Friday, August 23, 2024

31.08.24

ಮೊದಲನೇ ವಾಚನ: 1 ಕೊರಿಂಥಿಯರಿಗೆ 1:26-31

ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ, ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು. ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂದ,  ಪಾವನತೆ ಹಾಗು ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: "ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ."

ಕೀರ್ತನೆ: 33:12-13, 18-19, 20-21
 ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ

ಶುಭಸಂದೇಶ: ಮತ್ತಾಯ 25:14-30

 "ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ, ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನ ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು -- ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ಸಂಪಾದಿಸಿದ್ದೇನೆ," ಎಂದ. ಅದಕ್ಕೆ ಅ ಧಣಿ, 'ಭಲಾ, ನೆಚ್ಚಿನ ಸೇವಕ, ನೀನು ಪ್ರಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ ಎರಡು ತಲೆಂತು ಪಡೆದವನು ಮುಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು  ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, 'ಭಲಾ,  ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದು: "ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ, ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದುದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ, ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸೇರಿದೆ,' ಎಂದ.  "ಆಗ ಧಣಿ ಅವನಿಗೆ, 'ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ? ಹಾಗಾದರೆ  ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ', ಎಂದ. ಆನಂತರ ಪರಿಚಾರಕರಿಗೆ, 'ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.' ಎಂದು ಹೇಳಿದ.

30.08.24 - "ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25

ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.  ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.  ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.  ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಕೀರ್ತನೆ: 33:1-2, 4-5, 10, 11

ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.  ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.  ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.  ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.  ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

29.08.24 - "ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು."

ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ


ಮೊದಲನೇ ವಾಚನ: ಯೆರೆಮಿಯ: 1: 17-19

ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಕೀರ್ತನೆ: 96: 71: 1-2, 3-4,5-6, 15, 17
ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು.

ಶುಭಸಂದೇಶ: ಮಾರ್ಕ: 6: 17-29

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಾ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮ ಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತಾ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗು ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಉಟ್ಟು ಹಬ್ಬದ ದಿನಾಚರಣೆಯಂದು, ಆಸ್ತಾನಿಕರಿಗೂ ಸೇನಾದಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನು ಅವರ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ, ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಹಾಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರು ಕೇಳು ಕೊಡುತ್ತೇನೆ," ಎಂದನು. "ನೀನು ಕೇಳಿಕೊಂಡರು ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ’ ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತಾ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ನೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದು ಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

28.08.24 - "ನೀವು ಸುಣ್ಣ ಬಳಿದ ಸಮಾಧಿಗಳು, ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು."

ಮೊದಲನೇ ವಾಚನ: 2 ಥೆಸಲೋನಿಯರಿಗೆ 3:6-10, 16-18

ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!

ಕೀರ್ತನೆ: 128:1-2, 4-5

ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು

ಶುಭಸಂದೇಶ: ಮತ್ತಾಯ 23:27-32

ಯೇಸು ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು: “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.  ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.  ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.  ಹೀಗೆ ಪ್ರವಾದಿಗಳನ್ನು ಕೊಲೆ ಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."



27.08.24 - "ನೀವು ನಿಮ್ಮ ತಟ್ಟೆ ಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ."

ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16

ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಪ್ರಭುವಿನ ದಿನವು ಬಂದೇ ಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪ ಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.  ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.  ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರಗೆ ನ್ಯಾಯತೀರಿಸಲು ಬಂದೇಬರುವನು ಖರೆಯಾಗಿ

ಶುಭಸಂದೇಶ: ಮತ್ತಾಯ 23:23-26


ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನಸಮೂಹವನ್ನೂ ಉದ್ದೇಶಿಸಿ, "ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.  ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.  ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.  ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರ ಭಾಗವೂ ಶುಚಿಯಾಗುವುದು." ಎಂದರು.

26.08.24

ಮೊದಲನೇ ವಾಚನ:  2 ಥೆಸಲೋನಿಯರಿಗೆ 1:1:5, 11-12

ನಮ್ಮ ಪುತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯರು ಬರೆಯುವ ಪತ್ರ. ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ದರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ. ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟ ಸಂಕಟಗಳನ್ನೂ ಚಿತ್ರ ಹಿಂಸೆಗಳನ್ನು ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ. ನೀವು ಅನುಭವಿಸುತ್ತಿರುವುದೆಲ್ಲಾ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗು ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು. ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾ ಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸ ಪ್ರೇರಿತ ಕಾರ್ಯಗಳು ಪೂರ್ಣವಾಗಲಿ. ಹೀಗೆ ನಿಮ್ಮ  ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.

ಕೀರ್ತನೆ: 96: 1-2ಎ, 2ಬಿ-3, 4-5
ಶ್ಲೋಕ: ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ.

ಶುಭಸಂದೇಶ: ಮತ್ತಾಯ: 23: 13-22 

"ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವು ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ. ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿ ಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತೀ ಕಠಿಣವಾದ ದಂಡನೆಗೆ ಗುರಿಯಾಗುವಿರಿ). ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗೆ ಜಲ ನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ. "ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನು ಬದ್ದನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿಗೆಟ್ಟ ಮತಿ ಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ, ಒಬ್ಬನು ಬಳಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನು ಬದ್ದನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ. ದೃಷ್ಠಿ ಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ? ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ. ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ. ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನಸ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ. 

25.08.24 - "ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು"

ಪ್ರವಾದಿ ಯೆಹೋಶುವನ ಗ್ರಂಥದಿಂದ ವಾಚನ 24: 1-2, 15-18

ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು,      ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು. ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರನಿಗೆ ಸೇವೆ ಸಲ್ಲಿಸಿರಿ; ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆ ಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ,” ಎಂದನು. ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ. ನಾವು ದಾಸತ್ವದಲ್ಲಿದ್ದ ಈಜಿಪ್ತಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತ ಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿ ಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಈ ನಾಡಿನ ನಿವಾಸಿಗಳಾಗಿದ್ದ ಅಮೋರಿ ಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.

ಎರಡನೆಯ ವಾಚನ
ಸಂತ ಪೌಲ ಎಫೆಸಿಯರಿಗೆ ಬರೆದ ಪತ್ರದಿಂದ ವಾಚನ     5: 21-32

ಕ್ರಿಸ್ತ ಯೇಸುವಿನಲ್ಲಿ ಭಯಭಕ್ತಿ ಯುಳ್ಳವರಾಗಿದ್ದು ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ. ಮಹಿಳೆಯರೇ,  ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಕ್ರಿಸ್ತ ಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತ ಯೇಸುವೇ ಧರ್ಮಸಭೆಯ ಉದ್ಧಾರಕ. ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯು ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತ ಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು. ಧರ್ಮಸಭೆ ಕಳಂಕ ಕಲ್ಮಷವಾಗಲಿ, ಸುಕ್ಕು ಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿ ಕೊಳ್ಳುವಂತೆ ಹೀಗೆ ಮಾಡಿದರು. ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ. ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತ ಯೇಸು ಹೀಗೆಯೇ ಕಾಪಾಡುತ್ತಾರೆ. ನಾವು ಆ ಸಭೆಯ ಅಂಗಗಳು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದುಗೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗುವರು,” ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ, ಎಂಬುದೇ ನನ್ನ ಅಭಿಪ್ರಾಯ.
- ಪ್ರಭುವಿನ ವಾಕ್ಯ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ! ನಮ್ಮ ಪ್ರಭು ಯೇಸುಕ್ರಿಸ್ತರ ದೇವರು ನಿಮ್ಮ ಮನೋ ನೇತ್ರಗಳನ್ನು ತೆರೆಯಲಿ; ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದೆಂದು ನೀವು ಅರಿತುಕೊಳ್ಳಬೇಕು. ಅಲ್ಲೆಲೂಯ!

ಶುಭಸಂದೇಶ:
ಸಂತ ಯೊವಾನ್ನರು ಬರೆದ ಶುಭಸಂದೇಶದಿಂದ ವಾಚನ       6: 60-69

ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರು ತಾನೆ ಕೇಳಿಯಾರು?” ಎಂದು ಮಾತನಾಡಿ ಕೊಂಡರು. ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟು ಮಾತ್ರಕ್ಕೆ ನೀವು ಕಂಗೆಡಬೇಕೇ? ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನೆನ್ನುವಿರಿ? ಸಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ. ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) “ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ. ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದರು. ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯ ಜೀವವನ್ನೀಯುವ ನುಡಿಯಿರುವುದು ತಮ್ಮಲ್ಲೇ. ತಾವೇ ದೇವರಿಂದ ಬಂದ ಪರಮ ಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.
- ಪ್ರಭುಕ್ರಿಸ್ತರ ಶುಭಸಂದೇಶ

24.08.24 - “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,”

 ಮೊದಲನೇ ವಾಚನ: ಪ್ರಕಟನೆ 21:9-14

ದೇವದೂತರುಗಳಲ್ಲಿ  ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.  ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;  ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.  ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.  ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.  ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ: 145:10-11, 12-13, 17-18

ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಶುಭಸಂದೇಶ: ಯೊವಾನ್ನ 1:45-51


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.  ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.  ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.