ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

15.10.23 - ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,”

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 25:6-10

ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು."

ಕೀರ್ತನೆ: 23:1-3, 3-4, 5, 6

ಶ್ಲೋಕ: ದೇವರ ಮಂದಿರದಲಿ ನಾವಾಸಿಸುವೆ ಚಿರಕಾಲವೆಲ್ಲ  

ಎರಡನೇ ವಾಚನ: ಫಿಲಿಪ್ಪಿಯರಿಗೆ 4:12-14, 19-20

ಸಹೋದರರೇ, ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!

ಶುಭಸಂದೇಶ:  ಮತ್ತಾಯ 22:1-14


ಯೇಸುಸ್ವಾಮಿ ಮುಖ್ಯ ಯಾಜಕರೊಂದಿಗೂ ಫರಿಸಾಯರೊಂದಿಗೂ  ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ. ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ. ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು. ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. “ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ. ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ. ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

No comments:

Post a Comment