ, "ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ," ಎಂದುಬಿಟ್ಟ. ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.

31.08.23 - " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು"

ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13


ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಕೀರ್ತನೆ 90:3-4, 12-13, 14-17
ಶ್ಲೋಕ: ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ,
' ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ ' ಎನ್ನುತಿಹೆ,,
ನಿನ್ನ ದೃಷ್ಟಿಯಲಿ ಪ್ರಭೂ, ಸಹಸ್ರ ವರುಷ,
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ,,

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು,
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು,
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?,
ನಿನ್ನೀ ಸೇವಕರ ಮೇಲಿರಲಿ ಮರುಕ,,

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ,
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ,,
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ,
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ,,

ಶುಭಸಂದೇಶ: ಮತ್ತಾಯ 24:42-51


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."

30.08.23 - "ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ"

ಮೊದಲನೇ ವಾಚನ: 1 ಥೆಸಲೋನಿಯರಿಗೆ 2:9-13

ಸಹೋದರರೇ, ನಮ್ಮ ಶ್ರಮ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು. ವಿಶ್ವಾಸಿಗಳಾದ ನಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ,  ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುವುದಕ್ಕೆ ನೀವೇ ಸಾಕ್ಷಿಗಳು. ಮಾತ್ರವಲ್ಲದೆ ದೇವರೂ ಸಾಕ್ಷಿಯೇ. ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು. ಪ್ರೊತ್ಸಾಹಿಸಿದೆವು. ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ. ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.

ಕೀರ್ತನೆ: 139:7-8, 9-10, 11-12
ಶ್ಲೋಕ: ಪ್ರಭೂ, ಪರಿಶೋಧಿಸಿರುವೆ ನೀ ನನ್ನನು, ಅರಿತುಕೊಂಡಿರುವೆ ಅಂತರಂಗವನು

ಶುಭಸಂದೇಶ: ಮತ್ತಾಯ 23:27-32

ಯೇಸು,  ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು. "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ  ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.  ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ, ಕಲ್ಮಷಗಳಿಂದ ತುಂಬಿದವರು. ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ. ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. "ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ" ಎಂದುಕೊಳ್ಳುತ್ತೀರಿ. ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿ ಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."

29.08.23 - "ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು."

ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 1:17-19

ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.  ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.  ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".

ಕೀರ್ತನೆ: 71:1-2, 3-4, 5-6, 15, 17

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು

ಶುಭಸಂದೇಶ: ಮಾರ್ಕ  6:17-29


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.  ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.  ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.  ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.  ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.  ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.  ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.  ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.  ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.  ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

28.08.23 - "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! "

ಮೊದಲನೇ ವಾಚನ: 1 ಥೆಸಲೋನಿಯರಿಗೆ 1:1-5, 8-10

ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸೆಲೋನಿಕದ ಸಭೆಯವರಿಗೆ ಪೌಲ,  ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವಿಶ್ವಾಸಭರರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ. ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು. ನಮ್ಮ ಶುಭಸಂದೇಶ ಕೇವಲ ಬಾಯಿ ಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ. ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ  ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ. ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ; ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರು ನೋಡುತ್ತಿದ್ದೀರಿ,  ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವ ಕೋಪದಿಂದ ನಮ್ಮನ್ನು ಪಾರು ಮಾಡುವವರು.

ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು

ಶುಭಸಂದೇಶ: ಮತ್ತಾಯ 23:13-22


 "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗ ಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ.) ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲ ನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. "ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ.  ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿ ಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಟಿಹೀನರೇ!ಯಾವುದು ಶ್ರೇಷ್ಠ! ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲಸಿರುವ ದೇವರ ಮೇಲೂ ಆಣೆಯಿಡುತ್ತಾನೆ. ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.

27.08.23 - “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,”

ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 22:15, 19-23

ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು : ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು. “ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.  ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.  ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.  ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು."

