ಮೊದಲನೇ ವಾಚನ: 1 ತಿಮೊಥೇಯನಿಗೆ 2:1-8
ಮೊತ್ತ ಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತವಾಗಿ ಶಾಂತಿ ಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು. ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ, ದೇವರು ಒಬ್ಬರೇ, ಅವರೇ ಮಾನವರಾಗಿರುವ ಕ್ರಿಸ್ತಯೇಸು. ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು. ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.
ಕೀರ್ತನೆ: 28:2, 7, 8-9
ಶ್ಲೋಕ: ಪ್ರಭುವಿಗೆನ್ನ ಕೃತಜ್ಞತಾ ವಂದನೆ.
ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I
ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II
ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I
ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II
ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I
ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II
ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I
ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II
ಶುಭಸಂದೇಶ: ಲೂಕ 7:1-10
ಜನರಿಗೆ ಮನಮುಟ್ಟುವಂತೆ ಬೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳೆ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕರನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಆರ್ಹನು. ನಮ್ಮ ಜನರ ಮೆಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾ ಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ ಶತಾಧಿಪತಿ ತನ್ನ ಗೆಳೆಯರ ಮುಖಾಂತರ, "ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು "ಬಾ, ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು," ಎಂದರೆ ಹೋಗುತ್ತಾನೆ. ಸೇವಕನಿಗೆ "ಇಂಥದ್ದನ್ನು ಮಾಡು," ಎಂದರೆ ಮಾಡುತ್ತಾನೆ," ಎಂದು ಹೇಳಿ ಕಳುಹಿಸಿದನು. ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು. ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥವಾಗಿದ್ದುದನ್ನು ಕಂಡರು.
No comments:
Post a Comment