ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.02.24 -‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ,’

ಮೊದಲನೇ ವಾಚನ: ಯೆರೆಮೀಯ: 17:5-10


ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲ ವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ. ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ. ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.

ಶ್ಲೋಕ: 1:1-4, 6

ಕೀರ್ತನೆ: ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I

ದುರ್ಜನರ ಆಲೋಚನೆಯಂತೆ ನಡೆಯದೆ I
ಪಾಪಾತ್ಮರ ಪಥದಲಿ ಕಾಲೂರದೆ I
ಧರ್ಮನಿಂದಕರ ಕೂಟದಲಿ ಕೂರದೆ II

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I
ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II
ನದಿಯ ಬದಿಯಲೇ ಬೆಳೆದಿಹ ಮರದಂತೆ I
ಸಕಾಲಕೆ ಫಲವೀವ ವೃಕ್ಷದಂತೆ I
ಎಲೆಬಾಡದೆ ಪಸಿರಿರುವ ತರುವಂತೆ I
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ದುರುಳರಾದರೊ ತೂರಿ ಹೋಗುವರು I
ಬಿರುಗಾಳಿಗೆ ತರಗೆಲೆಯಾಗುವರು II
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II

ಶುಭಸ೦ದೇಶ ಲೂಕ: 16:19-31



ಆ ಕಾಲದಲ್ಲಿ ಯೇಸು ಶಿಷ್ಯರನ್ನುದ್ದೇಶಿಸಿ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಬೆಲೆ ಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನ ನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ. ‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟು ಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖ ಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟ ಪಡುತ್ತಿರುವೆ. ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿ ಬರಲೂ ಸಾಧ್ಯವಿಲ್ಲ,’ ಎಂದ. ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ,’ ಎಂದು ಬೇಡಿಕೊಂಡ. ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ. ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ,’ ಎಂದ.

01.03.24 - “ ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು"

ಮೊದಲನೇ ವಾಚನ: ಆದಿಕಾಂಡ 37:3-4, 12-13, 17-18


ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆ ಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆ ಹೋದರು. ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು. ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೇ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.

ಕೀರ್ತನೆ: 105:16-21

ಶ್ಲೋಕ: ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I

ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I
ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II
ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I
ದಾಸತ್ವಕೆ ಮಾರಲಾದ ಆ ಜೋಸೆಫನನು II

ಅವನ ಕಾಲು ನೊಂದವು ಸಂಕೋಲೆಗಳಿಂದ I
ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II
ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I
ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II

ಬಿಡಿಸಲವನನು ಅರಸ ಕಳಿಸಿದ ಆಳನು I
ಬಿಡುಗಡೆಮಾಡಿದ ಜನಾಧಿಪತಿ ಅವನನು II
ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I
ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II

ಶುಭಸಂದೇಶ: ಮತ್ತಾಯ 21:33-43, 45-46


ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರಿಗೂ ಪ್ರಜಾಪ್ರಮುಕರಿಗೂ ಈ ಸಾಮತಿಯನ್ನು ಹೇಳಿದರು: "ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ. ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು. ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದುಹಾಕಿದರು. “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರರಿಗೆ ಏನು ಮಾಡುವನು?” ಎಂದು ಯೇಸು ಕೇಳಿದರು. “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು: “ ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ? ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು. ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.

ಮನಸ್ಸಿಗೊಂದಿಷ್ಟು :
ಇಂದಿನ ಸಾಮತಿಯಲ್ಲಿನ ಕೆಲಸಗಾರರಂತೆ ಪ್ರವಾದಿಗಳ , ಶುಭಸಂದೇಶದ ಮಾತುಗಳಿಗೆ ಕಿವಿಗೊಡದೆ ದೇವರ ಕೋಪಕ್ಕೆ ಈಡಾಗದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಆದರೆ ಈ ಎಚ್ಚರಕ್ಕೆ ನಮಗೆ ನಿಜಕ್ಕೂ ಬೇಕಾಗಿರುವುದು ಸ್ವರ್ಗವೆಂಬ ದ್ರಾಕ್ಷಾತೋಟದ ಬಗ್ಗೆ ಪ್ರೀತಿ ಹಾಗು ಅದಕ್ಕಾಗಿ ತಣಿಯದ ಹಾತೊರೆಯುವಿಕೆ. 

