30.10.23

ಮೊದಲನೆಯ ವಾಚನ: ರೋಮನರಿಗೆ  8:12-17

ಸಹೋದರರೇ, ನಾವು ಶರೀರಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ. ನೀವು ಶರೀರಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ. ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು. ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, " ಅಪ್ಪಾ, ತಂದೆಯೇ " ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ. ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು, ಕ್ರಿಸ್ತ ಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತ ಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಕೀರ್ತನೆ 68:1, 3, 5-6, 19-20
ಶ್ಲೋಕ: ನಮ್ಮ ದೇವರು ಜೀವೋದ್ಧಾರಕ ದೇವರು.

ಎಚ್ಚರಗೊಳ್ಳಲಿ ದೇವನೆಚ್ಚರಗೊಳ್ಳಲಿ|
ಆತನ ವಿರೋಧಿಗಳು ಪಲಾಯನ ಗೈಯಲಿ||
ಸಜ್ಜನರಾದರೋ ಸಂತೋಷಿಸಲಿ|
ದೇವರ ಮುಂದೆ ಆನಂದಿಸಲಿ|
ಅತುಳ ಹರ್ಷಾನಂದಗೊಳ್ಳಲಿ||

ದಿವ್ಯಧಾಮದಲ್ಲಿಹ ಆ ದೇವ|
ತಬ್ಬಲಿಗೆ ತಂದೆ, ವಿಧವೆಗಾಶ್ರಯ||
ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ|
ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ||

ಸ್ತುತಿಯಾಗಲಿ ನಮ್ಮನುದ್ದರಿಸುವಾ ದೇವನಿಗೆ|
ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ದೇವನಿಗೆ||
ನಮ್ಮ ದೇವರು ಜೀವೋದ್ಧಾರಕ ದೇವರು ಹೌದು|
ಸಾವಿಂದ ತಪ್ಪಿಸುವ ಶಕ್ತಿ ಸ್ವಾಮಿ ದೇವರದು||

ಶುಭಸಂದೇಶ: ಲೂಕ 13:10-17

ಆ ಕಾಲದಲ್ಲಿ ಒಂದು ಸಬ್ಬತ್ ದಿನ ಯೇಸು ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು. ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಈಕೆ ಒಬ್ಬ ಗೂನಿ, ನೆಟ್ಟಿಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, " ನೋಡಮ್ಮಾ, ನೀನು ವ್ಯಾಧಿಯಿಂದ ಬಿಡುಗಡೆಯಾದೆ, " ಎಂದು ಹೇಳಿ, ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು. ಯೇಸು ಸಬ್ಬತ್ ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, " ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಕೂಡದು, " ಎಂದನು. ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, " ಕಪಟಿಗಳೇ, ಸಬ್ಬತ್ ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ? ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು, ಈ ಕಟ್ಟಿನಿಂದ ಈಕೆಯನ್ನು ಸಬ್ಬತ್ ದಿನ ಬಿಡಿಸಬಾರದಿತ್ತೆ? " ಎಂದರು. ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...