ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

13.10.24 - "ನನ್ನನ್ನು ಹಿಂಬಾಲಿಸು."

ಮೊದಲನೆಯ ವಾಚನ: ಸುಜ್ಞಾನ  7:7-11

ಇಂತಿರಲು ನಾನು ಮಾಡಿದ ಪ್ರಾರ್ಥನೆ, ಕೊಡಲಾಯಿತು ನನಗೆ ತಿಳುವಳಿಕೆ ನಾನು ಮೊರೆಯಿಟ್ಟ ದೇವರಿಗೆ, ಸುಜ್ಞಾನವೆಂಬ ಚೈತನ್ಯೆ ಬಂದಳು ನನ್ನ ಬಳಿಗೆ. ರಾಜದಂಡ, ಸಿಂಹಾಸನಕ್ಕೂ ಮಿಗಿಲಾಗಿ ಅವಳನ್ನು ಇಷ್ಟಪಟ್ಟೆ ಅವಳ ಮುಂದೆ ಸಿರಿಸಂಪತ್ತು ಶೂನ್ಯವೆಂದು ಅರಿತುಕೊಂಡೆ. ಅವಳ ಮುಂದೆ, ಭೂಮಿಯ ಚಿನ್ನವೆಲ್ಲ ಉಸುಬಿನ ಕಣದಂತೆ, ಅಮೂಲ್ಯ ರತ್ನವು ಸಾಣಿಯಲ್ಲ, ಬೆಳ್ಳಿಯೂ ಮಣ್ಣಿನ ಮುದ್ದೆಯಂತೆ. ಆರೋಗ್ಯ ಸೌಂದರ್ಯಗಳಿಗಿಂತ ಹೆಚ್ಚಾಗಿ ಅವಳನ್ನು ಪ್ರೀತಿಸಿದೆ ಬೆಳಕಿಗಿಂತ ಅವಳ ಕುಂದದ ಕಾಂತಿಯನ್ನೇ ಆಯ್ದುಕೊಂಡೆ. ಅವಳೊಂದಿಗೆ ಉತ್ತಮ ವಸ್ತುಗಳೆಲ್ಲವೂ ಬಂದವು ಅವಳ ಕೈಯಲ್ಲಿತ್ತು ಅಗಣಿತವಾದ ಐಶ್ವರ್ಯವು.

ಕೀರ್ತನೆ 90:12-17
ಶ್ಲೋಕ: ಉದಯದಲಿ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು|
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು||
ಪ್ರಭೂ ತಿರುಗಿ ಬಾ, ಕೋಪವೆಷ್ಟರ ತನಕ?|
ನಿನ್ನೀ ಸೇವಕರ ಮೇಲಿರಲಿ ಮರುಕ||

ಉದಯದಲೇ ತೋಯಿಸೆಮ್ಮನು ನಿನ್ನ ಕೃಪೆಯಿಂದ|
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ||
ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ|
ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ||

ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ|
ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ||
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ|
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ|
ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ||

ಎರಡನೆಯ ವಾಚನ: ಹಿಬ್ರಿಯರಿಗೆ 4:12-13

ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು, ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು, ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು. ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.

ಶುಭಸಂದೇಶ: ಮಾರ್ಕ 10:17-30


ಆ ಕಾಲದಲ್ಲಿ ಯೇಸು ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲೊಬ್ಬನು ಅವರ ಬಳಿಗೆ ಓಡಿ ಬಂದು ಮೊಣಕಾಲೂರಿ, " ಒಳ್ಳೆಯ ಗುರುವೇ, ಅಮರ ಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು? " ಎಂದು ಕೇಳಿದನು. " ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ. ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು " ಎಂದು ಯೇಸು ಉತ್ತರವಿತ್ತರು. ಅದಕ್ಕೆ ಅವನು, " ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ, " ಎಂದು ಹೇಳಿದನು. ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, " ನೀನು ಮಾಡಬೇಕಾದ ಕಾರ್ಯವೂಂದು ಬಾಕಿ ಇದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು, ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು, " ಎಂದರು. ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟು ಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು. ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, " ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ! " ಎಂದರು. ಅವರ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, " ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ! ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ, " ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯವಾಯಿತು. " ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ? " ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡಿ, " ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ, " ಎಂದರು. ಆಗ ಪೇತ್ರನು ಮುಂದೆ ಬಂದು, " ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ, " ಎಂದನು. ಆಗ ಯೇಸು, " ನಾನು ನಿಶ್ಚಯವಾಗಿ ಹೇಳುತ್ತೇನೆ : ಯಾರಾದರೂ ನಮ್ಮ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ, ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು, ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು, " ಎಂದರು.

No comments:

Post a Comment