ಸಾಮತಿಯಲ್ಲಿನ ಯಜಮಾನನ ಮಗ ಕೆಲಸಗಾರರಿಂದ ಅಪಾಯದ ಸೂಚನೆ ಇದ್ದರೂ ಬಂದು ಪ್ರಾಣ ತ್ಯಾಗ ಮಾಡಿದಂತೆ, ನಮಗಾಗಿ  ತಾವಾಗೇ ಬಂದು ಪ್ರಾಣಾರ್ಪಣೆ  ಮಾಡಿದ ಯೇಸುವಿಗಾಗಿ ನಮ್ಮ ಮನ ಕರಗಬೇಕಾಗಿದೆ, ಪರಿವರ್ತನೆಗೊಳ್ಳಬೇಕಾಗಿದೆ - ಜೀವವಾಕ್ಯ 

28.02.24 - "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ"

ಮೊದಲನೇ ವಾಚನ: ಯೆರೆಮೀಯ 18: 18-20

ಆಗ ಜನರು, "ಬನ್ನಿ, ಈ ಯೆರೆಮೀಯನ ವಿರುದ್ದ ಒಳಸ೦ಚು ಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮ೦ತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎ೦ದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ." ಎ೦ದುಕೊ೦ಡರು. ಯೆರೆಮೀಯ: "ಸರ್ವೇಶ್ವರ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೊಡಿ. ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೇ? ನನ್ನ ಪ್ರಾಣ ಹಿಡಿಯಲು ಗು೦ಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮು೦ದೆ ನಿ೦ತು ನಾನು ವಿನ೦ತಿಸಿದ್ದನ್ನು ನೆನಪಿಗೆ ತ೦ದುಕೊಳ್ಳಿ.

ಕೀರ್ತನೆ: 31:4-5, 13, 14-15

ಶ್ಲೋಕ: ಪ್ರಭೂ, ಕಾಪಾಡಲಿ ಎನ್ನನು ನಿನ್ನ ಅನಂತ ಪ್ರೇಮವು. 

ಶುಭಸ೦ದೇಶ ಮತ್ತಾಯ: 20: 17-28


ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮ೦ದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣ ದ೦ಡನೆಗೆ ಅರ್ಹನೆ೦ದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿ೦ದ ಹೊಡೆಯುವರು ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊ೦ದುವನು", ಎ೦ದರು. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬ೦ದಳು. "ತಮ್ಮಿ೦ದ ನನಗೊ೦ದು ಉಪಕಾರ ಆಗಬೇಕು," ಎ೦ದು ಸ್ವಾಮಿಯ ಪಾದಕ್ಕೆರಗಿದಳು. "ನಿನ್ನ ಕೋರಿಕೆ ಏನು?" ಎ೦ದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವ೦ತೆ ಅಪ್ಪಣೆಯಾಗಬೇಕು", ಎ೦ದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊ೦ಡದ್ದು ಏನೆ೦ದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿ೦ದ ಕುಡಿಯಲು ನಿಮ್ಮಿ೦ದ ಆದೀತೆ?" ಎ೦ದು ಪ್ರಶ್ನಿಸಿದರು. "ಹೌದು, ಆಗುತ್ತದೆ", ಎ೦ದು ಅವರು ಮರುನುಡಿದರು. ಆಗ ಯೇಸು, "ನನ್ನ ಪಾತ್ರೆಯಿ೦ದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವ೦ತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿ೦ದ ಸಿದ್ದಮಾಡಲಾಗಿದೆಯೋ ಅವರಿಗೇ ಸಿಗುವುದು", ಎ೦ದು ನುಡಿದರು. ಉಳಿದ ಹತ್ತು ಮ೦ದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊ೦ಡರು. ಯೇಸುವಾದರೋ ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿ೦ದ ದೊರೆತನ ಮಾಡುತ್ತಾರೆ: ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಚಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ. ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ದಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬ೦ದಿದ್ದಾನೆ," ಎ೦ದು ಹೇಳಿದರು.

ಮನಸ್ಸಿಗೊಂದಿಷ್ಟು  ಇಂದಿನ ಶುಭಸಂದೇಶದಲ್ಲಿ ಯೇಸು ತಾವು ಎಂಥಹ ಘೋರ ಮರಣಕ್ಕೆ ಈಡಾಗುವರೆಂಬ ಮುನ್ಸೂಚನೆ ಕೊಟ್ಟರೂ ಶಿಷ್ಯರು ಯೇಸುವಿನ  ಮುಂದಿನ  ರಾಜ್ಯಭಾರದ ಬಗ್ಗೆ ಮಾತನಾ ಡಿಕೊಳ್ಳುತ್ತಾರೆ.ಇದು ಅವರ ಅಜ್ಞಾನದಂತೆ ನಮಗೆ ಕಂಡರೂ , ಯೇಸುವಿನ ಬಗ್ಗೆ ಅವರಿಗಿದ್ದ ಅದಮ್ಯ ವಿಶ್ವಾಸ ಅದೆಷ್ಟು ದೊಡ್ಡದಲ್ಲವೇ?  ಅವರ ಬಗ್ಗೆ ಯೇಸುವಿನ ಸಹನೆ, ಪ್ರೀತಿಯೂ ಅಷ್ಟೇ ದೊಡ್ಡದು. 

ನಮ್ಮ ವಿಶ್ವಾಸವೂ ಅಷ್ಟೇ ದೊಡ್ಡದಾಗಿರಲಿ. ನಮ್ಮ ಬಗ್ಗೆ ಯೇಸುವಿನ ಪ್ರೀತಿ, ಸಹನೆಗಾಗಿ ಧನ್ಯರಾಗಿರೋಣ. 

27.02.24 - "ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು"

ಮೊದಲನೇ ವಾಚನ: ಯೆಶಾಯ 1:10, 16-20

ಸೊದೋಮಿನ ಅಧಿಪತಿಗಳ೦ತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ. ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧ ಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದ೦ತಿರುವ ನಿಮ್ಮ ದುಷ್ಕೃತ್ಯಗಳು ನೀಗಿ ಹೋಗಲಿ. ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿ೦ಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ. ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : "ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆ೦ಪಾಗಿದ್ದರೂ ಹಿಮದ೦ತೆ ಬಿಳುಪಾಗುವುವು. ರಕ್ತಗೆ೦ಪಾಗಿದ್ದರೂ ಉಣ್ಣೆಯ೦ತೆ ಬೆಳ್ಳಗಾಗುವುವು. ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ. ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ."

ಕೀರ್ತನೆ: 1116:10, 15, 16-19 

ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದಾರವನು. 

