ಮೊದಲನೇ ವಾಚನ: ಜ್ಞಾನಗ್ರಂಥ 3:1-9
ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದೂ. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು. ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡು ಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ, ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ. ಶೋಧಿಸಿದ ತರುವಾಯ ದೇವರಿಗೆ ಅವರು ಕಂಡು ಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ, ಅಂಗೀಕೃತರಾದರು ಪೂರ್ಣ ದಹನ ಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲ್ಲಿ ಹೊಳೆಯುವರು ಒಣ ಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯ ತೀರಿಸುರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕ್ಕೆ. ಸತ್ಯವನ್ನು ಅರಿವರು ದೇವರಲ್ಲಿ ಭರವಸಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು .
ಕೀರ್ತನೆ: 23:1-3, 3-4, 5, 6
ಶ್ಲೋಕ:, ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ?
ಎರಡನೇ ವಾಚನ: ರೋಮನರಿಗೆ 6:3-9
ಸಹೋದರರೇ, ಕ್ರಿಸ್ತ ಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೇ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ದೇವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತ ಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವೂ ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನವಾದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪ ಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.
ಶುಭಸಂದೇಶ: ಮತ್ತಾಯ 25:31-46
"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.
No comments:
Post a Comment