ಮೊದಲನೇ ವಾಚನ: ಯೋನನ 3:1-10
ಯೋನನಿಗೆ ಸ್ವಾಮಿಯ ವಾಣಿ ಪುನಃ ಕೇಳಿಸಿತು: "ಎದ್ದು ಮಹಾನಗರವಾದ ನಿನೆವೆಗೆ ಹೋಗು, ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು," ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, "ಜನರೇ ಕೇಳಿ; ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು," ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಪರಿವರ್ತನೆ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಕೂಡಲೇ ತನ್ನ ಪ್ರಜೆಗಳಿಗೆಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: "ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು. ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು: ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು. ಹೀಗೆ ಮಾಡಿದ್ದೇ. ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು." ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.
ಕೀರ್ತನೆ: 130:1-2, 3-4, 7-8
ಶ್ಲೋಕ: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭೂ ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?
ಶುಭಸಂದೇಶ: ಲೂಕ 10:38-42
ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಅಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದದ ಬಳಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, "ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ," ಎಂದಳು. ಯೇಸು ಆಕೆಗೆ ಪ್ರತ್ಯುತ್ತರವಾಗಿ, "ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು," ಎಂದರು.
No comments:
Post a Comment