ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

14.07.24 - “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,”

ಮೊದಲನೇ ವಾಚನ: ಆಮೋಸ 7:12-15

 ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ. ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು. ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು. ಮಂದೆಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.

ಕೀರ್ತನೆ: 85:8-9, 10-11, 12-13
ಶ್ಲೋಕ: ತೋರಿಸೆಮಗೆ ಪ್ರಭು ಕರುಣೆಯನು.

ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I
ತನ್ನ ಜನರಿಗಾತ ನುಡಿವುದು ಶಾಂತಿಯನು I

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I
ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II
ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I

ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II
ಸತ್ಯತೆಯು ಹುಟ್ಟುವುದು ಭೂಮಿಯಿಂದ I
ನೀತಿಯು ದೃಷ್ಟಿಸುವುದು ಗಗನದಿಂದ II

ಪ್ರಭು ಕೊಟ್ಟೇ ತೀರುವನು ಒಳಿತನು I
ನಮ್ಮ ನಾಡು ನೀಡುವುದು ಬೆಳೆಯನು II
ನಡೆವುದು ಪ್ರಭುವಿನ ಮುಂದೆ ನೀತಿ I
ಮಾಡುವುದು ಆತನ ಹೆಜ್ಜೆಗೆ ಹಾದಿ II


ಎರಡನೆಯ ವಾಚನ: ಎಫೆಸಿಯರಿಗೆ 1:3-14


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತ ಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ: ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ದಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ಥ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.

ಶುಭಸಂದೇಶ: ಮಾರ್ಕ 6:7-13


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆ ಮಾಡಿದರು. ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು. ಶಿಷ್ಯರು ಹೊರಟು ಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು. ದೆವ್ವ ಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.

No comments:

Post a Comment