16.10.2026 - IIಶುಕ್ರವಾರ IIನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ

 

ಮೊದಲನೆಯ ವಾಚನ: ರೋಮನರಿಗೆ 4:1-8



ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು, ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ. ಏಕೆಂದರೆ, ಪವಿತ್ರ ಗ್ರಂಥದಲ್ಲಿ ಹೀಗೆ ಹೇಳಿದೆ: " ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು, ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು." ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ, ಅದು ಕಷ್ಟಾರ್ಜಿತ ಸಂಪಾದನೆ. ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರೂ ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು ! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: " ಯಾರ ಅಪರಾಧಗಳು ಪರಿಹರಿಸಲಾಗಿವೆಯೋ, ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು ! ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!"

ಕೀರ್ತನೆ 32:1-2, 5, 11

ಶ್ಲೋಕ: ನೀನೇ ನನಗೆ ಮರೆಯು, ಆಪತ್ತಿನಲಾಸರೆಯು.

ಯಾರ ಪಾಪ ಪರಿಹಾರವಾಗಿದೆಯೋ|
ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು||
ಯಾರಪರಾಧವನು ಪ್ರಭು ಎಣಿಸಿಲ್ಲವೋ|
ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು||

ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು|
ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು||
ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ ಎಂದೆನು|
ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು||

ಸಜ್ಜನರೇ, ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ|
ಯಥಾರ್ಥಚಿತರೇ, ಜಯಕಾರಮಾಡಿ ಆತನ ವಿಷಯದಲಿ||

ಶುಭಸಂದೇಶ: ಲೂಕ 12:1-7


ಆ ಕಾಲದಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, " ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು, ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು, ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು. ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ : ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ : ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿ ಹೇಳುತ್ತೇನೆ. ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ, ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು, " ಎಂದರು.

15.10.2026 - II ಗುರುವಾರII ಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ

 ಮೊದಲನೇ ವಾಚನ: ಎಫೆಸಿಯರಿಗೆ 1:3-10


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ. ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮಗೆ ಲಭಿಸಲಿ! ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ. 

ಕೀರ್ತನೆ:  98:1, 2-3, 3-4, 5-6

ಶ್ಲೋಕ: ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು  

1.  ಹಾಡಿರಿ ಪ್ರಭುವಿಗೆ ಹೊಸ ಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು||
ಆತನ ಬಲಗೈ ಗಳಿಸಿತಾತನಿಗೆ ಗೆಲುವನು||
ಶ್ಲೋಕ

2.  ಪ್ರಕಟಿಸಿಹನು ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು||
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ಶ್ಲೋಕ

3.  ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವ ವಾಧಿಸಿದ ಜಯಗಳಿಕೆ||
ಭೂ ನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ|
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ||
ಶ್ಲೋಕ

4.  ಪ್ರಭುವನ್ನು ಸ್ತುತಿಸಿರಿ ಕಿನ್ನರಿಯೊಂದಿಗೆ|
ಭಜಿಸಿರಿ ಆತನನು ವಾದ್ಯಮೇಳದೊಂದಿಗೆ||
ಊದಿರಿ ಕೊಂಬನು, ತುತ್ತೂರಿಯನು|
ಉದ್ಘೋಷಿಸಿರಿ ಪ್ರಭು ರಾಜನನು||
ಶ್ಲೋಕ

ಘೋಷಣೆ
(ಕೀರ್ತನೆ 148: 13, 14)
ಅಲ್ಲೆಲೂಯ, ಅಲ್ಲೆಲೂಯ.
ಹೊಗಳಲಿ  ಇವರೆಲ್ಲರೂ  ಪ್ರಭುವಿನ  ನಾಮವನು| ಕೋಡುಮೂಡಿಸಿಹನು  ಪ್ರಭು  ತನ್ನ  ಪ್ರಜೆಗೆ ||
ಅಲ್ಲೆಲೂಯ.

ಶುಭಸಂದೇಶ: ಲೂಕ 11:47-54


ಯೇಸು ಧರ್ಮಶಾಸ್ತ್ರಜ್ಞರನ್ನುದ್ದೇಶಿಸಿ ಹೀಗೆಂದರು: "ಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ. ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು. ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.  ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.  ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು. ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ, ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚು ಹಾಕುತ್ತಿದ್ದರು.

14.10.2026 - IIಬುಧವಾರIIನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ

ಮೊದಲನೇ ವಾಚನ: ಗಲಾತ್ಯರಿಗೆ 5:18-25

ಸಹೋದರರೇ, ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ. ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ, ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು. ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ. ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ. ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ. ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ. ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.

ಕೀರ್ತನೆ: 1:1-2, 3, 4, 6

ಶ್ಲೋಕ:  ನಾನೇ  ಜಗಜ್ಯೋತಿ,  ನನ್ನನ್ನು  ಹಿಂಬಾಲಿಸುವವನು  ಕತ್ತಲಲ್ಲಿ  ನಡೆಯುವುದಿಲ್ಲ.

1.  ದುರ್ಜನರ ಆಲೋಚನೆಯಂತೆ ನಡೆಯದೆ|
ಪಾಪಾತ್ಮರ ಪಂಥದಲಿ ಕಲೂರದೆ||
ಧರ್ಮನಿಂದಕರ ಕೂಟದಲಿ ಕೂರದೆ|
ಪ್ರಭುವಿನ ಧರ್ಮಶಾಸ್ತ್ರದದಲಿ ಹರ್ಷಗೊಳ್ಳುವವನಾರೋ ಅವನೇ ಧನ್ಯನು|
ಹಗಲಿರುಳೆನ್ನದೆ ಅದನೇ ಧ್ಯಾನಿಸುತ್ತಿರುವವನಾರೋ  ಅವನೇ ಧನ್ಯನು||
ಶ್ಲೋಕ

2.  ನದಿಯ ಬದಿಯಲೇ ಬೆಳೆದಿಹ ಮರದಂತೆ|
ಸಕಾಲಕೆ ಫಲವೀವ ವೃಕ್ಷದಂತೆ||
ಎಲೆ ಬಾಡದೆ ಪಸಿರಿರುವ   ತರುವಂತೆ|
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ||
ಶ್ಲೋಕ

3.  ದುರುಳರಾದರೋ ತೂರಿಹೋಗುವರು|
ಬಿರುಗಾಳಿಗೆ ತರಗೆಲೆಯಾಗುವರು||
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ|
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ||
ಶ್ಲೋಕ

ಘೋಷಣೆ
(ಕೀರ್ತನೆ 145: 14)
ಅಲ್ಲೆಲೂಯ, ಅಲ್ಲೆಲೂಯ.
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು| ನಡೆಯಲಿ  ಆತನು  ಸದಾ  ಪ್ರೀತಿಮಯನು||
ಅಲ್ಲೆಲೂಯ.

ಶುಭಸಂದೇಶ: ಲೂಕ 11:42-46

ಯೇಸುಸ್ವಾಮಿ ಫರಿಸಾಯರನ್ನುದ್ದೇಶಿಸಿ ಹೀಗೆಂದರು: “ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು. “ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು. ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು. ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ," ಎಂದರು.  

13.10.2026 - ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟ ಮೊದಲು ದಾನಮಾಡಿರಿ.

  ಮೊದಲನೇ ವಾಚನ: ಗಲಾತ್ಯರಿಗೆ 5:1-6

ಹೌದು ಪ್ರಿಯ ಸಹೋದರರೇ, ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ. ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ. ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ. ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.

ಕೀರ್ತನೆ: 119:41, 43, 44, 45, 47, 48

ಶ್ಲೋಕ: ದೊರಕಲಿ ಪ್ರಭೂ ನನಗೆ, ನಿನ್ನ ಕರುಣೆ. 


ಶ್ಲೋಕ:   ದೊರಕಲಿ  ಪ್ರಭೂ  ನನಗೆ,  ನಿನ್ನ  ಕರುಣೆ.

1. ದೊರಕಲಿ ಪ್ರಭೂ ನನಗೆ ನಿನ್ನ ಕರುಣೆ|
ನೀನು ವಾಗ್ದಾನ ಮಾಡಿದ ರಕ್ಷಣೆ||
ತೆಗೆಯಬೇಡ ನನ್ನ ಬಾಯಿಂದ ಸತ್ಯವನು|
ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು||
ಶ್ಲೋಕ

2.  ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ|
ಯುಗಯುಗಾಂತರಕು ಅದನು ಪರಿಪಾಲಿಸುವೆ||
ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ|
ಎಂತಲೇ ಆತಂಕವಿಲ್ಲದೆ ನಡೆದೆ||
ಶ್ಲೋಕ

