ಮೊದಲನೆಯ ವಾಚನ: ಸಿರಾಖ 48:1-4,9-11
ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ, ಉರಿಯಿತವನ ನುಡಿ ಪಂಜಿನಂತೆ. ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ, ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ. ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ, ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು ಎಷ್ಟು ಘನವಂತನಾಗಿದ್ದೆ ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ, ಅಗ್ನಿಮಯ ಕುದುರೆಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕ ಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ, ನಿನ್ನನ್ನು ನೋಡುವವರು ಧನ್ಯರು, ಪ್ರೀತಿಯಿಂದ ನಿಧನರಾದವರು ಧನ್ಯರು ! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು.
ಕೀರ್ತನೆ: 80:1-2,14-15,17-18,
ಶ್ಲೋಕ: ಸರ್ವಶಕ್ತನಾದ ದೇವನೇ, ಉದ್ಧರಿಸೆಮ್ಮನು | ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು ||
ಕಿವಿಗೊಟ್ಟು ಆಲಿಸೋ, ಇಸ್ರಯೇಲಿನ ಮೇಷಪಾಲನೇ|
ವಿರಾಜಿಸು ಕೆರುಬೀಯರ ಮಧ್ಯೆ ಆಸೀನನಾದವನೇ||
ತೋರ್ಪಡಿಸು ನಿನ್ನ ಶೌರ್ಯವನು|
ಬಂದು ಜಯಪ್ರದನಾಗು ನಮಗೆ||
ಸರ್ವಶಕ್ತನಾದ ದೇವರೇ, ಮರಳಿ ಮುಖ ತೋರಿಸು|
ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು||
ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು|
ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು||
ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ದರಿಸಿದ ಪುರುಷನನು|
ನಿನಗೆಂದೇ ನೀ ಬೆಳೆಸಿದಾ ವರಪುತ್ರನನು||
ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು|
ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು||
ಘೋಷಣೆ ಲೂಕ:3:4,6
ಅಲ್ಲೆಲೂಯ, ಅಲ್ಲೆಲೂಯ!
ಪ್ರಭುವಿನ ಮಾರ್ಗವನ್ನು ಸಿದ್ದಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ | ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು ||
ಶುಭಸಂದೇಶ: ಮತ್ತಾಯ 17:9,10-13
ಆ ಕಾಲದಲ್ಲಿ ಬೆಟ್ಟದಿಂದ ಇಳಿದು ಬರುವಾಗ ಯೇಸು, "ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ಈ ದರ್ಶನವನ್ನು ಯಾರಿಗೂ ಹೇಳಬೇಡಿ, " ಎಂದು ಆಜ್ಞಾಪಿಸಿದರು. ಶಿಷ್ಯರು, ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ ಅದು ಹೇಗೆ? " ಎಂದು ಯೇಸುವನ್ನು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು, " ಎಂದರು. ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.
No comments:
Post a Comment