ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

17.05.24 - “ನನ್ನ ಕುರಿಮರಿಗಳನ್ನು ಮೇಯಿಸು, ನನ್ನ ಕುರಿಗಳನ್ನು ಮೇಯಿಸು"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು. ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯ ಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು. ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ. ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ. ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ. ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು. ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ. ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು. 

ಕೀರ್ತನೆ: 103:1-2, 11-12, 19-20

ಶ್ಲೋಕ: ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ಮರೆಯದಿರು ಆತನ ಉಪಕಾರಗಳೊಂದನು II

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II
ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I
ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II
ಭಜಿಸಿರಿ ಪ್ರಭುವನು ದೇವದೂತರುಗಳೇ 
ಆತನ ಆಣತಿ ಪಾಲಿಪ ಪರಾಕ್ರಮಿಗಳೇ I

ಶುಭಸಂದೇಶ: ಯೊವಾನ್ನ 21:15-19


ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು. ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

No comments:

Post a Comment