ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

16.05.24 - "ಪಿತನೇ, ಇವರೆಲ್ಲಾ ಒಂದಾಗಿರಲಿ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು  22:30; 23:6-11



ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.

ಕೀರ್ತನೆ: 16:1-2, 5, 7-8, 9-10, 11

ಶ್ಲೋಕ: ನೀಡು ದೇವಾ ರಕ್ಷಣೆಯನು ನಾ ನಿನಗೆ ಶರಣಾಗತನು


ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭುನನ್ನ ವಿಮೆ II

ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I
ಆನಂದಗೊಂಡಿದೆ ಮನಸುರಕ್ಷಿತವಿದೆ ಕಾಯ II
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I
ಬಿಟ್ಟುಕೊಡುವುದಿಲ್ಲ ನಿನ್ನ  ಭಕ್ತನನು ಪಾತಾಳಕೆ II

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I
ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಶುಭಸಂದೇಶ: ಯೊವಾನ್ನ 17:20-26


ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ಹೀಗೆಂದು ಪ್ರಾರ್ಥಿಸಿದರು: “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ. ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು. ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ. ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು.”

No comments:

Post a Comment