3.  ನಿನ್ನ ಆಜ್ಞೆಗಳಲಿದೆ ನನಗಾನಂದ|
ಅವುಗಳ ಮೇಲೆಯೇ ನನಗಭಿಮಾನ||
ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೇ|
ನನಗೆ ಪ್ರಿಯ, ಧ್ಯಾನರ್ಹ, ನಿನ್ನ  ನಿಬಂಧನೆ||
ಶ್ಲೋಕ

ಘೋಷಣೆ
(ಕೀರ್ತನೆ 130:5)
ಅಲ್ಲೆಲೂಯ, ಅಲ್ಲೆಲೂಯ!
ಪ್ರಭುವಿಗಾಗಿ  ಎನ್ನ  ಮನ  ಕಾದಿದೆ | ಆತನ  ವಾಕ್ಯದಲಿ  ನಂಬಿಕೆ  ನನಗಿದೆ ||
ಅಲ್ಲೆಲೂಯ!

ಶುಭಸಂದೇಶ: ಲೂಕ 11:37-41


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು. ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ. ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ? ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.

12.10.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ

 ಮೊದಲನೇ ವಾಚನ: ಗಲಾತ್ಯರಿಗೆ4:22-24, 26-27, 31--5:1

ಸಹೋದರರೇ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು. ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು. ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು. ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ. “ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು. ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.

ಕೀರ್ತನೆ: 113:1-2, 3-4, 5, 6-7

ಶ್ಲೋಕ: ಪ್ರಭುವಿನ ಸಿರಿನಾಮವು ಇಂದಿಗೂ ಎಂದೆಂದಿಗೂ ಪೂಜ್ಯ. 

1.  ಪ್ರಭುವಿನ ದಾಸರೇ, ಸ್ತುತಿಮಾಡಿ|
ಪ್ರಭುವಿನ ನಾಮಸ್ತುತಿಯನ್ನು ಮಾಡಿ||
ಪ್ರಭುವಿನ ಸಿರಿ ನಾಮವು ಪೂಜ್ಯ|
ಇಂದಿಗೂ ಎಂದೆಂದಿಗೂ ಪೂಜ್ಯ||
ಶ್ಲೋಕ

2.  ಪ್ರಭುವಿನ ಸಿರಿ ನಾಮವು ಸ್ತುತ್ಯ|
ಪೂರ್ವ ಪಶ್ಚಿಮದವರೆಗೂ ಸ್ತುತ್ಯ||
ಸಕಲ ಜಾತಿ ಜನಾಂಗಗಳಲ್ಲಿ ಪ್ರಭು ಶ್ರೇಷ್ಠ|
ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ||
ಶ್ಲೋಕ

3.  ನಮ್ಮ ಪ್ರಭು ದೇವರಂತೆ ಯಾರು ಸಮರ್ಥ್ಯ?|
ಉನ್ನತದಲ್ಲಿ ಆಸನರೂಢನು ಆತ||
ದೀನರನ್ನು ಎಬ್ಬಿಸುವನು ಧೂಳಿನಿಂದ|
ಬಡವರನು ಎತ್ತುವನು ತಿಪ್ಪೆಯಿಂದ||
ಶ್ಲೋಕ

ಘೋಷಣೆ

(ಕೀರ್ತನೆ 119: 135)
ಅಲ್ಲೆಲೂಯ, ಅಲ್ಲೆಲೂಯ.
ತೋರು  ನಿನ್ನ  ಮುಖದರ್ಶನ  ಈ  ದಾಸನಿಗೆ| ನೀ  ಕಲಿಸು ನಿನ್ನ ನಿಬಂಧನೆಗಳನು ಎನಗೆ||
ಅಲ್ಲೆಲೂಯ.

ಶುಭಸಂದೇಶ: ಲೂಕ 11:29-32


ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.  ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.  ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

11.10.2026 - IIಸಾಧಾರಣ ಕಾಲದ 28ನೇ ಭಾನುವಾರIIಆದರೂ ಆಹ್ವಾನಿತರು ಅಲಕ್ಷ್ಯ ಮಾಡಿದರು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 25:6-10

ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು. ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು."

ಕೀರ್ತನೆ: 23:1-3, 3-4, 5, 6

ಶ್ಲೋಕ: ದೇವರ ಮಂದಿರದಲಿ ನಾವಾಸಿಸುವೆ ಚಿರಕಾಲವೆಲ್ಲ  

ಎರಡನೇ ವಾಚನ: ಫಿಲಿಪ್ಪಿಯರಿಗೆ 4:12-14, 19-20

ಸಹೋದರರೇ, ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ. ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ. ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ. ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!