ಕೀರ್ತನೆ: 138:1-2, 2-3, 6, 8

ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು

ಎರಡನೇ ವಾಚನ: ರೋಮನರಿಗೆ 11:33-36

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ! “ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು? ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?” ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಶುಭಸಂದೇಶ: ಮತ್ತಾಯ 16:13-20


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.  ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.  ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.  ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.  ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.  ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.  ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”  ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

26.08.23

 ಮೊದಲನೇ ವಾಚನ: ರೂತ 2:1-3, 8-11; 4:13-17

ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು. ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು. ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು. ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು. ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು. ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು. ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.
ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ: “ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ! ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತ ಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಆ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು. ನವೊಮಿ ಆ ಮಗುವನ್ನು ಎತ್ತಿಕೊಂಡು ತನ್ನ ಮಡಿಲಲ್ಲಿಟ್ಟುಕೊಂಡು ಸಾಕಿ ಸಲಹಿದಳು. ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.

ಕೀರ್ತನೆ: 128:1-5
ಶ್ಲೋಕ: ಹೊಂದುವನು ಆಶೀರ್ವಾದವನು ಪ್ರಭುವಿನಲಿ ಭಯಭಕ್ತಿಯುಳ್ಳವನು.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು
ಧನ್ಯನು, ಆತನ ಮಾರ್ಗಗಳಲೇ ನಡೆಯುವವನು
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು
ಧನ್ಯನಾಗುವೆ ನೀನು, ನಿನಗೆ ಶುಭವಾಗುವುದು

ಇರುವಳು ನಿನ್ನ ಪತ್ನಿ ಮನೆಯಲಿ ಫಲಭರಿತ ದ್ರಾಕ್ಷಲತೆಯಂತೆ
ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ

ಓಲಿವ್ ಸಸಿಗಳಂತೆ ಹೊಂದುವನು ಅಂತಹ ಆಶೀರ್ವಾದವನು
ಪ್ರಭುವಿನಲಿ ಭಯಭಕ್ತಿಯುಳ್ಳವನು
ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಿಸಲಿ
ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ

ನಮ್ಮ ನಾಡು ನೀಡುವುದು ಬೆಳೆಯನು
ನಡೆವುದು ಪ್ರಭುವಿನ ಮುಂದೆ ನೀತಿ
ಮಾಡುವುದು ಆತನ ಹೆಜ್ಜೆಗೆ ಹಾದಿ


ಶುಭಸಂದೇಶ: ಮತ್ತಾಯ 23:1-12

ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು: “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದಮಾಡಿಕೊಳ್ಳುತ್ತಾರೆ. ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

25.08.23 - "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು"

ಮೊದಲನೇ ವಾಚನ: ರೂತ 1:1, 3-6, 14-16, 22


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನಾದ ಎಲಿಮಲೆಕ್ ಎಂಬುವವನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು. ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿಇಬ್ಬರು ಗಂಡು ಮಕ್ಕಳೊಡನೆ ಅಲ್ಲೇ ಉಳಿದಳು. ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹವಾದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ, ಪುತ್ರರಾದ ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳಾದಳು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದುಬಂತು. ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ. ಆಗ ನವೊಮಿ ರೂತಳಿಗೆ: "ನೋಡು, ನಿನ್ನ ಓರಗಿತ್ತಿಯ ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು," ಎಂದು ಒತ್ತಾಯಪಡಿಸಿದಳು. ಅದಕ್ಕೆ ರೂತಳು; "ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನೂ ಅಲ್ಲೇ ವಾಸಿಸುತ್ತೇನೆ." ಎಂದಳು. ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು.

ಕೀರ್ತನೆ: 146:5-6, 6-7, 8-9, 9-10
ಶ್ಲೋಕ: ಎನ್ನ ಮನವೇ, ವಂದಿಸು ಪ್ರಭುವನು

ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು
ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು
ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೇ
ಕೊಟ್ಟ ವಾಗ್ಧಾನಗಳನು ತಪ್ಪದೆ ನೆರವೇರಿಸುವವ ಆತನೆ

