ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.10.23 - ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು'

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 5:1-7

ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು: ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು. ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು! ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ: “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ. ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ: ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ. ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ. ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ!

ಕೀರ್ತನೆ: 80:9, 12, 13-14, 15-16, 19-20

ಶ್ಲೋಕ: ಅನುಗ್ರಹಿಸಿದನು ಪ್ರಭು ಸ್ವರ್ಗದ ದವಸಧಾನ್ಯವನು 

ಎರಡನೇ ವಾಚನ: ಫಿಲಿಪ್ಪಿಯರಿಗೆ  4:6-9


ಸಹೋದರರೇ, ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ. ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು. ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ. ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.

ಶುಭಸಂದೇಶ: ಮತ್ತಾಯ 21:33-43


ಯೇಸು ಮುಖ್ಯಯಾಜಕರಿಗೂ ಪ್ರಜಾಪ್ರಮುರಿಗೂ ಹೀಗೆಂದರು: “ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.  ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.  ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು. ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.  ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.  ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು. “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು.  “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?  ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.

No comments:

Post a Comment