ಶುಭಸಂದೇಶ:  ಮತ್ತಾಯ 22:1-14


ಯೇಸುಸ್ವಾಮಿ ಮುಖ್ಯ ಯಾಜಕರೊಂದಿಗೂ ಫರಿಸಾಯರೊಂದಿಗೂ  ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ. ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ. ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು. ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. “ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ. ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ. ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

10.10.2026 - ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು

 ಮೊದಲನೇ ವಾಚನ: ಗಲಾತ್ಯರಿಗೆ 3:22-29


ಸಹೋದರರೇ, ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ. ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು. ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು. ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ. ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ. ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ. ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.

ಕೀರ್ತನೆ: 105:2-3, 4-5, 6-7

ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು 

1.  ಧ್ಯಾನಿಸಿ ನೀವು ಆತನ ಪವಾಡಗಳನು|
ಹೆಮ್ಮೆಪಡಿ, ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನು ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ, ಅಬ್ರಹಾಮನ ಸಂತತಿಯವರೇ|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.ನೆನೆಯಿರಿ ಆತನದ್ಬುತಗಳನು, ಮಹತ್ಕಾರ್ಯಗಳನು|
ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು||
ಪ್ರಭು ನಮ್ಮ ದೇವರೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ
(ಕೀರ್ತನೆ 119:105)
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ವಾಕ್ಯ  ನನಗೆ  ದಾರಿದೀಪ | ನನ್ನ  ಕಾಲಿನ  ನಡೆಗೆ  ಕೈದೀಪ ||
ಅಲ್ಲೆಲೂಯ!


ಶುಭಸಂದೇಶ: ಲೂಕ 11:27-28

ಯೇಸುಸ್ವಾಮಿ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು. ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.

09.10.2026 - ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ

 ಮೊದಲನೇ ವಾಚನ: ಗಲಾತ್ಯರಿಗೆ 3:7-14


ಸಹೋದರರೇ, ಯಾರು ವಿಶ್ವಾಸದಿಂದ ಜೀವಿಸುತ್ತಾರೋ ಅವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿ. ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು. ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು. ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ. ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ. ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ. ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು. ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.

ಕೀರ್ತನೆ: 111:1-2, 3-4, 5-6

ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ 

1.  ಸಜ್ಜನರ ಸಂಘದೊಳು ಸಭಾಸದಸ್ಯರೊಳು ಕೂಡಿ| 
ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ||
ಮಹತ್ತಾದವು ಪ್ರಭುವಿನಾ ಕಾರ್ಯಗಳು|
ಕೊಂಡಾಡುವರು ಅವುಗಳನ್ನು ಭಕ್ತಾದಿಗಳು||
ಶ್ಲೋಕ

2.  ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ|
ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ|| ಆತನ ಅದ್ಭುತ ಕಾರ್ಯ ಸ್ಮರಣೀಯ|
ಕರುಣಾವಂತ ಪ್ರಭು, ಪ್ರೀತಿಮಯ||
ಶ್ಲೋಕ

3.  ಆಹಾರವನ್ನೀಯುವನು ಭಯಭಕ್ತಿಯುಳ್ಳವರಿಗೆ|
ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ||
ತನ್ನ ಪ್ರಜೆಗಿತ್ತಿಹನು ಅನ್ಯ ಜನರ ಸೊತ್ತನು|
ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು||
ಶ್ಲೋಕ

ಘೋಷಣೆ
(ಕೀರ್ತನೆ 119: 88)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನಚಲ  ಪ್ರೀತಿಗನುಸಾರ  ಚೈತನ್ಯಗೊಳಿಸೆನ್ನನು| ಕೈಗೊಳ್ಳುವೆನಾಗ  ನಿನ್ನ  ಬಾಯುಸುರಿದ  ಕಟ್ಟಳೆಗಳನು||
ಅಲ್ಲೆಲೂಯ.


ಶುಭಸಂದೇಶ: ಲೂಕ 11:15-26


ಜನರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು. ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು. ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ. “ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸುಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ. ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ,” ಎಂದರು. ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ. ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ. ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.

08.10.2026 - ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ

 ಮೊದಲನೇ ವಾಚನ: ಗಲಾತ್ಯರಿಗೆ 3:1-5


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ? ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ? ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ? ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ? ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.

