ಮೊದಲನೇ ವಾಚನ: 1 ಕೊರಿಂಥಿಯರಿಗೆ 1:26-31
ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ, ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು. ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂದ, ಪಾವನತೆ ಹಾಗು ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: "ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ."
ಕೀರ್ತನೆ: 33:12-13, 18-19, 20-21
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
ಶುಭಸಂದೇಶ: ಮತ್ತಾಯ 25:14-30
"ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ, ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನ ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು -- ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ಸಂಪಾದಿಸಿದ್ದೇನೆ," ಎಂದ. ಅದಕ್ಕೆ ಅ ಧಣಿ, 'ಭಲಾ, ನೆಚ್ಚಿನ ಸೇವಕ, ನೀನು ಪ್ರಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ ಎರಡು ತಲೆಂತು ಪಡೆದವನು ಮುಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, 'ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದು: "ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ, ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದುದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ, ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸೇರಿದೆ,' ಎಂದ. "ಆಗ ಧಣಿ ಅವನಿಗೆ, 'ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ', ಎಂದ. ಆನಂತರ ಪರಿಚಾರಕರಿಗೆ, 'ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.' ಎಂದು ಹೇಳಿದ.
No comments:
Post a Comment