ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.09.23

ಮೊದಲನೇ ವಾಚನ: 1 ಥೆಸಲೋನಿಯರಿಗೆ 4:1-8

ಸಹೋದರರೇ, ನೀವು ಹೇಗೆ ಬಾಳಬೇಕು, ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹಾಗೂ ಪ್ರಬೋಧಿಸುತ್ತೇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ. ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ. ನಿಮ್ಮಲ್ಲಿ  ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ, ಗೌರವದಿಂದಲೂ ಶುದ್ಧ ಮನಸ್ಸಿನಿಂದಲೂ ನಡೆಸಿಕೊಳ್ಳಬೇಕು. ದೇವರ ಅರಿವೇ ಇಲ್ಲದ ಅನ್ಯ ಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ. ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ. ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.

ಕೀರ್ತನೆ: 97:1, 2, 5-6, 10, 11-12
ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು:  "ಆ ದಿನಗಳಲ್ಲಿ ಸ್ವರ್ಗ ಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತು ಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು, ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ  ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆ ಹೋದರು. ನಡುರಾತ್ರಿಯ ವೇಳೆ, "ಇಗೋ,  ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ," ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮ ತಮ್ಮ ದೀಪದ ಬುತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, "ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ," ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, "ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು. ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು," ಎಂದರು. ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇ ಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು. ಉಳಿದ ಕನ್ಯೆಯರು ಆನಂತರ ಬಂದರು. "ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ," ಎಂದು ಕೂಗಿಕೊಂಡರು. ಅದಕ್ಕೆ ಉತ್ತರವಾಗಿ ಆ ಮದುವಣಿಗ, "ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ," ಎಂದುಬಿಟ್ಟ. ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.

No comments:

Post a Comment