ಮೊದಲನೇ ವಾಚನ: 1 ಥೆಸಲೋನಿಯರಿಗೆ 2:9-13
ಸಹೋದರರೇ, ನಮ್ಮ ಶ್ರಮ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು. ವಿಶ್ವಾಸಿಗಳಾದ ನಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುವುದಕ್ಕೆ ನೀವೇ ಸಾಕ್ಷಿಗಳು. ಮಾತ್ರವಲ್ಲದೆ ದೇವರೂ ಸಾಕ್ಷಿಯೇ. ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು. ಪ್ರೊತ್ಸಾಹಿಸಿದೆವು. ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ. ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.
ಕೀರ್ತನೆ: 139:7-8, 9-10, 11-12
ಶ್ಲೋಕ: ಪ್ರಭೂ, ಪರಿಶೋಧಿಸಿರುವೆ ನೀ ನನ್ನನು, ಅರಿತುಕೊಂಡಿರುವೆ ಅಂತರಂಗವನು
ಶುಭಸಂದೇಶ: ಮತ್ತಾಯ 23:27-32
ಯೇಸು, ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು. "ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ. ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ, ಕಲ್ಮಷಗಳಿಂದ ತುಂಬಿದವರು. ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ. ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. "ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ" ಎಂದುಕೊಳ್ಳುತ್ತೀರಿ. ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿ ಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."
Please send Tommorow gospel readdings
ReplyDelete