08.12.24

ಮೊದಲನೆಯ ವಾಚನ: ಪ್ರವಾದಿ ಬಾರೂಕನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 5:1-9

ಜೆರುಸಲೇಮೇ, ಕಳಚಿಬಿಡು ನಿನ್ನ ಶೋಕಾರ್ಥ ವಸ್ತ್ರಗಳನ್ನು ಧರಿಸಿಕೋ ನಿತ್ಯಕ್ಕೆಂದು ದೇವರಿಂದ ಬರುವ ಪ್ರಭಾವದ ಸೊಬಗನ್ನು. ತೊಟ್ಟುಕೋ ದೇವರಿಂದ ಬರುವ ನೀತಿಯೆಂಬ ನಿಲುವಂಗಿಯನ್ನು ಇಟ್ಟುಕೋ ತಲೆಯ ಮೇಲೆ ಮಹಿಮೆಯೆಂಬ ಮುಕುಟವನ್ನು. ದೇವರೇ ನಿನ್ನ ತೇಜಸ್ಸನ್ನು ಹರಡುವರು ಆಕಾಶದಡಿಯಿರುವ ಎಲ್ಲ ದಿಕ್ಕುಗಳಿಗು. ‘ನೀತಿಯಿಂದ ಶಾಂತಿ’, ‘ಭಕ್ತಿಯಿಂದ ಕೀರ್ತಿ’ ಎಂದು ದೇವರೇ ನಿನ್ನನ್ನು ಹೆಸರಿಸುವರು ಎಂದೆಂದಿಗು. ಜೆರುಸಲೇಮೇ, ಎದ್ದೇಳು, ಉನ್ನತ ಸ್ಥಾನದಲ್ಲಿ ನಿಲ್ಲು ಪೂರ್ವಾಭಿಮುಖವಾಗಿ ತಿರುಗಿಸು ನಿನ್ನ ಕಣ್ಣುಗಳನ್ನು. ದೇವರು ತಮ್ಮನ್ನು ನೆನೆಸಿಕೊಂಡರೆಂದು ಹಿಗ್ಗುತಿಹರು ನಿನ್ನ ಮಕ್ಕಳು ಪರಮ ಪಾವನನ ನುಡಿಯಂತೆ ಪೂರ್ವ ಪಶ್ಚಿಮದಿಂದ ಕೂಡಿಬರುತಿಹರು ನೋಡು. ಶತ್ರುಗಳಿಂದ ಒಯ್ಯಲ್ಪಟ್ಟು ಕಾಲ್ನಡೆಯಲ್ಲಿ ಅವರು ನಿನ್ನ ಬಿಟ್ಟುಹೋದರು. ಈಗ ವೈಭವದಿಂದ ಹೊರಟು, ಸಿಂಹಾಸನಾರೂಢರಾದವರಂತೆ ಬರುತ್ತಿಹರು ದೇವರೇ ಅವರನ್ನು ನಿನ್ನ ಬಳಿಗೆ ಬರಮಾಡುತ್ತಿಹರು. ಇಸ್ರಯೇಲ್ ದೈವಪ್ರಭೆಯಲಿ ಸುರಕ್ಷಿತವಾಗಿ ಸಾಗಬೇಕೆಂದು ಅದಕ್ಕಾಗಿ ಉನ್ನತ ಬೆಟ್ಟಗಳು, ನೆಲೆಯಾದ ಗುಡ್ಡಗಳು ತಗ್ಗಬೇಕೆಂದು ಹಳ್ಳಕೊಳ್ಳಗಳು ತುಂಬಿ ಭರ್ತಿಯಾಗಿ ನೆಲಸಮವಾಗಬೇಕೆಂದು ದೇವರೇ ನೇಮಕ ಮಾಡಿರುವರು. ಆ ದೇವರ ಅಪ್ಪಣೆಯ ಪ್ರಕಾರ ಇಸ್ರಯೇಲಿಗೆ ನೆರಳು ನೀಡುವುವು ಕಾಡುಗಳು, ಸುಗಂಧವಾಸನೆಯನ್ನು ಬೀರುವುವು ಗಿಡಮರಗಳು. ದೇವರು ಇಸ್ರಯೇಲನ್ನು ನಡೆಸುವರು ತಮ್ಮ ಮಹಿಮೆ ಪ್ರಕಾಶದಲ್ಲೆ ಹರುಷದೊಡನೆ ತಮ್ಮಿಂದ ಬರುವ ಕರುಣೆ ಹಾಗು ನ್ಯಾಯನೀತಿಗಳೊಡನೆ.

ಕೀರ್ತನೆ 126:1-6
ಶ್ಲೋಕ: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ, ಎಂತಲೇ ನಾವಾನಂದಭರಿತರಾಗಗುವುದು ಉಚಿತ.

ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ|
ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ|
ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ||

ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ|
ಇಂತಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ||
ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ|
ಎಂತಲೆ ನಾವಾನಂದಭರಿತರಾಗುವುದು ಉಚಿತ||

ಬತ್ತಿದ ನದಿಯಲ್ಲಿ ನೀರು ಮರಳಿ ಉಕ್ಕಿ ಹರಿಯುವಂತೆ|
ನೀಡು ಸಿರಿಸೌಭಾಗ್ಯ, ಹೇ ಪ್ರಭೂ ಮತ್ತೆ||
ಅಳುತಳುತಾ ಬಿತ್ತುವವರು, ನಲಿನಲಿಯುತಾ ಕೊಯ್ಯುವರು|
ದುಃಖಿಸುತ್ತಾ ಬೀಜ ಬಿತ್ತಲು ಹೋದವನು, ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು||

ಎರಡನೆಯ ವಾಚನ: ಪೌಲನು ಫಿಲಿಪ್ಪಿಯರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 1: 3-6,8-11

" ಸಹೋದರರೇ ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲಾ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ. ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ. ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು. ಎಂಬುದೇ ನನ್ನ ದೃಢನಂಬಿಕೆ. ಕ್ರಿಸ್ತ ಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ. ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ. ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು ಪ್ರಭುಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ. ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿ ಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.

ಘೋಷಣೆ: 
ಅಲ್ಲೆಲೂಯ, ಅಲ್ಲೆಲೂಯ!

"ಪ್ರಭುವಿನ ಮಾರ್ಗವನ್ನು ಸಿದ್ಧಪಡಿಸಿರಿ ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ ! ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು !!

ಅಲ್ಲೆಲೂಯ!

ಶುಭಸಂದೇಶ: ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 3:1-6

"ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೋಂತ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು. ಅನ್ನನು ಮತ್ತು ಕಾಯಿಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು. ಆತನು ಜೋರ್ಡನ್ ನದಿಯ ಪರಿಸರ ಪ್ರಾಂತ್ಯದಲ್ಲೆಲ್ಲಾ ಸಂಚರಿಸುತ್ತಾ, "ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು, "ಎಂದು ಸಾರಿ ಹೇಳುತ್ತಿದ್ದನು. ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ: "'ಪ್ರಭುವಿಗೆ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ' ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ. ಹಳ್ಳಕೊಳ್ಳಗಳೆಲ್ಲ ಭರ್ತಿ ಯಾಗಬೇಕು; ಬೆಟ್ಟಗುಡ್ಡಗಳು ಮಟ್ಟವಾಗಬೇಕು; ಅಂಕು ಡೊಂಕಾದವು ನೆಟ್ಟಗಾಗಬೇಕು; ತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು. ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು."

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...