ಲೂಕ: 1:69-70, 71-72, 73-75

ಶ್ಲೋಕ: ಸ್ತುತಿಸ್ತೋತ್ರ ಇಸ್ರಯೇಲಿನ  ದೇವರಾದ ಸರ್ವೇಶ್ವರನಿಗೆ 

1.  ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು|
ನಮಗೊಬ್ಬ ಶಕ್ತಿಯುತ ಮುಕ್ತಿದಾತನನು||
ಪುರಾತನ ಕಾಲದಿಂದಲೇ, ಪೂಜ್ಯ ಪ್ರವಾದಿಗಳ ಬಾಯಿಂದಲೇ|
ಅರುಹಿಸಿರುವನು ಇಂತೆಂದು ನಮಗೆ||
ಶ್ಲೋಕ

2.  ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ|
ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ|
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು|
ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು||
ಶ್ಲೋಕ

3.  ಪಿತಾಮಹ  ಅಬ್ರಹಾಮನಿಗಿತ್ತ  ಮಾತಿಗನುಸಾರ|
ನಮಗಿತ್ತಿರುವರು  ಶತ್ರುಗಳಿಂದ  ರಕ್ಷಿಸುವನೆಂಬ  ಅಭಯ||
ಶ್ಲೋಕ

ಘೋಷಣೆ

(ಕೀರ್ತನೆ 119:36,29)

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಕಟ್ಟಳೆಯ  ಕಡೆ  ಎನ್ನ  ಮನವ  ತಿರುಗಿಸಯ್ಯಾ | ಧರ್ಮಶಾಸ್ತ್ರವನು  ಎನಗೆ  ಅನುಗ್ರಹಿಸಯ್ಯಾ ||
ಅಲ್ಲೆಲೂಯ!

ಶುಭಸಂದೇಶ: ಲೂಕ 11:5-13

ಯೇಸುಸ್ವಾಮಿ ಶಿಷ್ಯರಿಗೆ ಹೀಗೆಂದರು: “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು, ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ? ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’ “ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ?  ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?  ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

07.10.2026 - IIಬುಧವಾರIIನೀವು ಹೀಗೆ ಪ್ರಾರ್ಥನೆ ಮಾಡಬೇಕು

 ಮೊದಲನೇ ವಾಚನ: ಗಲಾತ್ಯರಿಗೆ 2:1-2, 7-14


ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ. ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ. ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು. ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ. ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು. ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು. ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.  ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.  ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.  ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.

ಕೀರ್ತನೆ: 117:1, 2

ಶ್ಲೋಕ: ವಿಶ್ವದ ಎಲ್ಲೆಡೆಗಳಿಗೂ ಹೋಗಿ ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ. 

1.  ಸ್ತುತಿಮಾಡಿ  ಪ್ರಭುವನ್ನು  ಸಮಸ್ತ  ರಾಷ್ಟ್ರಗಳೇ|
ಆತನನು  ಹೊಗಲಿ  ಹಾಡಿ  ಸರ್ವ  ಜನಾಂಗಗಳೇ||
ಶ್ಲೋಕ

2.  ನಮ್ಮ  ಮೇಲೆ  ಆತನಿಗಿರುವ  ಪ್ರೀತಿ  ಅಚಲ|
ಆತನ  ಸತ್ಯಪರತೆ  ಇರುವುದು  ಅನಂತ  ಕಾಲ||
ಶ್ಲೋಕ

ಘೋಷಣೆ:   ಕೀರ್ತನೆ 119:33
ಅಲ್ಲೆಲೂಯ, ಅಲ್ಲೆಲೂಯ!
ನೀಡೆನಗೆ  ನಿನ್ನ  ಶಾಸ್ತ್ರದ  ಅರಿವನು | ಪೂರ್ಣಮನದಿಂದ  ಆಚರಿಸುವೆನದನು ||
ಅಲ್ಲೆಲೂಯ!


ಶುಭಸಂದೇಶ: ಲೂಕ11:1-4


ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆ ಮಾಡಬೇಕು: ತಂದೆಯೇ, ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ. ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ. ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”

06.10.2026 - IIಮಂಗಳವಾರIIಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ

 ಮೊದಲನೇ ವಾಚನ: ಗಲಾತ್ಯರಿಗೆ1:13-24

ಸಹೋದರರೇ, ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.  ಇದಲ್ಲದೆ, ನಾನು ನನ್ನ ಪೂರ್ವಜರ ಮತ ಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ. ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.  ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.  ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.  ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.  ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.  ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ. ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.  ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.  ‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.  ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು. 