ದೊರಕಿಸುವನು ನ್ಯಾಯ ದಲಿತರಿಗೆ
ಓದಗಿಸುವನು ಆಹಾರ ಹಸಿದವರಿಗೆ
ನೀಡುವನು ಬಿಡುಗಡೆ ಬಂಧಿತರಿಗೆ

ಕಣ್ಣನ್ನೀಯುವನು ಪ್ರಭು ಕುರಡರಿಗೆ
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ
ರಕ್ಷಿಸುವನು ಪ್ರಭು ಪರದೇಶಿಗಳನು
ಆದರಿಸುವನು ಅನಾಥರನು, ವಿಧವೆಯರನು

ಆತನ ಒಲವಿರುವುದು ಸಾದು ಸಜ್ಜನರಿಗೆ
ನಿರ್ಮೂಲಮಾಡುವನು ದುರ್ಜನರ ಮಾರ್ಗವನು
ಪ್ರಭುವೇ ಅರಸನು ಸದಾಕಾಲಕು
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು

ಶುಭಸಂದೇಶ: ಮತ್ತಾಯ 22:34-40


ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.  ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: "ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?" ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ  ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು." ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ, ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, "ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು." ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ," ಎಂದರು.

24.08.23 - "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,"

ಮೊದಲನೇ ವಾಚನ: ಪ್ರಕಟನಾ ಗ್ರಂಥ 21:9-14

ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತಾನಾಡಿ ಇಂತೆಂದನು: "ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ," ಎಂದನು. ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು; ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಪಟಿಕದಂತೆ ಶುಭ್ರವಾಗಿತ್ತು. ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ:145:10-11, 12-13, 17-18
ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಪಭು ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು
ಕೊಂಡಾಡುವುದು ನಿನ್ನನು ಭಕ್ತ ಸಮೂಹವು
ಪ್ರಸಿದ್ದಪಡಿಸುವರು ನಿನ್ನ ರಾಜ್ಯದ ಮಹತ್ವವನು
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನ್ನು

ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು
ಶಾಶ್ವತವಾದುದು ನಿನ್ನ ರಾಜ್ಯವು
ಇರುವುದೆಂದಿಗು ನಿನ್ನ ಆಳ್ವಿಕೆಯು

ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು
ಎಲ್ಲರ ಕೋರಿಕೆಗಳನು ಈಡೇರಿಸುವವನು
ಪ್ರಭುವಿನ ಮಾರ್ಗ ಧರ್ಮಸಮ್ಮತ
ಆತನ ಕಾರ್ಯವೆಲ್ಲ ಪುನೀತ

ಶುಭಸಂದೇಶ: ಯೊವಾನ್ನ 1:45-51

ಫಿಲಿಪನು ನತಾನಿಯೇಲನನ್ನು ಕಂಡು, "ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು," ಎಂದು ಹೇಳಿದನು. ಅದಕ್ಕೆ ನತಾನಿಯೇಲನು, "ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದುಂಟೆ?" ಎಂದು ಕೇಳಲು, "ಬಂದು ನೀನೇ ನೋಡು," ಎಂದು ಫಿಲಿಪ್ಪನು ಉತ್ತರಕೊಟ್ಟನು. ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು, "ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರಕೊಟ್ಟರು. ಅದಕ್ಕೆ ನತಾನಿಯೇಲನು "ಗುರುದೇವಾ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದುವುಗಳನ್ನು ನೀನು ಕಾಣುವೆ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನೂ ನಿಮಗೆ  ಸತ್ಯವಾಗಿ ಹೇಳುತ್ತೇನೆ. ಸ್ಥರ್ಗವು ತೆರೆದಿರುವುದನ್ನು ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.

23.08.23 - "ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?"

