ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

28.08.23 - "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! "

ಮೊದಲನೇ ವಾಚನ: 1 ಥೆಸಲೋನಿಯರಿಗೆ 1:1-5, 8-10

ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸೆಲೋನಿಕದ ಸಭೆಯವರಿಗೆ ಪೌಲ,  ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವಿಶ್ವಾಸಭರರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ. ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು. ನಮ್ಮ ಶುಭಸಂದೇಶ ಕೇವಲ ಬಾಯಿ ಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ. ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ  ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ. ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ; ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರು ನೋಡುತ್ತಿದ್ದೀರಿ,  ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವ ಕೋಪದಿಂದ ನಮ್ಮನ್ನು ಪಾರು ಮಾಡುವವರು.

ಕೀರ್ತನೆ: 149:1-2, 3-4, 5-6, 9
ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು

ಶುಭಸಂದೇಶ: ಮತ್ತಾಯ 23:13-22


 "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗ ಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ.) ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲ ನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. "ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ.  ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿ ಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಟಿಹೀನರೇ!ಯಾವುದು ಶ್ರೇಷ್ಠ! ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲಸಿರುವ ದೇವರ ಮೇಲೂ ಆಣೆಯಿಡುತ್ತಾನೆ. ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.

No comments:

Post a Comment