ಕೀರ್ತನೆ: 139:1-3, 13-14, 14-15

ಶ್ಲೋಕ: ಪ್ರಭೂ, ನಡೆಸೆನ್ನನು ಆ ಸನಾತನ ಪಥದಲಿ 

1.  ಪ್ರಭೂ, ಪರಿಶೋದಿಸಿರುವೆ ನೀ ನನ್ನನು|
ಅರಿತುಕೊಂಡಿರುವ ಅಂತರಂಗವನು||
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ|
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯೆಲ್ಲವೂ ನಿನಗೆ ಸುಪರಿಚಿತ||
ಶ್ಲೋಕ

2.  ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು||
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
ಶ್ಲೋಕ

3.  ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ|
ನನ್ನ ಅಸ್ಥಿಪಂಜರವನು ರೂಪಿಸುವಾಗ|
ತಾಯ ಗರ್ಭದೊಳು ಅಚ್ಚರದಿ ರಚಿಸುವಾಗ||
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|
ಮರೆಯಾಗಲಿಲ್ಲ ನಾನು ನಿನಗಾಗ||
ಶ್ಲೋಕ

ಘೋಷಣೆ
(ಕೀರ್ತನೆ 119:27)
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ನಿಯಮಗಳ  ಪಥವನೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ!

ಶುಭಸಂದೇಶ: ಲೂಕ 10:38-42


ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.  ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.  ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.  ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.

05.10.2026 - IIಸೋಮವಾರII - ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು

 ಮೊದಲನೇ ವಾಚನ: ಗಲಾತ್ಯರಿಗೆ 1:6-12


ಕ್ರಿಸ್ತ ಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.  ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ. ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ! ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ. ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ. ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.  ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸು ಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.

ಕೀರ್ತನೆ: 111:1-2, 7-8, 9, 10

ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ 

1.  ಸಜ್ಜನರ ಸಂಘದೊಳು ಸಭಾಸದಸ್ಯರೊಳು ಕೂಡಿ|
ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ||
ಮಹತ್ತಾದವು ಪ್ರಭುವಿನಾ ಕಾರ್ಯಗಳು|
ಕೊಂಡಾಡುವರು ಅವುಗಳನ್ನು ಭಕ್ತಾದಿಗಳು||
ಶ್ಲೋಕ

2.  ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು|
ಸುಸ್ಥಿರವಾದವು ಆತನ ನಿಯಮನಿಬಂಧನೆಗಳು||
ಯುಗಯುಗಾಂತರಕು ದೃಢವಾಗಿರುವುವು|
ಸತ್ಯ ನೀತಿಗಳು ಅವುಗಳಿಗೆ ಅಡಿಪಾಯವು||
ಶ್ಲೋಕ
3.  ವಿಮೋಚನೆಯನಿಹನು ಪ್ರಭು ತನ್ನ ಪ್ರಜೆಗೆ|
ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ||
ಪರಿಶುದ್ಧ, ಪರಮ ಪೂಜ್ಯ ಆತನ ನಾಮಾಂಕೆ|
ಪ್ರಭುವಿಗೆ ಸ್ತೋತ್ರ ಸದಾಕಾಲವು||
ಶ್ಲೋಕ

ಘೋಷಣೆ
(ಕೀರ್ತನೆ 119:18)
ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಶಾಸ್ತ್ರದ  ಮಹಿಮೆಯನು ಅರಿಯುವಂತೆ | ನನ್ನ  ಕಣ್ಣುಗಳಿಂದ  ನೀ  ತೆಗೆದುಬಿಡು  ಅಂಧತೆ ||
ಅಲ್ಲೆಲೂಯ!

ಶುಭಸಂದೇಶ: ಲೂಕ 10:25-37

ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.  ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.  ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.  ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.  ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.  ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.  ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.  ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,  ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.  ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.  “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, “ದಯೆ ತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.