ಶುಭಸ೦ದೇಶ: ಮತ್ತಾಯ 23:1-2

ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನು ಉದ್ದೇಶಿಸಿ ಯೇಸುಸ್ವಾಮಿ ಇ೦ತೆ೦ದರು: "ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿ೦ದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗು ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದ೦ತೆ ನಡೆಯುವುದಿಲ್ಲ. ಭಾರವಾದ ಹಾಗು ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿ೦ದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆ೦ದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆ ಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲ೦ಗಿಯ ಗೊ೦ಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ. ಜೌತಣಕೂಟಗಳಲ್ಲಿ, ಶ್ರೇಷ್ಠ ಸ್ಥಾನಮಾನಗಳನ್ನೂ, ಪ್ರಾರ್ಥನಾಮ೦ದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವ೦ದನೋಪಚಾರಗಳನ್ನೂ ಅವರು ಅಪೇಕ್ಷಿತ್ತಾರೆ. ಅದು ಮಾತ್ರವಲ್ಲ, ’ಗುರುವೇ’ ಎ೦ದು ಕರೆಸಿಕೊಳ್ಳಲು ಇಚ್ಚಿಸುತ್ತಾರೆ. ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ "ಪಿತನೇ" ಎ೦ದು  ಸಂಬೋಧಿಸಬೇಡಿ. ಏಕೆ೦ದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎ೦ದೂ ಕರೆಯಿಸಿಕೊಳ್ಳಬೇಡಿ; ಏಕೆ೦ದರೆ ನಿಮಗಿರುವ ಒಡೆಯ ಒಬ್ಬನೇ, ’ಆತನೇ ಕ್ರಿಸ್ತ’. ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನ್ನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.

26.02.24 - "ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,”

 ಮೊದಲನೆಯ ವಾಚನ : ದಾನಿಯೇಲ 9: 4-10

ಹೇ ಸರ್ವೇಶ್ವರಾಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇನಿಮ್ಮನ್ನು ಪ್ರೀತಿಸಿನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.

ನಾವು ಪಾಪಾಪರಾಧಗಳನ್ನು ಮಾಡಿಕೆಟ್ಟವರಾಗಿ ನಡೆದಿದ್ದೇವೆನಿಮಗೆ ವಿರುದ್ಧ ತಿರುಗಿಬಿದ್ದುನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆಅರಸರಿಗೆಒಡೆಯರಿಗೆಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲಸರ್ವೇಶ್ವರಾನೀವು ಸತ್ಯಸ್ವರೂಪಿನಾವೋ ಲಜ್ಜೆಗೆಟ್ಟವರುಹೌದುಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆಸ್ವಾಮೀನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆನಮ್ಮ ದೇವರಾದ ಸರ್ವೇಶ್ವರನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವುನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಶುಭಸಂದೇಶ : ಲೂಕ 6: 36-38 


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲಪರರನ್ನು ದಂಡನೆಗೆ ಗುರಿ ಮಾಡಬೇಡಿದೇವರು ನಿಮ್ಮನ್ನೂ ದಂಡನೆಗೆ ಗುರಿ ಮಾಡುವುದಿಲ್ಲಪರರನ್ನು ಕ್ಷಮಿಸಿರಿದೇವರು ನಿಮ್ಮನ್ನೂ ಕ್ಷಮಿಸುವರುಪರರಿಗೆ ಕೊಡಿದೇವರು ನಿಮಗೂ ಕೊಡುವರುಅಳತೆಯಲ್ಲಿ ತುಂಬಿಕುಲುಕಿಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರುನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು,” ಎಂದರು.


ಮನಸ್ಸಿಗೊಂದಿಷ್ಟು : " ನೀವು ಕೊಟ್ಟ ಅಳತೆಯಲ್ಲೇ ನಿಮಗೂ ಕೊಡಲಾಗುತ್ತದೆ" ಎನ್ನುತ್ತಾರೆ ಯೇಸು . ಕ್ರೈಸ್ತರು  ಅಥವಾ ಕ್ರಿಸ್ತನ ಹಿಂಬಾಲಕರು  ಪಾಲಿಸಬೇಕಾದ ಮೌಲ್ಯಗಳು ಈ ಲೋಕದ ಅಳತೆಗೋಲಿನಲ್ಲಿ ಅಲ್ಲ , ಆದರೆ ದೇವರ ಅಳತೆಯಲ್ಲಿ. ನಮ್ಮ ಪ್ರೀತಿ, ಸಹನೆ, ಕ್ಷಮೆ ಎಲ್ಲವೂ ಮಾನವ ಅಳತೆಯನ್ನು ಮೀರಿ ದೈವತ್ವದ ಮಟ್ಟದಲ್ಲಿ ಇರಬೇಕೆನ್ನುವುದು ಕ್ರಿಸ್ತ ನಮ್ಮಿಂದ ಬಯಸುತ್ತಿದ್ದಾರೆ. "ಸಾಧ್ಯವೇ?" ಎನ್ನುವುದು ನಮ್ಮ ಪ್ರಶ್ನೆಯಾದರೆ, "ಎಲ್ಲವೂ  ಸಾಧ್ಯ" ಎನ್ನುವುದು ದೈವ ಪ್ರೀತಿಯನ್ನು ಅನುಭವಿಸಿರುವ ನಾವೇ ಕಂಡುಕೊಳ್ಳಬಹುದಾದ ಉತ್ತರ.    

