ಮೊದಲನೇ ವಾಚನ: ಉಪದೇಶಕ 1:2-11
ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ! ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು? ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ. ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ. ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ. ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ. ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ. ಇದ್ದದ್ದೇ ಇರುತ್ತದೆ, ನಡೆದದ್ದೇ ನಡೆಯುತ್ತದೆ. ಲೋಕದಲ್ಲಿ ಹೊಸದೇನೂ ಇಲ್ಲ. ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು. ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.
ಕೀರ್ತನೆ: 90:3-4, 5-6, 12-13, 14, 17
ಶ್ಲೋಕ: ಪ್ರಭೂ, ತಲತಲಾಂತರಕೂ ಶ್ರೀನಿವಾಸ ನೀನೆಮಗೆ
ಶುಭಸಂದೇಶ: ಲೂಕ 9:7-9
ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ ‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.
No comments:
Post a Comment