04.10.2026 - IIಸಾಧಾರಣ ಕಾಲದ ಇಪ್ಪತ್ತೇಳನೇ ಭಾನುವಾರII 'ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು

ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ಮೊದಲನೆಯ ವಾಚನ 5:1-7


"ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ"
ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು 
ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು:
ಪ್ರಿಯತಮನಿಗೆ ಮತ್ತೊಂದು ದ್ರಾಕ್ಷಿಯ ತೋಟ 
ಫಲವತ್ತಾಗಿಹ ಗುಡ್ಡದ ಮೇಲಿನ ತೋಟ.
ಆರಿಸಿ ಎಸೆದನು ಕಲ್ಲುಮುಳ್ಳುಗಳನು 
ಅಗೆದು ಹದಮಾಡಿದನಾತ ಗುಡ್ಡವನು.
ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು 
ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು 
ಕಟ್ಟಿದನು ಅದರೊಳಗೆ ಆಲೆಯೊಂದನು.
ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು,
ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು!
ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ:
"ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.  ನನ್ನ ತೋಟಕ್ಕಾಗಿ ನಾನು ಮಾಡಿದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು?  ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:
ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ.
ಕೆಡವಿ ಹಾಕುವೆನು ಅದರ ಗೋಡೆಯನು; ಈಡಾಗುದದು ಪರರ ತುಳಿದಾಟಕ್ಕೆ.  ಬಂಜರು ಭೂಮಿಯಾಗಿಸುವೆನು ಅದನ್ನು;
ಕುಡಿಕತ್ತರಿಸುವರಾರೂ ಇರರು ಅದಕ್ಕೆ.  ಮುಳ್ಳುಕಳೆ ಬೆಳೆಯುವುದು ಅದರೊಳಗೆ.  ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.  ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ.
ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ.
ನ್ಯಾಯನೀತಿಯನು ನಿರೀಕ್ಷಿಸಿದನಾತ, ಆದರೆ ಸಿಕ್ಕಿತವನಿಗೆ ರಕ್ತಪಾತ!
ಸತ್ಸಂಬಂಧವನು ಎದುರುನೋಡಿದನಾತ, ಇಗೋ ದಕ್ಕಿತವನಿಗೆ ದುಃಖಿತರ ಆರ್ತನಾದ!

ಕೀರ್ತನೆ

ಶ್ಲೋಕ:  ಅನುಗ್ರಹಿಸಿದನು ಪ್ರಭು ಸ್ವರ್ಗದ ದವಸಧಾನ್ಯವನು|

1.  ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ|
ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ||
ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ|
ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ||
ಶ್ಲೋಕ

2.  ಕಿತ್ತು ಹಾಕಿದೆಯೇಕೆ ಅದರ ಬೇಲಿಯನು?|
ತರಿದು ಬಿಡುವವರಲ್ಲವೆ ದಾರಿಗರು ಅದನು?||
ನಾಶಮಾಡುವುವು ಅದನು ಕಾಡಹಂದಿಗಳು|
ತಿಂದುಹಾಕುವುವು ಅದನು ಅರಣ್ಯ  ಮೃಗಗಳು||
ಶ್ಲೋಕ

3.  ಸರ್ವಶಕ್ತನಾದ ದೇವರೇ, ಮರಳಿ ಮುಖತೋರಿಸು|
ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು||
ಕಾಪಾಡು, ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು|
ಕಾದಿರಿಸು, ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು||
ಶ್ಲೋಕ

4.  ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು|
ಪನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು||
ಸರ್ವಶಕ್ತನಾದ ದೇವನೇ, ಉದ್ಧರಿಸು ನಮ್ಮನು|
ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು||
ಶ್ಲೋಕ

ಎರಡನೆಯ ವಾಚನ : ಪೌಲನು ಫಿಲಿಪ್ಪಿಯರಿಗೆ ಬರೆದ ಪತ್ರದಿಂದ ಇಂದಿನ ಎರಡನೆಯ ವಾಚನ 4:6-9


ಸಹೋದರರೇ, ಯಾವ ವಿಷಯದಲ್ಲಿ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ.  ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.  ಆಗ ಮನುಷ್ಯಗೃಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.  ಕಡೆಯದಾಗಿ ಸಹೋದರರೇ,  ಯಾವುದು ಸತ್ಯವು - ಮಾನ್ಯವು,  ನ್ಯಾಯವು - ಶುದ್ಧವು,  ಪ್ರೀತಿಕರವು - ಮನೋಹರವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.  ನೀವು ನನ್ನಿಂದ ಕಲಿತವು ಹಾಗು ಅರಿತವುಗಳನ್ನು, ಕೇಳಿದೆವು ಹಾಗು ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ.  ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.
ಪ್ರಭುವಿನ ವಾಕ್ಯ
ದೇವರಿಗೆ ಕೃತಜ್ಞತೆ ಸಲ್ಲಲಿ

ಘೋಷಣೆ
(ಯೊವಾನ್ನ 17:17)
ಅಲ್ಲೆಲೂಯ ಅಲ್ಲೆಲೂಯ!
ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ | ನಿಮ್ಮ ಮಾತೆ ಸತ್ಯ ||
ಶ್ಲೋಕ

ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 21:33-43


ಆ ಕಾಲದಲ್ಲಿ ಯೇಸು ಮುಖ್ಯಯಾಜಕರಿಗೂ ಹೀಗೆಂದರು:
"ಇನ್ನೊಂದು ಸಾಮತಿಗೆ ಕಿವಿಗೊಡಿ:  ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ.  ಅದರ ಸುತ್ತ ಬೇಲಿಯನ್ನು ಹಾಕಿಸಿದ.  ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ.  ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.  ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.  ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.  ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ.  ಅವರಿಗೂ ಅದೇ ಗತಿಯಾಯಿತು.  ಕಟ್ಟಕಡೆಗೆ ಯಜಮಾನ, 'ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು' ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ.  ಆದರೆ ಗೇಣಿದಾರರು ಮಗನನ್ನು ಕಂಡೊಡನೇ, 'ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ.  ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ, 'ಎಂದು ತಮ್ಮತಮ್ಮಲ್ಲೇ ಒಳಸಂಚು ಮಾಡಿಕೊಂಡರು.  ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದುಹಾಕಿದರು.
ಈಗ ನೀವೇ ಹೇಳಿ:  ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನು ಮಾಡುವನು?  "ಎಂದು ಯೇಸು ಕೇಳಿದರು.  "ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು.  ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು, "ಎಂದು ಅಲ್ಲಿದ್ದವರು ಉತ್ತರ ಕೊಟ್ಟರು.  ಬಳಿಕ ಯೇಸು ಇಂತೆಂದರು:  " 'ಮನೆಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು!  ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ ! 'ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?  ಆದುದರಿಂದ ನಾನು ನಿಮಗೆ ಹೇಳುತ್ತೇನೆ, 'ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು."

03.10.2026 - II ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿII

ಮೊದಲನೇ ವಾಚನ: ಯೋಬನ ಗ್ರಂಥ  42:1-3, 5-6, 12-16 


ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು: “ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ. ‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ. ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ. ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.” ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.  ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.  ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.  ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.  ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು. ಹಣ್ಣು ಹಣ್ಣು ಮುದುಕನಾಗಿ ಸತ್ತನು.  

ಕೀರ್ತನೆ: 119:66, 71, 75, 91, 125, 130 

ಶ್ಲೋಕ: ಪ್ರಭೂ, ತೋರು ನಿನ್ನ ಮುಖದರ್ಶನ ಈ ದಾಸನಿಗೆ

1.  ಸುಜ್ಞಾನ ವಿವೇಕಗಳನು ಕಲಿಸೆನಗೆ|
ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ||
ಕಷ್ಟಾನುಭವವು  ಆಯಿತೆನಗೆ ಹಿತಕರ|
ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ||
ಶ್ಲೋಕ

2.  ನಾ ಬಲ್ಲೆ ಪ್ರಭೂ, ನಿನ್ನ ವಿಧಿಗಳು ನೀತಿಯುತವೆಂದು|
ಕಷ್ಟಕ್ಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು||
ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ|
ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ||
ಶ್ಲೋಕ

3.  ನಿನ್ನ ದಾಸ ನಾನು,ದಯಪಾಲಿಸು ಎನಗೆ|
ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ||
ತರುವುದು ನಿನ್ನ ವಾಕ್ಯೋಪದೇಶ|
ಸರಳ ಜನರಿಗೆ ಜ್ಞಾನಪ್ರಕಾಶ||
ಶ್ಲೋಕ

ಘೋಷಣೆ
(ಕೀರ್ತನೆ 111:7,8)
ಅಲ್ಲೆಲೂಯ, ಅಲ್ಲೆಲೂಯ!
ಸುಸ್ಥಿರವಾದವು  ಆತನ   ನಿಯಮನಿಬಂಧನೆಗಳು | ಯುಗಯುಗಾಂತರಕು  ದೃಢವಾಗಿರುವುವು ||
ಅಲ್ಲೆಲೂಯ!

ಶುಭಸಂದೇಶ: ಲೂಕ 10:17-24 


"ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿದೆ ಎಂದು ಸಂತೋಷ ಪಡಿ," ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.  ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.  ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.  ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು. ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.  ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.  ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.  ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

16.10.2026 - IIಶುಕ್ರವಾರ IIನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ

  ಮೊದಲನೆಯ ವಾಚನ: ರೋಮನರಿಗೆ 4:1-8 ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ...