ಮೊದಲನೇ ವಾಚನ: ಪ್ರಕಟಣಾ ಗ್ರಂಥ 20:1-4, 11--21:2
ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು. ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು. ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು. ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು. ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.
ಕೀರ್ತನೆ: 84:3, 4, 5-6, 8
ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ
ಶುಭಸಂದೇಶ: ಲೂಕ 21:29-33
ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.
No comments:
Post a Comment