ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.04.24 - "ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 9:1-20




ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು. ಈ ಹೊಸಮಾರ್ಗವನ್ನು ಅವಲಂಭಿಸುವವರು ಹೆಂಗಸರೇ ಆಗಿರಲಿ ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನ ಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾ ಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು. ಅವನು ಅಲ್ಲಿಂದ ಪ್ರಯಾಣ ಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು. ಅವನು ನೆಲಕ್ಕುರುಳಿದನು. "ಸೌಲನೇ, ಸೌಲನೇ, ನನ್ನನ್ನೇಕೆ  ಹಿಂಸಿಸುತ್ತಿರುವೆ?" ಎಂಬ ವಾಣಿ ಅವನಿಗೆ ಕೇಳಿಸಿತು. ಆಗ ಅವನು, "ಪ್ರಭು, ನೀವಾರು?" ಎಂದನು. "ನೀನು ಹಿಂಸೆಪಡಿಸುತ್ತಿರುವ  ಯೇಸುವೇ ನಾನು. ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು." ಎಂದು ಆ ವಾಣಿ ಹೇಳಿತು. ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತ್ತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು. ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನು ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ. ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು,  "ಅನನೀಯಾ"  ಎಂದು ಕರೆಯಲು ಅವನು, "ಸ್ವಾಮೀ, ಅಪ್ಪಣೆಯಾಗಲಿ," ಎಂದನು. ಪ್ರಭು ಅವನಿಗೆ, "ನೀನೆದ್ದು "ನೇರಬೀದಿ" ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ. ಅಲ್ಲದೆ ಅನನೀಯ ಎಂಬುವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ," ಎಂದರು. ಅನನೀಯ ಪ್ರತ್ಯುತ್ತರವಾಗಿ, "ಪ್ರಭೂ ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡು ಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ. ಅಷ್ಟು ಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ," ಎಂದನು. ಪ್ರಭು ಅವನಿಗೆ, "ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ತ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು. ಅವನು ನನ್ನ ನಾಮದ ನಿಮಿತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ," ಎಂದರು. ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪ ಮಾಡಿ, "ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ," ಎಂದನು. ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣುಗಳು ಕಾಣತೊಡಗಿದವು. ಎದ್ದು ದೀಕ್ಷಾಸ್ನಾನವನ್ನು  ಪಡೆದನು. ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು. ಆನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ದೇವರ ಪುತ್ರ ಎಂದು ಭೊಧಿಸಲು ಪ್ರಾರಂಭಿಸಿದನು.

ಕೀರ್ತನೆ: 117:1, 2
ಶ್ಲೋಕ: ಸ್ತುತಿಮಾಡಿ ಪ್ರಭುವನ್ನು ಸಮಸ್ತ ರಾಷ್ಟ್ರಗಳೇ

ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I
ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II

ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I
ಆತನ ಸತ್ಯಪರತೆ ಇರುವುದು ಅನಂತ ಕಾಲ II

ಶುಭಸಂದೇಶ :ಯೊವಾನ್ನ 6:52-59

ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. "ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?" ಎಂದು ಕೇಳತೊಡಗಿದರು. ಅದಕ್ಕೆ ಯೇಸು, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ. ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ. ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ. ನನ್ನ ಮಾಂಸವನ್ನು ತಿಂದು,  ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲಸಿರುತ್ತಾನೆ ನಾನು ಅವನಲ್ಲಿ ನೆಲಸಿರುತ್ತೇನೆ. ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು.  ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವರು ನನ್ನಿಂದಲೇ ಜೀವಿಸುತ್ತಾನೆ. ಸ್ವರ್ಗದಿಂದ ಇಳಿದು ಬಂದ ರೊಟ್ಟಿ ಇದೇ ನಿಮ್ಮ ಪೂರ್ವಜರು  "ಮನ್ನ"ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು," ಎಂದು ಹೇಳಿದರು. ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಭೋದನೆ ಮಾಡುತ್ತಿದ್ದಾಗ ಆಡಿದ ಮಾತುಗಳಿವು.

ಮನಸಿಗೊಂದಿಷ್ಟು : ಶುಭಸಂದೇಶದ ಅತ್ಯಂತ ಹೃದಯಸ್ಪರ್ಶಿ ಘಟನೆ, ರೂಪಾಂತರವನ್ನು ಇಂದಿನ ವಾಚನದಲ್ಲಿ ಕಾಣುತ್ತೇವೆ. ಕ್ರೈಸ್ತ ತತ್ವಗಳನ್ನು ನಿರ್ನಾಮ ಮಾಡಲು ದಮಸ್ಕಸ್ ಗೆ ಹೊರಟ ಸೌಲನನ್ನು ಯೇಸು ತಮ್ಮ ಪ್ರೀತಿಯಲ್ಲಿ ಬಂಧಿಸುತ್ತಾರೆ. ಅವನ ನೋಡುತ್ತಿದ್ದ ಲೋಕವನ್ನು ಕುರುಡಾಗಿಸಿ ತಮ್ಮ ಬೆಳಕನ್ನು ನೀಡುತ್ತಾರೆ. ನಮ್ಮದೇ ಹಾದಿಯಲ್ಲಿ ನಡೆಯುತ್ತಿರುವ ನಮಗೂ ಆ ರೂಪಾಂತರದ ಭಾಗ್ಯ ದೊರೆಯುವಂತಾಗಲಿ

ಪ್ರಶ್ನೆ : ಕ್ಷಣಾರ್ಧದಲ್ಲಿ ಎಲ್ಲವನ್ನೂ ತ್ಯಜಿಸಿದ ಸೌಲ ನಮಗೆ ಸ್ಪೂರ್ತಿಯೇ?

No comments:

Post a Comment