ಮೊದಲನೇ ವಾಚನ: ಕೊಲೊಸ್ಸೆಯರಿಗೆ 3:1-11
ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ದಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನ ಕೊಡಿ. ಕ್ರಿಸ್ತ ಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ. ನೀವು ಕ್ರಿಸ್ತ ಯೇಸುವಿನೊದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ. ಕ್ರಿಸ್ತ ಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವು ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ. ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ, ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ. ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ. ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿ ನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದೀರಿ. ಈಗಲಾದರೋ ಕೋಪ, ರೋಷ, ಮತ್ಸರ ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು. ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ. ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ. ಇಂಥ ಹೊಸ ಜೀವನದಲ್ಲಿ ಯೆಹೂದ್ಯ - ಗ್ರೀಕ, ಸುನ್ನತಿ ಹೊಂದಿದವ - ಸುನ್ನತಿ ಇಲ್ಲದವ, ನಾಗರಿಕ - ಅನಾಗರಿಕ, ಯಜಮಾನ - ಗುಲಾಮ ಎಂಬ ಭಿನ್ನಭೇದಗಳಿಲ್ಲ. ಕ್ರಿಸ್ತ ಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.
ಕೀರ್ತನೆ: 145:2-3, 10-11, 12-13
ಶ್ಲೋಕ: ಪ್ರಭುವಿನ ಕರುಣೆ ಎಲ್ಲರ ಮೇಲೆ
ಶುಭಸಂದೇಶ: ಲೂಕ 6:20-26
ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: "ದೀನದಲಿತರೇ,, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕು ನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.
No comments:
Post a Comment