ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15
ಸಹೋದರರೇ, ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. “ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ. ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.
ಕೀರ್ತನೆ: 126:1-2, 2-3, 4-5, 6
ಶ್ಲೋಕ: ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು.
1. ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ|
ಅದೊಂದು ಕನಸು ಕಂಡಂತಿತ್ತು ನಮಗೆ ಅವಾಗ|
ಉಕ್ಕಿತಾಗ ಮುಖ ತುಂಬ ನಗು, ಬಾಯ್ತುಂಬ ಹರ್ಷಗೀತೆ||
ಶ್ಲೋಕ
2. ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ|
ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯ ಜನತೆ||
ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ|
ಎಂತಲೆ ನಾವಾನಂದಭರಿತರಾಗುವುದು ಉಚಿತ||
ಶ್ಲೋಕ
3. ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ|
ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ|
ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು||
ದುಃಖಿಸುತಾ ಬೀಜ ಬಿತ್ತಲು ಹೋದವನು|
ಹರ್ಷಿಸುತಾ ಕೊಯ್ದು ತರುವನು ತೆನೆಗಳನು||
ಶ್ಲೋಕ
ಘೋಷಣೆ
(ಯೊವಾನ್ನ 15:16)
ಅಲ್ಲೆಲೂಯ, ಅಲ್ಲೆಲೂಯ!
ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಲೋಕಕ್ಕೆ ಹೋಗಬೇಕು ಸಫಲರಾಗಬೇಕು | ಆ ಫಲ ಶಾತ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ ||
ಅಲ್ಲೆಲೂಯ!
ಶುಭಸಂದೇಶ: ಮತ್ತಾಯ: 20:20-28
ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


No comments:
Post a Comment