ಮೊದಲನೆಯ ವಾಚನ: ಆದಿಕಾಂಡ 49: 2,8-10
ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು, ಆಲಿಸಿ ನಿಮ್ಮ ತಂದೆ ಇಸ್ರಯೇಲಿನ ಮಾತನ್ನು ; ಯೆಹೂದನೇ, ವಂದಿಸುವರು ನಿನ್ನನು ಸಹೋದರರು, ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು; ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ, ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ; ಕಾಲು ಮಡಿಚಿ ಹೊಂಚುಕೂತ ಕೇಸರಿಯಂತೆ. ಈ ಸಿಂಹಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ರಾಜ್ಯಾಧಿಕಾರ ಪಡೆದವನು ಬರುವ ತನಕ; ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ; ತಪ್ಪದು ರಾಜದಂಡ ಯೆಹೂದನ ಕೈಯಿಂದ, ಕದಲದು ಮುದ್ರೆಕೋಲು ಅವನ ವಂಶದಿಂದ.
ಕೀರ್ತನೆ: 72: 1-4,7-8,17
ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ.
ತಿಳಿಸು ನಿನ್ನ ನ್ಯಾಯವನು ದೇವಾ,ರಾಜನಿಗೆ|
ಕಲಿಸು ನಿನ್ನ ನೀತಿಯನು ರಾಜಕುವರನಿಗೆ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ|
ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ||
ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ|
ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ||
ದೀನದಲಿತರನಾತ ಉದ್ಧರಿಸಲಿ|
ಬಡಬಗ್ಗರಿಗೆ ನ್ಯಾಯ ದೊರಕಿಸಲಿ||
ಬೆಳೆಯಲಿ ಆತನ ಪಾಲನೆಯಲ್ಲಿ ನ್ಯಾಯನೀತಿ|
ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ||
ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ|
ಮಹಾನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ||
ಶಾಶ್ವತವಾಗಲಿ ಶ್ರೀ ನಾಮ ಆತನಿಗೆ|
ಬೆಳಗಲಿ ಆತನ ಕೀರ್ತಿ ಸೂರ್ಯವಿರುವವರೆಗೆ||
ಆತನಾಶೀರ್ವಾದ ಕೋರಲಿ ಸರ್ವರು ತಮಗೆ|
ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ||
ಘೋಷಣೆ:
ಅಲ್ಲೆಲೂಯ, ಅಲ್ಲೆಲೂಯ!
ಸಕಲವನ್ನು ಶಕ್ತಿಯಿಂದಲೂ ದಯೆಯಿಂದಲೂ ಆಳುವ ಮಹೋನ್ನತರ ಜ್ಞಾನವೇ | ಬಂದು ನಮಗೆ ಸತ್ಯದ ಮಾರ್ಗವನ್ನು ತಿಳಿಸಿರಿ ||
ಅಲ್ಲೆಲೂಯ!
ಶುಭಸಂದೇಶ: ಮತ್ತಾಯ 1:1-17
ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸು ಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷಿಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯ ದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸು ಹುಟ್ಟಿದ್ದು; ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯ ದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
No comments:
Post a Comment