ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

14.06.2025 - ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.

ಮೊದಲನೇ ವಾಚನ: 2 ಕೊರಿಂಥಿಯರಿಗೆ 5:14-21

ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು. ಸರ್ವರಿಗೂ ಯೇಸು ಪ್ರಾಣತ್ಯಾಗಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು. 

ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ. ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದು ಹೋಗುತ್ತದೆ. ಹೊಸದಿದೋ, ಜನ್ಮ ತಳೆದಿದೆ. ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನ ಪಡಿಸಿಕೊಂಡಿದ್ದಾರೆ. ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ. ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ. 

 ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆAದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬoಧವನ್ನು ಪಡೆಯಲೆಂದೇ ಹೀಗೆ ಮಾಡಿದರು. 

ಕೀರ್ತನೆ:103:1-2.3-4.8-10.12-13


ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು

  1.ಭಜಿಸು ನನ್ನ ಮನವೇ,ಭಜಿಸು ಪ್ರಭುವನು 

  ನನ್ನ ಅಂತರoಗವೇ, ಭಜಿಸು ಆತನನು

  ನೆನೆ ಆತನ ಪರಮಪಾವನ ನಾಮವನು 

  ಭಜಿಸು ನನ್ನ ಮನವೇ, ಭಜಿಸು ಪ್ರಭುವನು 

  ಮರೆಯದಿರು ಆತನ ಉಪಕಾರಗಳೊಂದನು

2. ಮನ್ನಿಸುವನಾತ ನನ್ನ ದೋಷಗಳನು 

  ವಾಸಿಮಾಡುವನು ನನ್ನ ರೋಗಗಳನು

  ಉಳಿಸುವನು ಪಾತಾಳದ ಕೂಪದಿಂದ ನನ್ನನು

  ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು 


3. ಪ್ರಭು ದಯಾಳು, ಕೃಪಾಪೂರ್ಣನು 

  ಆತನು ಸದಾ ತಪ್ಪು ಹುಡುಕುವವನಲ್ಲ 

  ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ 

  ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ 

   ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ 

4. ಪಡುವಣದಿಂದ ಮೂಡಣವೆಷ್ಟೋ ದೂರ 

   ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ 

   ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ 

   ಕನಿಕರಿಸುವನಾತ ತನಗೆ ಅಂಜುವವರಿಗೆ 


ಶುಭಸಂದೇಶ: ಮತ್ತಾಯ 5:33-37

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ’ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನ ಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ; ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”

No comments:

Post a Comment