ಆ ಅಳತೆಯ ಎತ್ತರಕ್ಕಾಗಿ ಹಾತೊರೆಯೋಣ.

25.02.24 - “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,”

ಮೊದಲನೇ ವಾಚನ: ಆದಿಕಾ೦ಡ: 22: 1-2, 9-13, 15-18


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ. ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು. ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ. “ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು. ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.

ಕೀರ್ತನೆ: 1116:10, 15, 16-19 
ಶ್ಲೋಕ: ನಡೆವನು ನಾನು ಪ್ರಭುವಿನ ಕಣ್ಣಮುಂದೆ, ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ. 

ಎರಡನೆಯ ವಾಚನ: ರೋಮನರಿಗೆ: 8:31-34


ಹೀಗಿರುವಲ್ಲಿ ನಾವು ಏನು ಹೇಳೋಣದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರುದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರುದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರುದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರುಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ

ಶುಭಸ೦ದೇಶ: ಮಾರ್ಕ: 9: 2-10

ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು. ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿ ಮಾಡಲಾಗದಷ್ಟು ಅದು ಬಿಳುಪಾಯಿತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು! ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು. ತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು. ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.

ಮನಸ್ಸಿಗೊಂದಿಷ್ಟು : ಯೇಸು ಜನರನ್ನು ಮಂತ್ರ ಮುಗ್ದರನ್ನಾಗಿ ಮಾಡಿಕೊಂಡು ತಮ್ಮನ್ನು ಹಿಂಬಾಲಿಸುವಂತೆ ಎಂದಿಗೂ ಮಾಡಿಕೊಳ್ಳಲಿಲ್ಲ. ಆದರೆ ಇಂದಿನ ಘಟನೆಯಲ್ಲಿ ಅವರ ದಿವ್ಯ ದರ್ಶನವನ್ನು ಕಂಡು  ಆಪ್ತ ಶಿಷ್ಯರು ಬೆರಗಾಗುತ್ತಾರೆ.   

“ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ" ಎಂಬುದೇ ರೂಪಾಂತರ ಘಟನೆಯ ನಿಜ ಸಂದೇಶ ಎನ್ನುತ್ತಾರೆ ಪೋಪ್ ಫ್ರಾನ್ಸಿಸ್.  ನಾವು ಸದಾ ಯೇಸುವಿನ ಮಾತಿಗೆ ಕಿವಿಯಾಗಿರಬೇಕು.  ಅಂತೆಯೇ  ಆ ರೂಪಾಂತರದ ವೈಭವದಲ್ಲೇ ಉಳಿಯದೆ ಮುಂದಿನ ಶಿಲುಬೆಯ ಮರಣಕ್ಕೆ ಯೇಸು ಸಿದ್ದರಾಗುತ್ತಾರೆ. ಅದೇ ವಾಸ್ತವ. 

ಶಿಲುಬೆ ನಮ್ಮ ವಾಸ್ತವ ಕೂಡ. ನಂತರದ ಪುನರುತ್ಥಾನವೂ.