ಮೊದಲನೇ ವಾಚನ: ಯೆರೆಮೀಯ: 17:5-10
ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲ ವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು! ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು. ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ. ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ. ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.
ಶ್ಲೋಕ: 1:1-4, 6
ಕೀರ್ತನೆ: ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I
ದುರ್ಜನರ ಆಲೋಚನೆಯಂತೆ ನಡೆಯದೆ I
ಪಾಪಾತ್ಮರ ಪಥದಲಿ ಕಾಲೂರದೆ I
ಧರ್ಮನಿಂದಕರ ಕೂಟದಲಿ ಕೂರದೆ II
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I
ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II
ನದಿಯ ಬದಿಯಲೇ ಬೆಳೆದಿಹ ಮರದಂತೆ I
ಸಕಾಲಕೆ ಫಲವೀವ ವೃಕ್ಷದಂತೆ I
ಎಲೆಬಾಡದೆ ಪಸಿರಿರುವ ತರುವಂತೆ I
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II
ದುರುಳರಾದರೊ ತೂರಿ ಹೋಗುವರು I
ಬಿರುಗಾಳಿಗೆ ತರಗೆಲೆಯಾಗುವರು II
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II
ಶುಭಸ೦ದೇಶ ಲೂಕ: 16:19-31
ಆ ಕಾಲದಲ್ಲಿ ಯೇಸು ಶಿಷ್ಯರನ್ನುದ್ದೇಶಿಸಿ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಬೆಲೆ ಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನ ನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ. ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು. ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟು ಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು. ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿ ನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ. ‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟು ಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ. ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖ ಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟ ಪಡುತ್ತಿರುವೆ. ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿ ಬರಲೂ ಸಾಧ್ಯವಿಲ್ಲ,’ ಎಂದ. ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು. ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆಕೊಡಲಿ,’ ಎಂದು ಬೇಡಿಕೊಂಡ. ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ. ‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ. ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದು ಬಂದರೂ ಅವರು ನಂಬುವುದಿಲ್ಲ,’ ಎಂದ.
No comments:
Post a Comment