ಮೊದಲನೇ ವಾಚನ: ಆದಿಕಾಂಡ 37:3-4, 12-13, 17-18
ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆ ಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆ ಹೋದರು. ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು. ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೇ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.
ಕೀರ್ತನೆ: 105:16-21
ಶ್ಲೋಕ: ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I
ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I
ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II
ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I
ದಾಸತ್ವಕೆ ಮಾರಲಾದ ಆ ಜೋಸೆಫನನು II
ಅವನ ಕಾಲು ನೊಂದವು ಸಂಕೋಲೆಗಳಿಂದ I
ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II
ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I
ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II
ಬಿಡಿಸಲವನನು ಅರಸ ಕಳಿಸಿದ ಆಳನು I
ಬಿಡುಗಡೆಮಾಡಿದ ಜನಾಧಿಪತಿ ಅವನನು II
ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I
ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II
ಶುಭಸಂದೇಶ: ಮತ್ತಾಯ 21:33-43, 45-46
ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರಿಗೂ ಪ್ರಜಾಪ್ರಮುಕರಿಗೂ ಈ ಸಾಮತಿಯನ್ನು ಹೇಳಿದರು: "ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ. ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು. ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದುಹಾಕಿದರು. “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರರಿಗೆ ಏನು ಮಾಡುವನು?” ಎಂದು ಯೇಸು ಕೇಳಿದರು. “ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು: “ ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ? ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು. ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.
ಮನಸ್ಸಿಗೊಂದಿಷ್ಟು :
ಇಂದಿನ ಸಾಮತಿಯಲ್ಲಿನ ಕೆಲಸಗಾರರಂತೆ ಪ್ರವಾದಿಗಳ , ಶುಭಸಂದೇಶದ ಮಾತುಗಳಿಗೆ ಕಿವಿಗೊಡದೆ ದೇವರ ಕೋಪಕ್ಕೆ ಈಡಾಗದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಆದರೆ ಈ ಎಚ್ಚರಕ್ಕೆ ನಮಗೆ ನಿಜಕ್ಕೂ ಬೇಕಾಗಿರುವುದು ಸ್ವರ್ಗವೆಂಬ ದ್ರಾಕ್ಷಾತೋಟದ ಬಗ್ಗೆ ಪ್ರೀತಿ ಹಾಗು ಅದಕ್ಕಾಗಿ ತಣಿಯದ ಹಾತೊರೆಯುವಿಕೆ.
ಸಾಮತಿಯಲ್ಲಿನ ಯಜಮಾನನ ಮಗ ಕೆಲಸಗಾರರಿಂದ ಅಪಾಯದ ಸೂಚನೆ ಇದ್ದರೂ ಬಂದು ಪ್ರಾಣ ತ್ಯಾಗ ಮಾಡಿದಂತೆ, ನಮಗಾಗಿ ತಾವಾಗೇ ಬಂದು ಪ್ರಾಣಾರ್ಪಣೆ ಮಾಡಿದ ಯೇಸುವಿಗಾಗಿ ನಮ್ಮ ಮನ ಕರಗಬೇಕಾಗಿದೆ, ಪರಿವರ್ತನೆಗೊಳ್ಳಬೇಕಾಗಿದೆ - ಜೀವವಾಕ್ಯ
Please send today gospel readings
ReplyDelete