ಮೊದಲನೇ ವಾಚನ: ನ್ಯಾಯಸ್ಥಾಪಕರು 9:6-15


ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕ ಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು. ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: "ಶೆಕೆಮಿನ ಜನರೇ, ನನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು; ಒಮ್ಮೆ ಮರಗಳು ತಮಗೆ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಓಲಿವ್ ಮರದ ಬಳಿಗೆ ಬಂದು, "ನೀನು ನಮಗೆ ಅರಸನಾಗು," ಎಂದವು. ಅದು ಅವುಗಳಿಗೆ, "ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?" ಎಂದಿತು. ಬಳಿಕ ಆ ಮರಗಳು ಅಂಜೂರದ ಗಿಡದ ಬಳಿಗೆ ಹೋಗಿ ಅದಕ್ಕೆ, "ನೀನು ಬಂದು ನಮ್ಮ ಅರಸನಾಗು," ಎಂದವು. ಅದು, "ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?" ಎಂದಿತು. ಆನಂತರ ಆ ಮರಗಳು ದ್ರಾಕ್ಷಾಬಳ್ಳಿಯ ಬಳಿಗೆ ಹೋಗಿ, "ನೀನು ಬಂದು ನಮ್ಮ ಅರಸನಾಗು," ಎಂದವು. ಅದಕ್ಕೆ ಆ ಬಳ್ಳಿ, "ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?" ಎಂದಿತು. ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, "ನೀನು ಬಂದು ನಮ್ಮ ಅರಸನಾಗು," ಎಂದವು. ಅದಕ್ಕೆ ಆ ಪೊದೆ, "ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದಾರೆ, ಬನ್ನಿ, ಬಂದು ನನ್ನ ನೆರಳಲ್ಲಿ ಆಶ್ರಯಿಸಿಕೊಳ್ಳಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು," ಎಂದು ಬಿಟ್ಟಿತು.

ಕೀರ್ತನೆ: 21:2-3, 4-5, 6-7

ಶ್ಲೋಕ: ಅರಸನಿಗೆ ಹರ್ಷವಾಯಿತು ಪ್ರಭೂ, ನೀ ತೋರಿದ ಪರಾಕ್ರಮಕ್ಕಾಗಿ

ಶುಭಸಂದೇಶ: ಮತ್ತಾಯ 20:1-16


ಯೇಸು ತಮ್ಮ ಶಿಷ್ಯರಿಗೆ ಈ ಸಾಮತಿ ಹೇಳಿದರು, ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆಗೆ ಹೋದ ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ. ನೀವೂ ನನ ದ್ರಾಕ್ಷಿತೋಟಕ್ಕೆ ಹೋಗಿರಿ ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ರೇನೆ, ಎಂದ. ಅವರೂ ಹೋದರು. ಬಳಿಕ  ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ದಿನವಿಡೀ ಕೆಲಸ ಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?" ಎಂದು ಕೇಳಿದ, ಅದಕ್ಕೆ ಅವರು, "ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ," ಎಂದರು. "ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿ ತೋಟಕ್ಕೆ ಹೋಗಿ ಕೆಲಸಮಾಡಿ," ಎಂದು ಹೇಳಿ ಅವರನ್ನೂ ಕಳುಹಿಸಿದ. "ಸಂಜೆಯಾಯಿತು. ತೋಟದ ಯಜಮಾನ ತನ್ನ ಮೇಸ್ತ್ರಿಗೆ, "ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು," ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು. ಮೊತ್ತಮೊದಲು ಗೊತ್ತುಮಾಡಿದವರು  ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ  ಬೆಳ್ಳಿನಾಣ್ಯ ದೊರಕಿತು. ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು. "ಕಡೇ ಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ  ಕೆಲಸಮಾಡಿದ್ದಾರೆ; ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದು ನಮ್ಮನ್ನು ಇವರಿಗೆ ಸರಿಸಮ  ಮಾಡಿದ್ದೀರಲ್ಲಾ!" ಎಂದರು. ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, "ಅಯ್ಯಾ, ನಿನಗೆ ನಾನು ಅನ್ಯಾಯ ಮಾಡಿಲ್ಲ. ದಿನಕೊಂದು ಬೆಳ್ಳಿ ನಾಣ್ಯದಂತೆ ನೀನು ನನ್ನೊಡನೆ ಒಪ್ಪಂದ ಮಾಡಿಕೊಳ್ಳಲಲ್ಲವೇ? ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ . ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?" ಎಂದ. ಹೀಗೆ, ಕಡೆಯವರು ಮೊದಲಿಗರಾಗುವರು; ಮೊದಲಿನವರು ಕಡೆಯವರಾಗುವರು," ಎಂದು ಯೇಸು ಬೋಧಿಸಿದರು.