03.12.2025 - ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ

ಮೊದಲನೆಯ ವಾಚನ : ಪ್ರವಾದಿ ಯೆರೆಮೀಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ: 1:4-8


ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು:  "ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೆ;  ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರಿಕರಿಸಿದ್ದೆ;  ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ." ಅದಕ್ಕೆ ನಾನು, "ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತು ಬಲ್ಲವನಲ್ಲ, ಇನ್ನೂ ತರುಣ," ಎಂದು ಬಿನ್ನವಿಸಿದೆ.  ಆಗ ಸರ್ವೇಶ್ವರ ನನಗೆ, "ನಾನೊಬ್ಬ ತರುಣ ಎನ್ನಬೇಡ;  ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇ ಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.  ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೆ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು," ಎಂದು ಹೇಳಿದರು.

- ಪ್ರಭುವಿನ ವಾಕ್ಯ

ಕೀರ್ತನೆ 117:1-2 v.   ಮಾರ್ಕ 16:15.

ಶ್ಲೋಕ:  ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


1.  ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ|

ಆತನನ್ನು ಹೊಗಳಿ ಹಾಡಿ ಸರ್ವ ಜನಾಂಗಗಳೇ||

ಶ್ಲೋಕ

 

2.  ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ|

ಆತನ ಸತ್ಯಪರತೆ ಇರುವುದು ಅನಂತ ಕಾಲ||

ಶ್ಲೋಕ


ಎರಡನೆಯ ವಾಚನ :ಪೌಲನು ಕೊರಿಂಥಿಯರಿಗೆ ಬರೆದ ಮೊದಲನೆಯ ಪತ್ರದಿಂದ ಇಂದಿನ ಎರಡನೆಯ ವಾಚನ 9:16-19,22-23


ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ.  ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ.  ಸಾರದಿದ್ದರೆ ನನಗೆ ಧಿಕ್ಕಾರವಿರಲಿ!  ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ.  ಆದುದರಿಂದ ಕರ್ತವ್ಯಬದ್ದನಾಗಿ ಮಾಡುತ್ತಿದ್ದೇನೆ.  ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು?  ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಲಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ. ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ.  ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.  ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ.  ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.  ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ.

ಪ್ರಭುವಿನ ವಾಕ್ಯ

ದೇವರಿಗೆ ಕೃತಜ್ಞತೆ ಸಲ್ಲಲಿ


ಘೋಷಣೆ :ಮತ್ತಾಯ 28:19,20

ಅಲ್ಲೆಲೂಯ, ಅಲ್ಲೆಲೂಯ!

ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ | ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ ||

ಅಲ್ಲೆಲೂಯ!


ಶುಭಸಂದೇಶ : ಮಾರ್ಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 16:15-20


ಆ ಕಾಲದಲ್ಲಿ ಯೇಸು ಹನ್ನೊಂದು ಮಂದಿ ಶಿಷ್ಯರಿಗೆ ಹೀಗೆಂದು ಹೇಳಿದರು:  "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.  ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು.  ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.  ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು; ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು.  ಅವರು ರೋಗಿಗಳ ಮೇಲೆ ಕೈಯಿಟ್ಟರೆ ರೋಗಿಗಳು ಗುಣಹೊಂದುವರು.  " ಎಂದರು ಯೇಸು ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು. ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ.  ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು.

-ಪ್ರಭುವಿನ ಶುಭಸಂದೇಶ

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...