ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.06.24 - ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ

ಮೊದಲನೇ ವಾಚನ: 2 ತಿಮೊಥೇಯನಿಗೆ 1:1-3, 6-12

ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು. ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ. ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ. ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.

ಕೀರ್ತನೆ: 12:1-3

ಶ್ಲೋಕ: ನನ್ನ ಕಣ್ಣುಗಳನು ಪ್ರಭೂ, ನಿನ್ನ ಕಡೆಗೆ ಎತ್ತಿರುವೆ

ಶುಭಸಂದೇಶ ಮಾರ್ಕ 12:18-27


ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು, “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು. ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು. ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ. ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.

No comments:

Post a Comment