ಮೊದಲನೇ ವಾಚನ: ಎಫೆಸಿಯರಿಗೆ 5:21-33

ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ. ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು. ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು. ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ. ನಾವು ಆ ಸಭೆಯ ಅಂಗಗಳು. ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.” ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ. ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.
ಕೀರ್ತನೆ: 128:1-2, 3, 4-5
ಶ್ಲೋಕ: ಹೊಂದುವನು ಆಶೀರ್ವಾದವನು, ಪ್ರಭುವಿನಲಿ ಭಯಭಕ್ತಿಯುಳ್ಳವನು.
ಶುಭಸಂದೇಶ: ಲೂಕ 13:18-21
ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು. ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
No comments:
Post a Comment